ಬೆಂಗಳೂರು ಗ್ರಾಮಾಂತರ

ಮತದಾರರ ಸಹಭಾಗಿತ್ವ ವಿನೂತನ ಕಾರ್ಯಕ್ರಮಕ್ಕೆ ಚಾಲನೆ

Published On :

ಕ.ಪ್ರ. ವಾರ್ತೆ ರಾಮನಗರ ಮಾ.25
ಮತದಾನ ಪ್ರಕ್ರಿಯೆಯಲ್ಲಿ ಅತಿ ಹೆಚ್ಚಾಗಿ ಯುವಕರು ಪಾಲ್ಗೊಳ್ಳುವಂತೆ ಸೆಳೆಯುವ ಉದ್ದೇಶದಿಂದ ಭಾರತ ಚುನಾವಣಾ ಆಯೋಗವು ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾರರ ಸಹಭಾಗಿತ್ವ ಎಂಬ ವಿನೂತನ ಕಾರ್ಯಕ್ರಮ ಆರಂಭಿಸಿದೆ ಎಂದು ಜಿ.ಪಂ. ಸಿಇಒ ಡಾ.ವೆಂಕಟೇಶ್ ತಿಳಿಸಿದರು.
ಜಿಲ್ಲಾ ಪಂಚಯಿತಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದಲ್ಲಿ ಜಿ.ಪಂ. ಸಿಇಒ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಯುವ ಮತದಾರರಲ್ಲಿ ಜಾಗೃತಿ ಮೂಡಿಸಲು ಏಪ್ರಿಲ್ 1ರಿಂದ ಜಿಲ್ಲಾದ್ಯಂತ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಅರಿವು ಮೂಡಿಸಿ: ಭಾರತವು ಪ್ರಪಂಚದಲ್ಲೇ ಅತಿ ದೊಡ್ಡ ಪ್ರಜಾಪ್ರಭತ್ವ ರಾಷ್ಟ್ರವಾಗಿದ್ದು ಶೇ.18ರಷ್ಟು ಮತದಾರರು 18ರಿಂದ 30 ವರ್ಷದೊಳಗಿನವರಾಗಿದ್ದಾರೆ. ಇಂತಹ ಯುವ ಸಮುದಾಯಕ್ಕೆ ಮತದಾನದ ಪ್ರಾಮುಖ್ಯತೆಯನ್ನು ತಿಳಿಸಿಕೊಡುವ ಅಗತ್ಯವಿದೆ. 18 ವರ್ಷ ಪೂರೈಸಿದ ನವ ಯುವಕರು ಮತಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಗೊಳಿಸುವ ಕುರಿತು ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಇದುವರೆಗೂ ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸದವರಿಗೆ ಹಾಗೂ ಹೆಸರು ತಿದ್ದುಪಡಿಗೆ ಏ.17ರವರೆಗೆ ಅವಕಾಶವಿದೆ. ಮತದಾರರು ಆಯಾ ವ್ಯಾಪ್ತಿಯ ನೋಂದಣಿ ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ನೋಂದಣಿ ಮಾಡಿಸಿಕೊಳ್ಳಬೇಕು. ಈ ಸಂಬಂಧ ಅಧಿಕಾರಿಗಳು ಮತದಾರರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಪಿಯುಸಿ, ಪದವಿ ಮತ್ತಿತರ ವೃತ್ತಿಪರ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 18 ವರ್ಷ ತುಂಬಿರುವ ಕಾಲೇಜು ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಅರಿವು ಮೂಡಿಸಲು ಆಯಾ ಕಾಲೇಜುಗಳ ಎನ್‌ಎಸ್‌ಎಸ್ ಘಟಕದ ಸಂಯೋಜಕರು ಮಾಡುವರು ಎಂದು ವೆಂಕಟೇಶ್ ಹೇಳಿದರು.
ಆಯೋಗದ ಆಶಯ: ಶೇ.100ರಷ್ಟು ಮತದಾರರನ್ನು ನೋಂದಾವಣಿ ಗೊಳಿಸುವುದು ಹಾಗೂ ನೋಂದಾವಣಿಗೊಂಡವರೆಲ್ಲರೂ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕೆಂಬುದು ಚುನಾವಣಾ ಆಯೋಗದ ಆಶಯವಾಗಿರುತ್ತದೆ. ಇದಕ್ಕೆ ಪೂರಕವೆಂಬಂತೆ ಸರ್ಕಾರಿ ಅಧಿಕಾರಿಗಳು ಮತಪಟ್ಟಿಯಲ್ಲಿ ಹೆಸರು ನೋಂದಾವಣೆ ಮಾಡಿಕೊಂಡಿರುವ ಎಲ್ಲರಿಗೂ ಗುರುತಿನ ಚೀಟಿ ಹೊಂದಿರುವಂತೆ ನೋಡಿಕೊಳ್ಳಬೇಕಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮವಹಿಸಬೇಕು ಎಂದು ಸೂಚಿಸಲಾಗಿದೆ ಎಂದರು.
ಏಪ್ರಿಲ್ 1 ರಂದು ಡಾ.ಬಿ.ಆರ್.ಅಂಬೇಡ್ಕರ್ ಭವನದ ಎದುರು 18 ವರ್ಷ ತುಂಬಿರುವ ಯುವ ಮತದಾರರಿಂದ ಮಾನವ ಸರಪಳಿ ನಿರ್ಮಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು. ಇದರಲ್ಲಿ ಸುಮಾರು 1000 ದಿಂದ 1500 ಯುವ ಮತದಾರರು ಪಾಲ್ಗೊಳ್ಳುವರು ಎಂದರು.
ಸೈಕಲ್ ಜಾಥಾ: ನಂತರ ಜಿಲ್ಲಾ ಕೇಂದ್ರದಿಂದ ಎಲ್ಲಾ ತಾಲೂಕು ಕೇಂದ್ರಗಳಿಗೆ ಸೈಕಲ್ ಜಾಥಾ ನಡೆಸಲಾಗುವುದು. ಪ್ರತಿ ತಂಡದಲ್ಲೂ ಸುಮಾರು 25ರಿಂದ 30 ಕಾಲೇಜು ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ಪಾಲ್ಗೊಳ್ಳುವರು ಎಂದರು.
ಏ.3ರಂದು ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಯುವ ಮತದಾರರಿಗೆ ಆಶುಭಾಷಣ ಸ್ಪರ್ಧೆ ನಡೆಸಿ, ವಿಜೇತರಿಗೆ ಬಹುಮಾನ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ನೀಡಲಾಗುವುದು. ಅಂದು ಸಂಜೆ 6ಕ್ಕೆ ಯುವ ಮತದಾರರು ಮೇಣದ ಬತ್ತಿಯನ್ನು ಹಚ್ಚಿಸಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುವುದು ಎಂದರು.
ಗ್ರಾಮೀಣ ಮತದಾರರಲ್ಲಿ ಜಾಗೃತಿ ಮೂಡಿಸಲು ಆಟೋಗಳ ಮೂಲಕ ಪ್ರಚಾರ, ಕರಪತ್ರ ವಿತರಣೆ, ಗ್ರಾ.ಪಂ. ಕಚೇರಿಗಳಲ್ಲಿ ಸಾಕ್ಷ್ಯ ಚಿತ್ರಗಳನ್ನು ಪ್ರದರ್ಶಿಸಲಾಗುವುದು. ಅಂಗನವಾಡಿ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರ ಮೂಲಕ ಗ್ರಾಮಗಳ ಪ್ರತಿ ಮನೆಮನೆಗೂ ತೆರಳಿ ಪ್ರಚಾರ ಮಾಡಲಾಗುವುದು ಎಂದು ತಿಳಿಸಿದರು. ಗೋಷ್ಠಿಯಲ್ಲಿ ಸಿಪಿಒ ಭೀಮಯ್ಯ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಯ್ಯ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.