ಹಾರೋಹಳ್ಳಿಯಿಂದ ಡಿಸಿ ಕಚೇರಿವರೆಗೆ ಬೈಕ್ ರ್ಯಾಲಿ
ಕ.ಪ್ರ.ವಾರ್ತೆ ರಾಮನಗರ ಜೂ.27
ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಸಾಯಿಖಾನೆ ಸ್ಥಾಪನೆ ವಿರೋಧಿಸಿ ಸಮತಾ ಸೈನಿಕ ದಳದ ಕಾರ್ಯಕರ್ತರು ಹಾರೋಹಳ್ಳಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿವರೆಗೆ ಗುರುವಾರ ಬೈಕ್ ರ್ಯಾಲಿ ನಡೆಸಿದರು.
ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ಜಿ. ಗೋವಿಂದಯ್ಯ ನೇತೃತ್ವದಲ್ಲಿ ನಡೆದ ಬೈಕ್ ಯಾತ್ರೆಗೆ ಹಾರೋಹಳ್ಳಿಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಎಂ. ವೆಂಕಟಸ್ವಾಮಿ ಚಾಲನೆ ನೀಡಿದರು. ಬಳಿಕ ಬೈಕ್ನಲ್ಲಿ ಸಾಗಿದ ಪ್ರತಿಭಟನಾಕಾರರು ನಗರಕ್ಕೆ ಆಗಮಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಕೆಲ ಕಾಲ ಧರಣಿ ನಡೆಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರ, ಜಿಲ್ಲಾಡಳಿತ ಮತ್ತು ಬಿಬಿಎಂಪಿ ವಿರುದ್ಧ ಘೋಷಣೆ ಕೂಗಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯ ನಗರಾಭಿವೃದ್ಧಿ ಕೋಶದ ಅಧಿಕಾರಿ ತ್ಯಾಗರಾಜ್ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಪರಿಸರ ಮಾಲಿನ್ಯ ಉಂಟು ಮಾಡುವ, ಆರೋಗ್ಯಕ್ಕೆ ಹಾನಿಕಾರಕವಾದ ಮತ್ತು ಹಾರೋಹಳ್ಳಿ ಭಾಗಕ್ಕೆ ಕಂಟಕಪ್ರಾಯವಾಗಿರುವ ಕಸಾಯಿಖಾನೆ ಸ್ಥಾಪನೆ ಪ್ರಕ್ರಿಯೆಯನ್ನು ಬಿಬಿಎಂಪಿಯು ತಕ್ಷಣ ಕೈಬಿಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಈ ಮೊದಲು ಬೇರೆಡೆ ಕಸಾಯಿಖಾನೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಬಿಎಂಪಿಯು ಹಾರೋಹಳ್ಳಿಯಲ್ಲೇ ಘಟಕ ಸ್ಥಾಪನೆಗೆ ಹುನ್ನಾರ ನಡೆಸಿದೆ. ನಿರಂತರ ಹೋರಾಟ ನಡೆಯುತ್ತಿದ್ದರೂ ಲೆಕ್ಕಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದರು.
ಎಚ್ಡಿಕೆ ಸ್ಪಷ್ಟಪಡಿಸಲಿ: ಹಾರೋಹಳ್ಳಿಯನ್ನು ಒಳಗೊಂಡ ರಾಮನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕಸಾಯಿಖಾನೆ ವಿಷಯದಲ್ಲಿ ತಮ್ಮ ನಿಲುವು ಪ್ರಕಟಿಸಬೇಕು ಎಂದು ಯುವ ಮುಖಂಡ ಎಲ್. ಚಂದ್ರಶೇಖರ್ ಒತ್ತಾಯಿಸಿದರು. ಯಾವುದೇ ಕಾರಣಕ್ಕೂ ಹಾರೋಹಳ್ಳಿಯಲ್ಲಿ ಕಸಾಯಿಖಾನೆ ಸ್ಥಾಪನೆ ಕೂಡದು. ಈ ಹೋರಾಟಕ್ಕೆ ಕುಮಾರಸ್ವಾಮಿ ಸಹಿತ ಎಲ್ಲ ನಾಯಕರು ಬೆಂಬಲ ನೀಡಬೇಕು ಎಂದರು. ಪ್ರತಿಭಟನೆಯಲ್ಲಿ ಕೋಟೆ ಕುಮಾರ್, ರುದ್ರೇಶ್, ಅಂಜನಮೂರ್ತಿ, ಪ್ರಕಾಶ್, ಗೋವಿಂದ, ಪುರುಷೋತ್ತಮ, ರವಿ, ಗೋಪಾಲ್ ಇತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

