ಬೆಂಗಳೂರು ಗ್ರಾಮಾಂತರ

ಏಕರೂಪದ ಮರಳು ನೀತಿ: ಮಹದೇವಪ್ಪ

Published On :

ಕ.ಪ್ರ. ವಾರ್ತೆ ಮೈಸೂರು ಮೇ 21
ರಾಜ್ಯಾದ್ಯಂತ ಏಕರೂಪದ ಮರಳು ನೀತಿ ಜಾರಿಗೊಳಿಸಲು ಸರ್ಕಾರ ಬದ್ಧವಿರುವುದಾಗಿ  ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದರು.
ಮೈಸೂರಿನ ಚಾಮುಂಡಿಬೆಟ್ಟ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಮಂಗಳವಾರ ಭೇಟಿ ನೀಡಿ ಶಿವರಾತ್ರಿದೇಶಿಕೇಂದ್ರ ಸ್ವಾಮಿಗಳ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಬೇರೆ ಬೇರೆಯಾದ ಮರಳು ನೀತಿ ಜಾರಿಯಲ್ಲಿದೆ. ಆದ್ದರಿಂದ ರಾಜ್ಯಾದ್ಯಂತ ಏಕರೂಪದ ಮರಳು ನೀತಿ ಜಾರಿಗೊಳಿಸಲಾಗುವುದು. ಅಲ್ಲದೆ, ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕಲಾಗುವುದು ಎಂದರು.
ರಾಜ್ಯದಲ್ಲಿ ಸ್ಥಗಿತಗೊಂಡಿರುವ ಹೆದ್ದಾರಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಮೈಸೂರು- ನಂಜನಗೂಡು, ಮೈಸೂರು- ಟಿ. ನರಸೀಪುರ ರಸ್ತೆ ಸೇರಿದಂತೆ ಹಲವು ಕಾಮಗಾರಿಯನ್ನು ಕೇಂದ್ರದ ನೆರವಿನೊಂದಿಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಸಿಎಂ ವಿವೇಚನೆಗೆ: ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಯಾರಿಗೆ ನೀಡಬೇಕು ಎಂಬುದು ಮುಖ್ಯಮಂತ್ರಿಗಳ ವಿವೇಚನಗೆ ಬಿಟ್ಟ ವಿಷಯ. ಯಾರಿಗೆ ನೀಡಿದರೂ ನಿರ್ವಹಿಸುತ್ತೇವೆ ಎಂದು ತಿಳಿಸಿದರು.
ಪ್ರಾಮಾಣಿಕ ಪ್ರಯತ್ನ: ನಂತರ ನಗರ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಮಾತನಾಡಿ, ಲೋಕೋಪಯೋಗಿ ಇಲಾಖೆಯಲ್ಲಿನ ಕೆಲಸಗಳಲ್ಲಿ ಪಾರದರ್ಶಕತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಇಲಾಖೆಯಲ್ಲಿನ ಭ್ರಷ್ಟತೆಯ ಬಗ್ಗೆ ಸಾಕಷ್ಟು ದೂರು ಕೇಳಿ ಬಂದಿದೆ. ಆದ್ದರಿಂದ ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ಜೊತೆಗೆ ಇಲಾಖೆ ಕೆಲಸಗಳಲ್ಲಿ ಪಾರದರ್ಶಕತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ನಿಗದಿತ ಅವಧಿಯಲ್ಲಿ ಇಲಾಖೆ ಕೆಲಸ ಪೂರ್ಣಗೊಳಿಸುವುದಾಗಿ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನಗೆ ಮಹತ್ತರ ಜವಾಬ್ದಾರಿ ವಹಿಸಿದ್ದಾರೆ. ಜನತೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅವರ ನಿರೀಕ್ಷೆ ಹುಸಿಗೊಳ್ಳದಂತೆ ಎಚ್ಚರಿಕೆಯಿಂದ ಕೆಲಸ ಮಾಡುತ್ತೇವೆ. ವಿಶ್ವೇಶ್ವರಯ್ಯ ಅವರ ತಾಂತ್ರಿಕ ಪರಿಶ್ರಮದ ಲೋಕೋಪಯೋಗಿ ಇಲಾಖೆಗೆ ಇದ್ದ ಹಿಂದಿನ ಮಹತ್ವವನ್ನು ಮತ್ತೆ ತಂದುಕೊಡಲು ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು.ರಾಜೀವ್ ಗಾಂಧಿ ಪುಣ್ಯಸ್ಮರಣೆ ಮಾಡಲಾಗಿದೆ. ದೇಶದ ಏಕತೆ, ಅಖಂಡತೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಸಂವಿಧಾನದ 23 ಮತ್ತು 24ನೇ ತಿದ್ದುಪಡಿ ಅನ್ವಯ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ಶಕ್ತಿ ನೀಡಿ ಸರ್ಕಾರದ ಅನುದಾನ ನೇರವಾಗಿ ಸ್ಥಳೀಯ ಸಂಸ್ಥೆಗಳಿಗೆ ತಲುಪುವಂತೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.
 ಕಂದಾಯ ಸಚಿವ ವಿ. ಶ್ರೀನಿವಾಸಪ್ರಸಾದ್ ಮತ್ತು ಸಂಸದ ಆರ್. ಧ್ರುವನಾರಾಯಣ್ ಅವರು ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದರು. ಪಾಲಿಕೆ ಸದಸ್ಯ ಸುನಿಲ್ ಕುಮಾರ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.