'ಬೆಲೆಯೇರಿಕೆ, ಮಹಿಳಾ ದೌರ್ಜನ್ಯ ತಡೆಗೆ ಕೇಂದ್ರ, ರಾಜ್ಯ ಸರ್ಕಾರ ವಿಫಲ'
ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ರಾಜ್ಯಾಧ್ಯಕ್ಷೆ ಗೌರಮ್ಮ ಟೀಕೆ
ಕ.ಪ್ರ.ವಾರ್ತೆ ರಾಮನಗರ ಜೂ.27
ಬೆಲೆ ಏರಿಕೆ, ಭ್ರಷ್ಟಾಚಾರ, ಮಹಿಳೆಯರ ವಿರುದ್ಧದ ದೌರ್ಜನ್ಯ ತಡೆಗಟ್ಟುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿವೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ರಾಜ್ಯಾಧ್ಯಕ್ಷೆ ಗೌರಮ್ಮ ಟೀಕಾ ಪ್ರಹಾರ ನಡೆಸಿದರು.
ನಗರದ ಸ್ಫೂರ್ತಿ ಭವನದಲ್ಲಿ ಗುರುವಾರ ನಡೆದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಮನಗರ ತಾಲೂಕು ಪ್ರಥಮ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಿತಿ ಮೀರಿರುವ ಮಹಿಳಾ ದೌರ್ಜನ್ಯ ತಡೆಯುವಲ್ಲಿ ಆಳುವ ವರ್ಗ ವಿಫಲವಾಗಿದೆ ಎಂದು ಟೀಕಿಸಿದರು.
ಅತ್ಯಾಚಾರದಂತಹ ಪ್ರಕರಣಗಳಿಗೆ ಕಡಿವಾಣ ಹಾಕಬೇಕು. ಮಹಿಳೆಯರ ಸಬಲೀಕರಣಕ್ಕಾಗಿ ಸೂಕ್ತ ಯೋಜನೆ ರೂಪಿಸಬೇಕು. ನಿವೇಶನ ರಹಿತರಿಗೆ ನಿವೇಶನ, ಸೂರಿಲ್ಲದವರಿಗೆ ಸೂರು ಕಲ್ಪಿಸುವುದಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯಕ್ಕೆ 10ನೇ ಸ್ಥಾನ: ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮಿತಿ ಮೀರಿದೆ. ಮಹಿಳೆಯರ ಮೇಲಿನ ದೌರ್ಜನ್ಯದಲ್ಲಿ ಕರ್ನಾಟಕ 10ನೇ ಸ್ಥಾನ ಪಡೆದಿದೆ. ಮಹಾನಗರಗಳ ಪೈಕಿ ಬೆಂಗಳೂರು 2ನೇ ಸ್ಥಾನದಲ್ಲಿರುವುದು ದುರಂತದ ಸಂಗತಿ ಎಂದು ಗೌರಮ್ಮ ಹೇಳಿದರು.
ಮಹಿಳೆಯರಿಗೆ ಸುರಕ್ಷೆ ಒದಗಿಸಬೇಕು. ಮಣಿಪಾಲದಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದು ಒಂದು ವಾರ ಕಳೆದರೂ ಅಪರಾಧಿಗಳನ್ನು ಬಂಧಿಸಿ ಜೈಲಿಗಟ್ಟಲು ಪೊಲೀಸರಿಗೆ ಇನ್ನೂ ಸಾಧ್ಯವಾಗದಿರುವುದು ಶೋಚನೀಯ ಎಂದರು.
ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ. ಗಣಹ ಸಚಿವರು ಹೇಳಿರುವಂತೆ ಅತ್ಯಾಚಾರ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಪ್ರತ್ಯೇಕ ನ್ಯಾಯಾಲಯಗಳನ್ನು ಸ್ಥಾಪಿಸಲು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಆರೋಗ್ಯ ಸೌಲಭ್ಯವಿಲ್ಲ: ದೇಶದಲ್ಲಿ ಜನ ಸಂಖ್ಯೆ ಹೆಚ್ಚಳಕ್ಕೆ ಅನುಗುಣವಾಗಿ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಯಾಗುತ್ತಿಲ್ಲ. ಜನರ ಆರೋಗ್ಯ ದೃಷ್ಟಿಯಿಂದ ಸೂಕ್ತ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿಲ್ಲ ಎಂದು ವಿಷಾದಿಸಿದರು.
ನರೇಗಾ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಬೇಕು. ಎಪಿಎಲ್ ಕಾರ್ಡಿಗೆ ಪಡಿತರ ಅಕ್ಕಿ ನೀಡುವುದನ್ನು ನಿಲ್ಲಿಸುವ ಆಲೋಚನೆ ಕೈಬಿಡಬೇಕು. ಪೊಲೀಸ್ ಠಾಣೆಗಳಲ್ಲಿ ಮಹಿಳೆಯರನ್ನು ಗೌರವಯುತವಾಗಿ ನಡೆಸಿಕೊಂಡು, ಶೀಘ್ರ ನ್ಯಾಯದಾನ ಮಾಡಬೇಕು ಎಂದರು.
ಪ್ರಾಂತ ರೈತ ಸಂಘದ ಸಂಚಾಲಕ ಶ್ರೀನಿವಾಸ್ ಮಾತನಾಡಿದರು.
ಸಮಾವೇಶದಲ್ಲಿ ಜನವಾದಿ ಸಂಘಟನೆ ಜಿಲ್ಲಾ ಸಂಚಾಲಕಿ ಸುಜಾತ, ಅನುಪಮ, ಜಯರತ್ನ, ಗೋಹರ್‌ತಾಜ್, ಮಂಗಳಮ್ಮ, ಲೀಲಾವತಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

