ಬೆಂವಿವಿ ಪದವಿ ಪರೀಕ್ಷೆಗಳು ಆರಂಭ
ಕ.ಪ್ರ. ವಾರ್ತೆ , ದೊಡ್ಡಬಳ್ಳಾಪುರ , ಮೇ 14
ಬೆಂಗಳೂರು ವಿಶ್ವ ವಿದ್ಯಾಲಯದ 2 ಮತ್ತು 6ನೇ ಸೆಮಿಸ್ಟರ್ ಪದವಿ ಪರೀಕ್ಷೆಗಳು ಮಂಗಳವಾರ ಆರಂಭವಾದವು. 4ನೇ ಸೆಮಿಸ್ಟರ್ ಪರೀಕ್ಷೆ ಬುಧವಾರ ಆರಂಭವಾಗಲಿದ್ದು, ದೊಡ್ಡಬಳ್ಳಾಪುರದ 2 ಕೇಂದ್ರಗಳಲ್ಲಿ 2, 4 ಮತ್ತು 6ನೇ ಸೆಮಿಸ್ಟರ್‌ಗಳ ಸುಮಾರು 1800 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಇಲ್ಲಿನ ಕೊಂಗಾಡಿಯಪ್ಪ ಪ್ರಥಮ ದರ್ಜೆ ಕಾಲೇಜು, ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬಿಎ, ಬಿಕಾಂ, ಬಿಬಿಎಂ, ಬಿಎಸ್ಸಿ ವ್ಯಾಸಂಗ ಮಾಡುತ್ತಿರುವ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಕೊಂಗಾಡಿಯಪ್ಪ ಕಾಲೇಜು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳಾಗಿದ್ದು, ದೇವರಾಜ ಅರಸ್ ಕಾಲೇಜಿನ ವಿದ್ಯಾರ್ಥಿಗಳು ಕೊಂಗಾಡಿಯಪ್ಪ ಕಾಲೇಜು ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.
1800ಕ್ಕೂ ಹೆಚ್ಚು ವಿದ್ಯಾರ್ಥಿಗಳು: ಬಿಕಾಂ, ಬಿಎಸ್ಸಿ, ಬಿಬಿಎಂ ಮತ್ತು ಬಿಎಸ್ಸಿಯ ವಿವಿಧ ಸಂಯೋಜನೆಗಳಲ್ಲಿ ಈ ಬಾರಿ ತಾಲೂಕಿನಲ್ಲಿ ಸುಮಾರು 1800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಅಲ್ಲದೆ ಪುನರಾವರ್ತಿತ ವಿದ್ಯಾರ್ಥಿಗಳೂ ಪರೀಕ್ಷೆ ಬರೆಯುತ್ತಿದ್ದಾರೆ.
ಕೊಂಗಾಡಿಯಪ್ಪ ಕಾಲೇಜು ಕೇಂದ್ರದಲ್ಲಿ ದೇವರಾಜ ಅರಸ್ ಕಾಲೇಜಿನ ಬಿಕಾಂ ಮತ್ತು ಬಿಬಿಎಂನ 250 ವಿದ್ಯಾರ್ಥಿಗಳು, ಕೊಂಗಾಡಿಯಪ್ಪ ಕಾಲೇಜಿನ 700ಕ್ಕೂ ಹೆಚ್ಚು ವಿದ್ಯಾರ್ಥಿಗಳೂ ಸೇರಿದಂತೆ 950 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ವಿಷಯಕ್ಕೆ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಅದೇ ರೀತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಕಾಂ, ಬಿಬಿಎಂ, ಬಿಎಸ್ಸಿ ಮತ್ತು ಬಿಎ ವಿವಿಧ ಸಂಯೋಜನೆಗಳ 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷೆಗಳು ಜೂನ್ ಮೊದಲ ವಾರದವರೆಗೆ ನಡೆಯಲಿದ್ದು, ಮಂಗಳವಾರ 2ನೇ ಸೆಮಿಸ್ಟರ್‌ಗೆ ಕನ್ನಡ, 6ನೇ ಸೆಮಿಸ್ಟರ್ ಬಿಕಾಂಗೆ ಬ್ಯುಸಿನೆಸ್ ಲಾ, ಬಿಬಿಎಂಗೆ ಎಂಐಎಸ್, ಬಿಎ ವಿದ್ಯಾರ್ಥಿಗಳಿಗೆ ಇತಿಹಾಸ ಮತ್ತು ಬಿಎಸ್ಸಿ ವಿದ್ಯಾರ್ಥಿಗಳಿಗೆ ಭೌತಶಾಸ್ತ್ರ ಪರೀಕ್ಷೆಗಳು ನಡೆದವು.
ಪರೀಕ್ಷಾ ಅಕ್ರಮಗಳು ನಡೆಯದಂತೆ ಹೆಚ್ಚಿನ ನಿಗಾ ವಹಿಸಿದ್ದು, ಪ್ರತಿ ಕೇಂದ್ರದಲ್ಲಿ ತಲಾ ಇಬ್ಬರು ವೀಕ್ಷಕರನ್ನು ನೇಮಿಸಲಾಗಿದೆ. ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಅಕ್ರಮಗಳನ್ನು ತಡೆಯಲು ವಿಶ್ವವಿದ್ಯಾಲಯ ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಂಡಿದ್ದು, ಕಟ್ಟುನಿಟ್ಟಿನ ವ್ಯವಸ್ಥೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

