'ಶಾಸಕರೊಂದಿಗೆ ಅಜ್ಮೀರ್ ದರ್ಗಾಕ್ಕೆ ಎಚ್ಡಿಕೆ ಭೇಟಿ'
ಕ.ಪ್ರ.ವಾರ್ತೆ ಮಾಗಡಿ ಮಾ.26
ಮೇ 5 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮುನ್ನ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರು ಇತರೆ ಶಾಸಕರೊಂದಿಗೆ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ ಆಶೀರ್ವಾದ ಪಡೆಯಲು ಅಜ್ಮೀರ್‌ಗೆ ತೆರಳಿದ್ದಾರೆ ಎಂದು ಬೆಂಗಳೂರು ಹಾಲು ಒಕ್ಕೂಟ ನಿರ್ದೇಶಕ ನರಸಿಂಹಮೂರ್ತಿ ತಿಳಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯೊಂದಿಗೆ ಸಂಸದ ಚಲುವರಾಯಸ್ವಾಮಿ, ಶಾಸಕ ಜಮೀರ್ ಅಹಮದ್ ಮತ್ತು ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಅಜ್ಮೀರ್ ದರ್ಗಾಕ್ಕೆ ತೆರಳಿದ್ದಾರೆ ಎಂದರು. ಅಲ್ಪಸಂಖ್ಯಾತರ ಸಮುದಾಯದವರು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಮೇಲೆ ಅತೀವ ಪ್ರೀತಿ ವಿಶ್ವಾಸ ಇಟ್ಟುಕೊಂಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಮುಸ್ಲಿಂ ಸಮುದಾಯದ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ. ಅನೇಕ ಸವಲತ್ತುಗಳನ್ನು ಸಹ ಮುಸ್ಲಿಮರಿಗೆ ನೀಡಲು ಒತ್ತು ನೀಡಿದ್ದರು. ಈ ನಿಟ್ಟಿನಲ್ಲಿ ಮುಸ್ಲಿಮರು ಈ ಬಾರಿ ಜೆಡಿಎಸ್ ಅಭ್ಯರ್ಥಿಗಳಿಗೆ ಆಶೀರ್ವದಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಕಲ ಸಿದ್ಧತೆ: ಅಲ್ಪಸಂಖ್ಯಾತರ, ಹಿಂದುಳಿದವರ ಜನನಾಯಕ ಎಚ್‌ಡಿಕೆ ನೇತೃತ್ವದಲ್ಲಿ ವಿಧಾನಸಭಾ ಚುನಾವಣೆ ಎದುರಿಸಲು ಜೆಡಿಎಸ್ ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ ಎಂದರು.
ತಿಪ್ಪಸಂದ್ರ ಹೋಬಳಿಯ ಹೊಸಪಾಳ್ಯದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಪೊಲೀಸ್ ರಾಮಣ್ಣ ಅಧ್ಯಕ್ಷತೆಯಲ್ಲಿ ಮಾ.27 ರಂದು 2 ಗಂಟೆಗೆ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಮಾ.28 ರಂದು ಬೆಳಗ್ಗೆ 10.30ಕ್ಕೆ ಮಾಡಬಾಳ್ ಹೋಬಳಿ ಮರಲಗೊಂಡಲದಲ್ಲಿ, ಮಾ.29 ರಂದು ಮಧ್ಯಾಹ್ನ 1.35ಕ್ಕೆ ಬಿಡದಿ ಹೋಬಳಿ ಎಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿದೆ. ಆಯಾ ಹೋಬಳಿವಾರು ಕಾರ್ಯಕರ್ತರು ಸಭೆಗೆ ಭಾಗವಹಿಸುವಂತೆ ಮನವಿ ಮಾಡಲಾಗಿದೆ ಎಂದು ನರಸಿಂಹಮೂರ್ತಿ ವಿವರಿಸಿದರು. ಟಿಎಪಿಸಿಎಂಎಸ್‌ಸಿ ನಿರ್ದೇಶಕ ಎಂ.ಆರ್. ಮಂಜುನಾಥ್, ಪುರಸಭಾ ಮಾಜಿ ಸದಸ್ಯ ರೂಪೇಶ್ ಕುಮಾರ್, ಆನಂದ್, ನರಸಿಂಹಮೂರ್ತಿ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

