ಪ್ಲಾಸ್ಟಿಕ್ ಬಳಕೆ ವಿರೋಧಿಸಿ ಪ್ರತಿಭಟನಾ ಜಾಥಾ
ಕ.ಪ್ರ. ವಾರ್ತೆ ಬೆಂಗಳೂರು ಮಾ.23
ಅತಿ ಪ್ಲಾಸ್ಟಿಕ್ ಬಳಕೆ ವಿರೋಧಿಸಿ ಹಾಗೂ ಜನರಲ್ಲಿ ಅರಿವು ಮೂಡಿಸಲು ಜಯಕರ್ನಾಟಕ ಸಂಘದ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಸದಸ್ಯರು ಶನಿವಾರ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನಾ ಜಾಥಾ ನಡೆಸಿದರು.
ಬೆಂಗಳೂರು ಮಹಾನಗರದಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪ್ಲಾಸ್ಟಿಕ್ ಬಳಕೆ ನಿಷೇಧವಿದ್ದರೂ ಅಂಗಡಿಗಳಲ್ಲಿ ಯಾವುದೇ ಭಯವಿಲ್ಲದೇ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳೂ ಈ ಬಗ್ಗೆ ಕ್ರಮಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಸಂಘದ ಮುಖಂಡ ನಟರಾಜ್ ಮಾತನಾಡಿ, ಗಾಂಧಿನಗರ, ಮೆಜೆಸ್ಟಿಕ್, ಚಿಕ್ಕಪೇಟೆ, ಬಳೇಪೇಟೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವ್ಯಾಪಾರ ಮಳಿಗೆಗಳಲ್ಲಿ ಮಾಲೀಕರು ಹಣಕ್ಕಾಗಿ ಪ್ಲಾಸ್ಟಿಕ್ ಬ್ಯಾಗ್ಗಳನ್ನು ನೀಡುತ್ತಿದ್ದಾರೆ. ಪ್ಲಾಸ್ಟಿಕ್ ಮಾರಾಟ ನಿಲ್ಲಿಸಿದರೆ ಜನರು ಬಳಕೆ ಮಾಡುವುದಿಲ್ಲ. ಆದ್ದರಿಂದ ದುಷ್ಪರಿಣಾಮದ ಬಗ್ಗೆ ಅರಿತು ಪ್ಲಾಸ್ಟಿಕ್ ಬಳಕೆ ನಿಲ್ಲಿಸಬೇಕು ಎಂದು ಮನವಿ ಮಾಡಿದರು.
ಪ್ರೀತಿಸಿದ ಮಹಿಳೆಯ ಪತಿ ಕೊಲೆಗಾರನಿಗೆ ಜೀವಾವಧಿ
ಬೆಂಗಳೂರು: ತಾನು ಪ್ರೀತಿಸುತ್ತಿದ್ದ ಮಹಿಳೆಯ ಪತಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು 25 ಸಾವಿರ ದಂಡ ವಿಧಿಸಿ 14ನೇ ತ್ವರಿತ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ.
ಚಿಕ್ಕಲ್ಲಸಂದ್ರ ಹನುಮಗಿರಿ ನಿವಾಸಿ ಎನ್.ಮಹೇಶ್ಕುಮಾರ್(33) ಶಿಕ್ಷೆಗೊಳಗಾದವರು. ಇವರು 2012ರ ಏಪ್ರಿಲ್ 14 ರ ರಾತ್ರಿ ಬನಶಂಕರಿಯ ಪದ್ಮನಾಭನಗರ ನಿವಾಸಿ ಪ್ರಕಾಶ್ ಎಂಬವರನ್ನು ಹತ್ಯೆ ಮಾಡಿದ್ದರು.
ಕೊಲೆಯಾದ ಪ್ರಕಾಶ್ ಅವರ ಪತ್ನಿ ಅನಿತಾ ಅವರನ್ನು, ಮಹೇಶ್ಕುಮಾರ್ ಪ್ರೀತಿಸುತ್ತಿದ್ದರು. ಅನಿತಾ ಅವರು ಪದ್ಮನಾಭನಗರದಲ್ಲಿ ಟೈಲರ್ ಅಂಗಡಿ ನಡೆಸುತ್ತಿದ್ದರು. ಆಗಾಗ ಅಂಗಡಿ ಬಳಿ ಬರುತ್ತಿದ್ದ ಮಹೇಶ್ಕುಮಾರ್ ಆಕೆಯನ್ನು ಪ್ರೀತಿಸತೊಡಗಿದರು. ಪ್ರಕಾಶ್ ಜೀವಂತವಾಗಿದ್ದರೆ ತೊಂದರೆಯಾಗುತ್ತದೆ ಎಂದು ಭಾವಿಸಿ ಅವರನ್ನು ಮಹೇಶ್ಕುಮಾರ್ ಮಾರಕಾಸ್ತ್ರದಿಂದ ಇರಿದು ಹತ್ಯೆ ಮಾಡಿದ್ದ. ಈ ಸಂಬಂಧ ಸುಬ್ರಮಣ್ಯಪುರ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಘಟನೆ ನಡೆದ ಎರಡೇ ದಿನಗಳಲ್ಲಿ ಅನಿತಾ ಅವರು ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಸದಲಗಿರಿ ಅವರು ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕ ಆರ್.ಬಾಲಕೃಷ್ಣ ಅವರು ವಾದ ಮಂಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

