ಪ್ರತ್ಯೇಕ ಅಪಘಾತ: ಇಬ್ಬರ ಸಾವು
ಕ.ಪ್ರ.ವಾರ್ತೆ , ರಾಮನಗರ , ನ.13
ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿದ್ದಾರೆ.
ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ನೈಸ್ ರಸ್ತೆಯ ಸೋಂಪುರ ವೃತ್ತದಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದು ಅದರಲ್ಲಿದ್ದ ಕ್ಲೀನರ್ ಕುಮಾರ (29) ಸ್ಥಳದಲ್ಲೇ ಸಾವನ್ನಪ್ಪಿದನು.
ಈ ಅಪಘಾತದಲ್ಲಿ ಹಿಂಬದಿಯಿಂದ ಡಿಕ್ಕಿಯಾದ ಲಾರಿಯ ಚಾಲಕನ ತಲೆ ಮತ್ತು ಕಾಲಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಲಘಟ್ಟಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಿಟಿ ವಾಹನ ಡಿಕ್ಕಿ: ಬಿಡದಿ ಸಮೀಪದ ಕೆಂಚನಕುಪ್ಪೆ ಗೇಟ್ ಸಮೀಪ ಭಾರಿ ಯಂತ್ರೋಪಕರಣ ಸಾಗಿಸುತ್ತಿದ್ದ ಲಾರಿ ಕೆಟ್ಟು ನಿಂತಿತ್ತು. ಅದಕ್ಕೆ ಟೊಯೋಟೊ ಕಂಪನಿಗೆ ಸೇರಿದ ಟೆಂಪೋ ಟ್ರಾವೆಲರ್ ವಾಹನ ಹಿಂಬದಿಯಿಂದ ಡಿಕ್ಕಿಯಾಗಿದ್ದು, ಅದರ ಚಾಲಕ ಸಾವನ್ನಪ್ಪಿದನು.
ಬಸವರಾಜು (28) ಮೃತ ಚಾಲಕ. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಆತ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದನು. ಟೆಂಪೋ ಟ್ರಾವೆಲರ್ ವಾಹನದಲ್ಲಿದ್ದ ಮತ್ತೊಬ್ಬನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಸಂಬಂಧ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಡಿಕ್ಕಿ: ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ್ಗೆ ಗಾಯ
ನೆಲಮಂಗಲ: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅರಿಶಿನಕುಂಟೆ ಬಳಿ ವೋಲ್ವೋ ಬಸ್ಸೊಂದಕ್ಕೆ ಹಿಂಬದಿಯಿಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ್ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.
ಅವರು ಬೆಳಗಾವಿಯಿಂದ ಬೆಂಗಳೂರಿಗೆ ವೋಲ್ವೊ ಬಸ್ಸಿನಲ್ಲಿ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗಾಯಗೊಂಡ ಇವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಅವರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳೀಯ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಲಾರಿಗೆ ಸಿಕ್ಕಿ ಬೈಕ್ ಚಾಲಕ ಸಾವು
ದೇವನಹಳ್ಳಿ: ದೇವನಹಳ್ಳಿಯಿಂದ ಎರ್ತಿಗಾನಹಳ್ಳಿಗೆ ಬೈಕ್ನಲ್ಲಿ ಹೋಗುತ್ತಿದ್ದವರಿಗೆ ಗಿರಿಯಮ್ಮ ಸರ್ಕಲ್ ಬಳಿ ಇರುವ ಅಂಬೇಡ್ಕರ್ ಭವನ ಮುಂಭಾಗದಲ್ಲಿ ಬುಧವಾರ ಸಂಜೆ ಬೈಚಾಪುರ ಕಡೆಯಿಂದ ಬರುತ್ತಿದ್ದ ಸರಕು ಸಾಗಣೆ ಲಾರಿಯೊಂದು ಡಿಕ್ಕಿ ಹೊಡೆದು ಲಾರಿ ಚಕ್ರ ಬೈಕ್ ಸವಾರನ ತಲೆಯ ಮೇಲೆ ಹರಿದ ಕಾರಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಲಾರಿಯ ಚಾಲಕ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಎರ್ತಿಗಾನಹಳ್ಳಿಯ ಮುತ್ತುರಾಜ್ ಆಶ್ಟರ್ಯಕರ ರೀತಿಯಲ್ಲಿ ಪಾರಾಗಿದ್ದು ಆತನ ಕಾಲಿಗೆ ಸ್ವಲ್ಪ ಪೆಟ್ಟಾಗಿದೆ. ಸ್ಥಳಕ್ಕೆ ಸಂಚಾರಿ ವಿಭಾಗ ಪೊಲೀಸ್ ಅಧಿಕಾರಿಗಳು ಆಗಮಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ರೌಡಿಗಳಿಗೆ ಬಿಸಿ ಮುಟ್ಟಿಸಿದ ಜಿಲ್ಲಾ ಪೊಲೀಸ್ ವರಿಷ್ಠ
ನೆಲಮಂಗಲ: ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ರೌಡಿಗಳ ಅಡ್ಡೆಯಾಗಿರುವ ಸೂಕ್ಷ್ಮ ಪ್ರದೇಶಗಳಿಗೆ
ಬೆಂಗಳೂರು ಗ್ರಾಮಾಂತರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ವಹಾಬ್ ನೇತೃತ್ವದಲ್ಲಿ ಮಂಗಳವಾರ ರಾತ್ರಿ ದಿಢೀರ್ ದಾಳಿ ನಡೆಸಿ ರೌಡಿ ಚಟುವಟಿಕೆ ನಡೆಸುತ್ತಿರುವವರಿಗೆ ಬಿಸಿ ಮುಟ್ಟಿಸಿದ್ದಾರೆ.
ತಾಲೂಕಿನಲ್ಲಿ ವ್ಯರ್ಥವಾಗಿ ಕಾಲಹರಣ ಮಾಡುವ ಯುವಕರು ರಾತ್ರಿ ವೇಳೆ ಕಾನೂನು ಭಂಗ ತರುವ ಕೃತ್ಯಗಳಲ್ಲಿ ಭಾಗಿಯಾಗದಿರುವಂತೆ ತಡೆಗಟ್ಟಲು ಈ ಕಾರ್ಯಾಚರಣೆ ನಡೆಸಲಾಗುತ್ತಿದೆ. ತಾಲೂಕಿನಲ್ಲಿ ಸೂಕ್ಷ್ಮ ಪ್ರದೇಶಗಳಾದ ಗಣೇಶನಗುಡಿ, ಜಯನಗರ, ವಾಜರಹಳ್ಳಿ, ಹ್ಯಾಡಾಳು ಸೇರಿದಂತೆ ಹಲವು ಪ್ರದೇಶಕ್ಕೆ ಭೇಟಿ ನೀಡಿ ಹಿಂದೆ ಅಪರಾಧ ಚಟುವಟಿಕೆಗಳಿಗೆ ಭಾಗಿಯಾಗಿರುವವರ ಬಗ್ಗೆ ಮಾಹಿತಿ ಪಡೆದರು.
ನಿಂತಿದ್ದ ಲಾರಿಗೆ ಕಾರು ಡಿಕ್ಕಿ: 5 ಜನರಿಗೆ ಗಾಯ
ನೆಲಮಂಗಲ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿ 5 ಜನರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಮಾದಾವರ ಬಳಿಯ ನಾಡಿಗರ್ ಕಾಲೇಜು ಬಳಿ ಬುಧವಾರ ನಡೆದಿದೆ.
ಕಾರು ಬೆಂಗಳೂರಿನಿಂದ ತುಮಕೂರಿಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡವರು ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತುಮಕೂರಿನಲ್ಲಿ ಸ್ನೇಹಿತನ ಮದುವೆಯ ನಿಶ್ಚಿತಾರ್ಥಕ್ಕೆ ಹೋಗುತ್ತಿದ್ದಾಗ ಮಾದಾವರ ಬಳಿ ಕೆಟ್ಟು ನಿಂತಿದ್ದ ಲಾರಿಯನ್ನು ಕಾರು ಚಾಲಕ ಗಮನಿಸದೆ ಘಟನೆ ನಡೆದಿದೆ. ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ತಿಳಿಸಿದರು.
ವಿವಿಧ ಶಾಲೆಗಳಲ್ಲಿ ಇಂದು ಮಕ್ಕಳ ದಿನಾಚರಣೆ
ದೊಡ್ಡಬಳ್ಳಾಪುರ: ಇಲ್ಲಿನ ವಿವಿಧ ಶಾಲೆಗಳಲ್ಲಿ ನ.14ರ ಗುರುವಾರ ಮಕ್ಕಳ ದಿನಾಚರಣೆ ನಡೆಯಲಿದೆ. ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮೆಂಡಾ ಫೌಂಡೇಷನ್ ಮತ್ತು ರೋಟರಿ ಕ್ಲಬ್-ಇಂದಿರಾನಗರ ಸಹಯೋಗ ನೀಡಲಿವೆ. ಮಕ್ಕಳಿಗೆ ಕನ್ನಡ ಮತ್ತು ಆಂಗ್ಲ ಭಾಷಾ ನಿಘಂಟುಗಳ ವಿತರಣೆ ಮತ್ತು ಶಾಲೆಗೆ ನೀರು ಶುದ್ದೀಕರಣ ಯಂತ್ರದ ಕೊಡುಗೆ ಲಭ್ಯವಾಗಲಿದೆ. ಅದೇ ರೀತಿ ಸರಸ್ವತಿ ಶಾಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಕ್ಕಳೇ ಕಾರ್ಯಕ್ರಮ ರೂಪಿಸಲಿದ್ದಾರೆ. 10ನೇ ತರಗತಿಯ ಅನಿಲ್ಕುಮಾರ್ ಅಧ್ಯಕ್ಷತೆ ವಹಿಸಿದರೆ, 5ರಿಂದ 9ನೇ ತರಗತಿಯ ತಲಾ ಒಬ್ಬೊಬ್ಬ ವಿದ್ಯಾರ್ಥಿಗಳು ಮುಖ್ಯಅತಿಥಿಗಳಾಗಿ ಉಪಸ್ಥಿತರಿರುವರು. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

