'ಹೆಣ್ಣು ಭ್ರೂಣ ಹತ್ಯೆ ಘೋರ ಅಪರಾಧ'
ನೆಲಮಂಗಲ: ಹೆಣ್ಣು ಭ್ರೂಣಹತ್ಯೆ ಮಹಾಪಾಪ, ಪ್ರಕೃತಿ ದತ್ತವಾಗಿ ದೊರೆಯುವ ಸಂತಾನ ಜನಿಸುವ ಮುನ್ನವೇ ಗಂಡೋ ಅಥವಾ ಹೆಣ್ಣೋ ಎಂದು ತಿಳಿಯುವ ಪಾಪ ಕಾರ್ಯಕ್ಕೆ ಯಾರೂ ಮುಂದಾಗಬಾರದು ಎಂದು ನ್ಯಾಯಾಧೀಶ ದಿನೇಶ್ ಹೆಗ್ಡೆ ಕಿವಿಮಾತು ಹೇಳಿದರು.
ಬುಧವಾರ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನ ಬಿ.ಆರ್.ಸಿ.ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ಭಾರತೀಯ ವೈದ್ಯಕೀಯ ಸಂಘ ಸಂಯುಕ್ತ ಆಶ್ರಯದಲ್ಲಿ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಮಾಡುವ ತಂತ್ರ ನಿಷೇದ ಕಾಯಿದೆ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಹುಟ್ಟು ಎಂಬುದು ನಿರ್ಮಾಣದಲ್ಲಿಯೇ ರಹಸ್ಯವಾದದ್ದು. ಹೆಣ್ಣು ಭ್ರೂಣವನ್ನು ಪತ್ತೆ ಹಚ್ಚಿ ತಮಗೆ ಬೇಕು ಅಥವಾ ಬೇಡ ಎಂದು ತೀರ್ಮಾನಿಸುವುದು ಕಾನೂನು ಬಾಹಿರವಾದದ್ದು ಅಂತಹ ಕಾರ್ಯದಲ್ಲಿ ನಿರತರಾದವರು ಭಾರತೀಯ ದಂಡ ಸಂಹಿತೆ ಪ್ರಕಾರ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಕಾನೂನಿನಲ್ಲಿ ಮಹಿಳೆಯರಿಗೆ ಉತ್ತಮ ಸ್ಥಾನಮಾನ ದೊರೆತಿರುವುದರೊಂದಿಗೆ ಎಲ್ಲಾ ರಂಗಗಳಲ್ಲೂ ಸಾಧನೆ ಮಾಡುತ್ತಿದ್ದಾಳೆ. ನಮಗೆ ಜನ್ಮ ನೀಡಿದವಳೂ ಸಹ ಹೆಣ್ಣೆಂಬುದನ್ನು ಮರೆಯಬಾರದು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚನ್ನಮಲ್ಲಯ್ಯ ಮಾತನಾಡಿ, ದೇಶದ ಕೆಲವೊಂದು ರಾಜ್ಯಗಳಲ್ಲಿ ಮಹಿಳೆ ಮತ್ತು ಪುರುಷರ ಅನುಪಾತದ ಪ್ರಮಾಣದಲ್ಲಿ ಗಣನೀಯವಾಗಿ ಇಳಿಮುಖವಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿರುತ್ತದೆ. ಈ ಪ್ರವೃತ್ತಿ ಹೀಗೆ ಮುಂದುವರಿದರೆ ಸಮಾಜದ ಸುವ್ಯವಸ್ಥೆಗೆ ಧಕ್ಕೆಯಾಗಿ ಮುಂದೆ ಸರಿಪಡಿಸಲಾಗದ ಸಾಮಾಜಿಕ ರಾಜಕೀಯ ಆರ್ಥಿಕ ಸನ್ನಿವೇಶಗಳ ಸೃಷ್ಟಿಗೆ ಅನುವು ಮಾಡಿಕೊಟ್ಟಂತಾಗುತ್ತದೆ. ಈ ನಿಟ್ಟಿನಲ್ಲಿ ಇಂತಹ ಪ್ರವೃತ್ತಿ ತಡೆಯಲು ವೈದ್ಯರು, ತಂತ್ರಜ್ಞರು ಹಾಗೂ ಸಾರ್ವಜನಿಕರು ಪೂರ್ಣ ಪ್ರಮಾಣದಲ್ಲಿ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದರು. ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಎಂ.ಜಯಪ್ರಸಾದ್, ವಕೀಲರ ಸಂಘದ ಅಧ್ಯಕ್ಷ ಮಂಜುನಾಥ್,ತಾಲೂಕು ವೈದ್ಯಾಧಿಕಾರಿ ಡಾ.ಹೇಮಾವತಿ, ನ್ಯಾಯಾಧೀಶೆ ಡಿ.ಮಮತಾ, ಆರೋಗ್ಯ ಶಿಕ್ಷಣಾಧಿಕಾರಿ ರಾಜೇಶ್ವರಿ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

