ಬೆಸ್ಕಾಂಗೆ ಗ್ರಾಮಸ್ಥರ ಮುತ್ತಿಗೆ
ಕ.ಪ್ರ.ವಾರ್ತೆ, ರಾಮನಗರ, ಮೇ 15
ತಾಲೂಕಿನ ಡಣಾಯ್ಕನಪುರ ಗ್ರಾಮದಲ್ಲಿ ಒಂದೂವರೆ ತಿಂಗಳ ಹಿಂದೆ ಸುಟ್ಟು ಹೋಗಿರುವ ಟ್ರಾನ್ಸ್ಫಾರ್ಮರ್ ಬದಲಿಸದ ಬೆಸ್ಕಾಂ ಅಧಿಕಾರಿಗಳ ಧೋರಣೆ ಖಂಡಿಸಿ ಗ್ರಾಮಸ್ಥರು ರೈತ ಸಂಘದ ಮುಖಂಡರ ಜತೆಗೂಡಿ ನಗರದಲ್ಲಿ ಬುಧವಾರ ಪ್ರತಿಭಟಿಸಿದರು.
ಬೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಗ್ರಾಮಸ್ಥರು ಮತ್ತು ರೈತ ಸಂಘದ ಕಾರ್ಯಕರ್ತರು ಬೆಸ್ಕಾಂ ವಿರುದ್ಧ ಘೋಷಣೆ ಕೂಗಿದರು. ತಕ್ಷಣ ಟ್ರಾನ್ಸ್ಫಾರ್ಮರ್ ಬದಲಿಸದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಡಣಾಯ್ಕನಪುರ ಗ್ರಾಮದಲ್ಲಿದ್ದ 24 ಕೆವಿ ಟ್ರಾನ್ಸ್ಫಾರ್ಮರ್ ಸುಟ್ಟು 45 ದಿನಗಳು ಕಳೆದಿವೆ. ಈ ಕುರಿತು ಗ್ರಾಮಸ್ಥರು ಹಲವು ಬಾರಿ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ. ಬೆಸ್ಕಾಂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಗ್ರಾಮಸ್ಥರು ಸಮಸ್ಯೆಗೆ ಸಿಲುಕುವಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿ ಕಾರಿದರು.
ಟ್ರಾನ್ಸ್ಫಾರ್ಮರ್ ಬದಲಿಸದ ಕಾರಣ ರೈತರು ಬಿತ್ತಿದ್ದ ಬೇಸಿಗೆ ಬೆಳೆ ನೀರಿಲ್ಲದೆ ಒಣಗಿದ್ದು, ಸಾಕಷ್ಟು ನಷ್ಟ ಉಂಟಾಗಿದೆ. ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಿಸಿದೆ. ಇದೆಲ್ಲಕ್ಕೂ ಬೆಸ್ಕಾಂ ಅಧಿಕಾರಿಗಳೇ ನೇರ ಹೊಣೆಯಾಗಿದ್ದಾರೆ ಎಂದು ಅವರು ಆರೋಪಿಸಿದರು.
ಗ್ರಾಹಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳನ್ನು ಕೂಡಲೇ ಅಮಾನತುಪಡಿಸಬೇಕು ಇಲ್ಲವೇ ವರ್ಗಾವಣೆ ಮಾಡಬೇಕು. ಕೆಟ್ಟು ಹೋಗಿರುವ ಟ್ರಾನ್ಸ್ಫಾರ್ಮರ್ಅನ್ನು ತಕ್ಷಣವೇ ಬದಲಿಸಿ, ಅಧಿಕ ಸಾಮರ್ಥ್ಯದ ಹೊಸ ಪರಿವರ್ತಕವನ್ನು ಅಳವಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಒತ್ತಡಕ್ಕೆ ಮಣಿದ ಅಧಿಕಾರಿಗಳು ಶೀಘ್ರವೇ ಟ್ರಾನ್ಸ್ಫಾರ್ಮರ್ ಬದಲಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಅಂತ್ಯಗೊಂಡಿತು. ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣ ಸ್ವಾಮಿ, ರಾಮಣ್ಣ, ಕಣಷ್ಣಪ್ಪ, ಪುಟ್ಟಸ್ವಾಮಿ, ಭೈರೇಗೌಡ ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

