ಶಾದಿಭಾಗ್ಯ ಎಲ್ಲ ವರ್ಗಗಳಿಗೂ ವಿಸ್ತರಣೆಯಾಗಲಿ
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ಮುಸ್ಲಿಂ ಯುವತಿಯರಿಗೆ ಜಾರಿ ಮಾಡಿರುವ ಶಾದಿಭಾಗ್ಯ ಯೋಜನೆ ಕೇವಲ ಓಟ್ ಬ್ಯಾಂಕ್ ರಾಜಕಾರಣ ಮತ್ತು ಅಲ್ಪಸಂಖ್ಯಾತರ ಓಲೈಕೆಯಷ್ಟೇ ಎಂದು ಕೆಜೆಪಿ ಜಿಲ್ಲಾಧ್ಯಕ್ಷ ಜೋ.ನಾ. ಮಲ್ಲಿಕಾರ್ಜುನ್ ಆರೋಪಿಸಿದರು. ಕರ್ನಾಟಕ ಜನತಾ ಪಕ್ಷದ ನೇತೃತ್ವದಲ್ಲಿ ಸೋಮವಾರ ಇಲ್ಲಿನ ತಾಲೂಕು ಕಚೇರಿ ಮುಂದೆ ನಡೆದ ಪ್ರತಿಭಟನಾ ಧರಣಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಿದ್ಧರಾಮಯ್ಯ ಅಧಿಕಾರಕ್ಕೆ ಬಂದಾಗಿನಿಂದ ಒಂದಿಲ್ಲೊಂದು ವಿವಾದಿತ ಯೋಜನೆಗಳ ಮೂಲಕವೇ ಗಮನ ಸೆಳೆಯುತ್ತಿದ್ದಾರೆ. ಕೇವಲ ಕೆಲವೇ ಜಾತಿ-ಧರ್ಮಗಳ ಓಲೈಕೆಯಲ್ಲಿ ಮುಳುಗಿರುವ ಇವರು ಜಾತ್ಯಾತೀತರೆಂದು ಹೇಳಿಕೊಳ್ಳುತ್ತಿರುವುದು ನಾಚಿಕೆಗೇಡು. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಜಾರಿಗೆ ತಂದ ಎಷ್ಟೋ ಯೋಜನೆಗಳು ಸಮಾಜದ ಎಲ್ಲ ವರ್ಗಗಳ ಮಹಿಳೆಯರು, ಹಿಂದುಳಿದ, ಬಡವರಿಗೆ ಅನುಕೂಲವಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ಅವೈಜ್ಞಾನಿಕ ಯೋಜನೆಗಳನ್ನು ರೂಪಿಸುವುದಲ್ಲೇ ಕಾಲ ಕಳೆಯುತ್ತಿರುವ ಸಿದ್ದರಾಮಯ್ಯ ರಾಜ್ಯದ ಸರ್ವಾಂಗೀಣ ಹಿತ ನಿರ್ಲಕ್ಷಿಸಿದ್ದಾರೆ. ಕೂಡಲೇ ಶಾದಿಭಾಗ್ಯ ಯೋಜನೆಯನ್ನು ಸಮಾಜದ ಎಲ್ಲ ವರ್ಗಗಳಿಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಲಿ ಎಂದು ಆಗ್ರಹಿಸಿದರು. ಸಮಾಜದ ಎಲ್ಲ ಬಡ ಹೆಣ್ಣು ಮಕ್ಕಳಿಗೆ ಇದರಿಂದ ಪ್ರಯೋಜನವಾಗಲಿ. ಇದರಿಂದ ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಹಾಕುವುದನ್ನು ಸಿದ್ದರಾಮಯ್ಯ ಬಿಡಬೇಕು. ವಿದ್ಯಾರ್ಥಿಗಳಿಂದಲೇ ಜಾತಿ ಭೇದ ಪ್ರಚೋದನೆಗೆ ಕೈಹಾಕಿ ಮುಜುಗರ ಅನುಭವಿಸಿರುವ ಅವರು, ಇನ್ನಾದರೂ ಉತ್ತಮ ಯೋಜನೆಗಳ ಮೂಲಕ ಜನರನ್ನು ತಲುಪಲಿ ಎಂದರು.
ಕಾರ್ಯಕ್ರಮದಲ್ಲಿ ಮಾತನಾಡಿದ ತಾಲೂಕು ಮುಖಂಡ ವೆಂಕಟೇಶ್, ಕೆಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಯಡಿಯೂರಪ್ಪ ಕಳೆದ 15 ದಿನಗಳಿಂದ ಬೆಂಗಳೂರಿನಲ್ಲಿ ನಡೆಸುತ್ತಿರುವ ಸತ್ಯಾಗ್ರಹದ ಭಾಗವಾಗಿ ಇಂದು ಇಡೀ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ಜನತಾ ಪಕ್ಷ ಪ್ರತಿಭಟನೆ ಹಮ್ಮಿಕೊಂಡಿದೆ. ಸಿಎಂ ಧೋರಣೆ ಬದಲಾಗದಿದ್ದರೆ ಉಗ್ರ ಹೋರಾಟಕ್ಕೆ ಮುಂದಾಗಬೇಕಾದೀತು ಎಂದು ಎಚ್ಚರಿಕೆ ನೀಡಿದರು.
ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಕೆಜೆಪಿ ವಿವಿಧ ಘಟಕಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

