ಗ್ಯಾಂಗ್ರೇಪ್; ವಿವಿಧ ಸಂಘಟನೆಗಳ ಆಕ್ರೋಶ
ದೊಡ್ಡಬಳ್ಳಾಪುರ: ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ದಲಿತ ಬಾಲಕಿಯ ಮೇಲೆ ನಡೆದಿರುವ ಅತ್ಯಾಚಾರ ಕೃತ್ಯ ಇಡೀ ನಾಗರಿಕ ಸಮಾಜ ತಲೆತಗ್ಗಿಸುವ ವಿಚಾರ. ಈ ಕೃತ್ಯ ಎಸಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಪ್ರಜಾ ವಿಮೋಚನಾ ಚಳವಳಿ(ಸಮತಾವಾದ) ಮತ್ತು ಮಹಿಳಾ ವಿಮೋಚನಾ ಚಳವಳಿ ನೇತೃತ್ವದಲ್ಲಿ ಇಲ್ಲಿನ ಕೊಂಗಾಡಿಯಪ್ಪ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಪಿವಿಸಿ(ಎಸ್) ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಿಆಂಜನಪ್ಪ, ದೆಹಲಿ ಮತ್ತು ಮುಂಬೈಗಳಲ್ಲಿ ನಡೆದ ಅತ್ಯಾಚಾರ ಪ್ರಕರಣಗಳ ರೀತಿಯಲ್ಲೇ ದೊಡ್ಡಬಳ್ಳಾಪುರದಲ್ಲಿ ನಡೆದಿರುವ ಈ ಕೃತ್ಯ ಅತ್ಯಂತ ಹೇಯ. ವಿದ್ಯಾರ್ಥಿನಿಯೊಬ್ಬಳಿಗೆ ಮತ್ತು ತರುವ ಪಾನೀಯ ಕುಡಿಸಿ ಕಾಮಾಂಧತೆ ಮೆರೆದಿರುವ ಅತ್ಯಾಚಾರಿಗಳು ನಾಗರಿಕ ಸಮಾಜದ ಕಳಂಕ. ಇಂತಹವರಿಗೆ ಕಾನೂನು ಗಂಭೀರ ಶಿಕ್ಷೆ ವಿಧಿಸಬೇಕು. ಪ್ರಕರಣದಲ್ಲಿ ಪೊಲೀಸರು ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡಬಾರದು. ಕೇವಲ ಇಬ್ಬರ ಮೇಲೆ ಪ್ರಕರಣ ದಾಖಲಿಸಿ ಉಳಿದ ನಾಲ್ವರನ್ನು ಪ್ರಕರಣದಿಂದ ದೂರ ಇಟ್ಟಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇದು ಖಂಡನೀಯ. ಪೊಲೀಸರು ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯಬಾರದು. ದೆಹಲಿ ಪ್ರಕರಣದ ಮಾದರಿಯಲ್ಲಿ ನ್ಯಾಯಾಲಯ ಅತ್ಯಾಚಾರಿಗಳನ್ನು ಶಿಕ್ಷಿಸಬೇಕು ಎಂದು ಒತ್ತಾಯಿಸಿದರು.
ಗಂಭೀರ ಹೋರಾಟ: ಪ್ರಕರಣದಲ್ಲಿ ಆರೋಪಿಗಳನ್ನು ರಕ್ಷಿಸುವ ಅಥವಾ ಪಾರದರ್ಶಕವಲ್ಲದ ತನಿಖೆಯ ಹುನ್ನಾರಗಳು ನಡೆದರೆ ಪಿವಿಸಿ ನೇತೃತ್ವದಲ್ಲಿ ಗಂಭೀರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.
ಪ್ರತಿಭಟನೆಯಲ್ಲಿ ಪ್ರಜಾ ವಿಮೋಚನಾ ಚಳವಳಿಯ ಜಿಲ್ಲಾ ವಿಭಾಗೀಯ ಉಪಾಧ್ಯಕ್ಷ ಚಿಕ್ಕನರಸಯ್ಯ, ತಾಲೂಕು ಪತ್ರಕರ್ತರ ಟ್ರಸ್ಟ್ನ ಟ್ರಸ್ಟಿ ತೂಬಗೆರೆ ಷರೀಫ್, ತಾಲೂಕು ಪಿವಿಸಿಎಸ್ ಅಧ್ಯಕ್ಷ ಸುತ್ತಹಳ್ಳಿ ಚಂದ್ರು, ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷ ಮುನಿರಾಜು, ಮುಖಂಡರಾದ ಗೌರಮ್ಮ, ಮಧುಪ್ರಕಾಶ್, ಚನ್ನಮರಿಯಪ್ಪ, ಓಬಳಪ್ಪ ಮತ್ತಿತರರು ಭಾಗವಹಿಸಿದ್ದರು.
ಇಬ್ಬರಿಗೆ ನ್ಯಾಯಾಂಗ ಬಂಧನ
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿ ಕನ್ನಮಂಗಲ ಗ್ರಾಮದಲ್ಲಿ ಭಾನುವಾರ ರಾತ್ರಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. ಪ್ರಕರಣದ ತನಿಖೆ ಚುರುಕುಗೊಳಿಸಿರುವ ದೊಡ್ಡಬೆಳವಂಗಲ ಪೊಲೀಸರು, ಒಟ್ಟು 6 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ಪೈಕಿ ರಾಜು ಮತ್ತು ವಿನಯ್ಕುಮಾರ್ ಎಂಬುವವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಇಬ್ಬರೂ ಕನ್ನಮಂಗಲ ಗ್ರಾಮದವರೇ ಆಗಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಮಂಗಳವಾರ ಸಂಜೆ ದೊಡ್ಡಬಳ್ಳಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ವೈದ್ಯಕೀಯ ವರದಿಗಳ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್ಪಿ ಶ್ರೀಧರ್ ತಿಳಿಸಿದ್ದಾರೆ.
ಉಗ್ರ ಹೋರಾಟದ ಎಚ್ಚರಿಕೆ
ದೊಡ್ಡಬಳ್ಳಾಪುರ: ಭಾನುವಾರ ರಾತ್ರಿ ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪ್ರಮುಖ ಆರೋಪಿಗಳನ್ನು ಯಾವುದೇ ಒತ್ತಡಗಳಿಗೂ ಮಣಿಯದೆ ಶಿಕ್ಷೆಗೆ ಗುರಿಪಡಿಸಬೇಕು. ತಪ್ಪಿದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ದಲಿತ ಸಂಘಟನೆಗಳು ಎಚ್ಚರಿಕೆ ನೀಡಿವೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಜಿಲ್ಲಾ ಸಂಘಟನಾ ಸಂಚಾಲಕ ರಾಜು ಸಣ್ಣಕ್ಕಿ, ಘಟನೆಯಲ್ಲಿ ತಾಲೂಕಿನ ಪ್ರಭಾವಿ ರಾಜಕಾರಣಿಯೊಬ್ಬರ ವಾಹನ ಚಾಲಕ ಮತ್ತು ಪೊಲೀಸರೊಬ್ಬರ ಪುತ್ರ ಸಹ ಭಾಗಿಯಾಗಿದ್ದು ಅವರನ್ನು ಪೊಲೀಸರು ರಕ್ಷಿಸುವ ಪ್ರಯತ್ನದಲ್ಲಿದ್ದಾರೆ. ಒಂದು ವೇಳೆ ಆ ಆರೋಪಿಗಳನ್ನು ಬಂಧಿಸದಿದ್ದರೆ ದಲಿತ ಸಂಘರ್ಷ ಸಮಿತಿ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಛಲವಾದಿ ಮಹಾಸಭಾ ಖಂಡನೆ: ತಾಲೂಕಿನಲ್ಲಿ ನಡೆದಿರುವ ಈ ಅಮಾನವೀಯ ಕೃತ್ಯವನ್ನು ತಾಲೂಕು ಛಲವಾದಿ ಮಹಾಸಭಾ ತೀವ್ರವಾಗಿ ಖಂಡಿಸಿದೆ. ಘಟನೆಯ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳದಿದ್ದರೆ ಛಲವಾದಿ ಮಹಾಸಭಾ ವಿವಿಧ ಘಟಕಗಳ ನೇತೃತ್ವದಲ್ಲಿ ಚಳವಳಿಗೆ ಮುಂದಾಗಬೇಕಾದೀತು ಎಂದು ಅಧ್ಯಕ್ಷ ಜಿ. ಲಕ್ಷ್ಮೀಪತಿ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

