ಬೆಂಗಳೂರು ಗ್ರಾಮಾಂತರ

ಸಾರ್ವಜನಿಕ ಹಿತಾಸಕ್ತಿ ಅರ್ಜಿ ದುರುಪಯೋಗ; 'ಹೈ' ಗರಂ

Published On :

ಬೆಂಗಳೂರು: ಹೈಕೋರ್ಟ್ಅನ್ನು ಜನರು ಎರಡನೇ ಪೊಲೀಸ್ ಠಾಣೆ ಎಂದು ಭಾವಿಸಿದಂತಿದೆ. ತಿರಸ್ಕೃತಗೊಂಡ ಅರ್ಜಿಯನ್ನು ಮತ್ತೊಮ್ಮೆ ಸಲ್ಲಿಸಿ ತಮ್ಮದೇ ಕಥೆ ಸೃಷ್ಟಿಸಲು ಇದನ್ನು ವೇದಿಕೆಯಾಗಿ ಪರಿಗಣಿಸಿದಂತಿದೆ...
ದುರುಪಯೋಗವಾಗುತ್ತಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಕುರಿತು ಹೈಕೋರ್ಟ್ ವ್ಯಕ್ತಪಡಿಸಿದ ಅಸಮಾಧಾನದ ಪರಿ ಇದು.
ಲೋಕಾಯುಕ್ತ ನ್ಯಾಯಾಲಯದಲ್ಲಿ ದೂರು ವಜಾಗೊಂಡಿದ್ದರೂ ಅದನ್ನು ಮತ್ತೊಮ್ಮೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೆಸರಿನಲ್ಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ ಅರ್ಜಿದಾರರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಮುಖ್ಯ ನ್ಯಾ.ಡಿ.ಎಚ್. ವಘೇಲ ಹಾಗೂ ನ್ಯಾ.ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ಪೀಠ, ಅರ್ಜಿದಾರರ ಆರೋಪಗಳೇನು ಎಂಬುದನ್ನು ಸ್ಪಷ್ಟಪಡಿಸದಿದ್ದಲ್ಲಿ ಹೆಚ್ಚಿನ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.
ಜಿ.ಟಿ. ದೇವೇಗೌಡ 2008ರಲ್ಲಿ ಕರ್ನಾಟಕ ಹೌಸಿಂಗ್ ಬೋರ್ಡ್ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಮೈಸೂರಿನ ಕಸೂರು ಹಾಗೂಯಲಚೇನಹಳ್ಳಿ ಗ್ರಾಮಗಳಲ್ಲಿ ನೂರಾರು ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ, ಅದಕ್ಕೂ ಮುನ್ನ ಸ್ವಾಧೀನಪಡಿಸಿಕೊಂಡಿದ್ದ ಭೂಮಿಯಲ್ಲಿ ಯಾವುದೇ ಕಾಮಗಾರಿ ನಡೆಸಿಲ್ಲ. ಅಲ್ಲದೆ, ಸಂಪೂರ್ಣ ಭೂಸ್ವಾಧೀನಕ್ಕೆ ಮುನ್ನವೇ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದೆ ಎಂದು ಆರೋಪಿಸಿ ಅರ್ಜಿ ಸಲ್ಲಿಕೆಯಾಗಿತ್ತು.
ವಿಚಾರಣೆ ಸಂದರ್ಭದಲ್ಲಿ ಪ್ರತಿವಾದಿ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರು ಓರ್ವ ವಕೀಲರಾಗಿದ್ದು, ಅರ್ಜಿಯಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ ಎಂಬ ವಿಷಯವನ್ನು ಪೀಠದ ಗಮನಕ್ಕೆ ತಂದರು. ಆಗ ಪೀಠ, ಅರ್ಜಿಯ ಪ್ರಮುಖ ಆರೋಪಗಳೇನು ಎಂದು ಪ್ರಶ್ನಿಸಿತು. ಇದಕ್ಕೆ ಸೂಕ್ತ ಉತ್ತರ ನೀಡಲು ಅರ್ಜಿದಾರರು ಅಸಮರ್ಥರಾದರು.
ಇದನ್ನು ಗಂಭೀರವಾಗಿ ಪರಿಗಣಿಸಿದ ಪೀಠ, ಇದು ನ್ಯಾಯಾಂಗದ ಪ್ರಕ್ರಿಯೆಗೆ ಮಾಡುತ್ತಿರುವ ಅವಮಾನ. ಅರ್ಜಿದಾರರಿಗೆ ತಮ್ಮ ಅರ್ಜಿಯ ವಿಷಯವೇನು ಎಂಬುದೇ ತಿಳಿದಿಲ್ಲ ಎಂದರೆ ಅವರು ನ್ಯಾಯಾಲಯವನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ ಎಂಬುದು ಸ್ಪಷ್ಟವಾಗುತ್ತದೆ. ಹೈಕೋರ್ಟ್ಅನ್ನು ಎರಡನೇ ಪೊಲೀಸ್ ಠಾಣೆ ಎಂದು ಪರಿಗಣಿಸಲಾಗಿದೆ. ಇದನ್ನು ವಕೀಲರು ತಮ್ಮ ವಾದ ಮಂಡನೆಯ ಪ್ರಯೋಗಕ್ಕೆ ವೇದಿಕೆಯಾಗಿ ಪರಿಗಣಿಸುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆಯಲ್ಲ ಎಂದು ಪೀಠ ಎಚ್ಚರಿಕೆ ನೀಡಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.