ಬೆಂಗಳೂರು ಗ್ರಾಮಾಂತರ

ಗ್ಯಾಂಗ್‌ರೇಪ್; ಸಿಪಿಐ ಪ್ರತಿಭಟನೆ

Published On :

ದೊಡ್ಡಬಳ್ಳಾಪುರ: ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ಭಾರತ ಕಮ್ಯೂನಿಷ್ಟ್ ಪಕ್ಷ(ಮಾರ್ಕ್ಸ್‌ವಾದಿ), ದಲಿತ ಹಕ್ಕುಗಳ ಸಮಿತಿ ಮತ್ತು ನೂರಾರು ವಿದ್ಯಾರ್ಥಿಗಳ ನೇತೃತ್ವದಲ್ಲಿ ಗುರುವಾರ ತಾಲೂಕು ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ದಲಿತ ಬಾಲಕಿಯ ಮೇಲೆ ನಡೆದಿರುವ ಕೃತ್ಯ ಅಮಾನವೀಯ. ತಾಲೂಕಿನಲ್ಲಿ ದಲಿತ ದೌರ್ಜನ್ಯ ತಡೆ ಕಾಯ್ದೆ ವಿಫಲವಾಗಿದೆ. ಕಾಯ್ದೆ ಸ್ಥಿತಿಗತಿಗಳ ಬಗ್ಗೆ ಪ್ರತಿ 3 ತಿಂಗಳಿಗೊಮ್ಮೆ ಸಭೆ ಕರೆಯಬೇಕು. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈವರೆಗೆ ಸಭೆ ಕರೆಯುವಲ್ಲಿ ವಿಫಲವಾಗಿದೆ. ಪರಿಶಿಷ್ಟ ಜಾತಿ, ವರ್ಗಗಳ ಆಯೋಗದ ಅಂಕಿ- ಅಂಶಗಳ ಪ್ರಕಾರ ದಕ್ಷಿಣ ಭಾರತದಲ್ಲಿ ಕರ್ನಾಟಕದಲ್ಲೇ ಹೆಚ್ಚಿನ ಸಂಖ್ಯೆಯ ಅತ್ಯಾಚಾರಗಳು ನಡೆದಿವೆ. ಇದಕ್ಕೆ ಪೂರಕವಾಗಿ ಪ್ರಕರಣಗಳು ಮರುಕಳಿಸುತ್ತಲೇ ಇವೆ ಎಂದು ಆರೋಪಿಸಿದರು.
ಸಾಮೂಹಿಕ ಅತ್ಯಾಚಾರ ಹೇಯ ಕೃತ್ಯವಾಗಿದ್ದು, ಪೊಲೀಸರು ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಬೇಕು. ಲಾಬಿಗಳಿಗೆ ಮಣಿದು ಯಾರನ್ನೂ ಕಾನೂನಿನ ಮುಷ್ಠಿಯಿಂದ ಬಿಡಬಾರದು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು. ತಾಲೂಕಿನಲ್ಲಿ ಮಹಿಳೆಯರು- ವಿದ್ಯಾರ್ಥಿಗಳಿಗೆ ರಕ್ಷಣೆ ಇಲ್ಲದಾಗುತ್ತಿದೆ. ದುಡಿಯುವ ವರ್ಗದ ಮಹಿಳೆಯರಿಗಂತೂ ವ್ಯವಸ್ಥೆ ನರಕಸದೃಶವಾಗಿದೆ. ಇಲ್ಲಿನ ಕೈಗಾರಿಕಾ ಪ್ರದೇಶ ಮತ್ತು ಅಪೆರಲ್ ಪಾರ್ಕ್‌ಗಳ ಸುತ್ತಮುತ್ತ ದಿನನಿತ್ಯ ಹಲವು ಪ್ರಕರಣಗಳು ನಡೆಯುತ್ತಿದ್ದರೂ ಸುದ್ದಿಯಾಗದೇ ಮಾಸಿ ಹೋಗುತ್ತಿವೆ. ಈ ಬಗ್ಗೆ ಕಾನೂನು ಸುವ್ಯವಸ್ಥೆ ಬಿಗಿಯಾಗಬೇಕು. ಕೈಗಾರಿಕಾ ಪ್ರದೇಶದಲ್ಲಿ ಪೊಲೀಸ್ ಹೊರ ಠಾಣೆ ಸ್ಥಾಪಿಸಬೇಕು ಎಂದು ಆಗ್ರಹಿಸಲಾಯಿತು.
ಪರಿಹಾರಕ್ಕೆ ಒತ್ತಾಯ: ಅತ್ಯಾಚಾರಕ್ಕೊಳಗಾದ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಿಕೊಡಬೇಕು. ಕಾನೂನಿನ ಪ್ರಕಾರ ಕೂಡಲೇ 1.20 ಲಕ್ಷ ಪರಿಹಾರವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ನೀಡಬೇಕು. ಅಲ್ಲದೆ ಪರಿಹಾರ ಮೊತ್ತವನ್ನು 5 ಲಕ್ಷಕ್ಕೇರಿಸಬೇಕು. ಬಾಲಕಿಯ ಚಿಕಿತ್ಸೆಯ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸಬೇಕು ಮತ್ತು ಆಕೆಗೆ ಭವಿಷ್ಯದ ಹಿತದೃಷ್ಟಿಯಿಂದ ಸರ್ಕಾರ ಸೂಕ್ತ ಆರ್ಥಿಕ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಕಚೇರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಉಳಿದ ಆರೋಪಿಗಳನ್ನು ಬಂಧಿಸಿ: ಪ್ರಕರಣದಲ್ಲಿ 6 ಮಂದಿಯನ್ನು ವಿಚಾರಣೆಗೊಳಪಡಿಸಿದ ಪೊಲೀಸರು ಇಬ್ಬರ ಮೇಲೆ ಮಾತ್ರ ಪ್ರಕರಣ ದಾಖಲಿಸಿದ್ದಾರೆ. ಉಳಿದವರನ್ನೂ ಕೂಡಲೇ ಬಂಧಿಸಬೇಕು. ರಾಜ್ಯದಲ್ಲಿ ಇಂತಹ ಹಲವು ಪ್ರಕರಣಗಳು ಪೊಲೀಸರ ರಾಜಿ ಸಂಧಾನದಲ್ಲೇ ಕೊನೆಗಾಣುತ್ತಿದ್ದು, ನೊಂದವರಿಗೆ ನ್ಯಾಯ ಸಿಗುತ್ತಿಲ್ಲ. ಪಟ್ಟಭದ್ರ ಹಿತಾಸಕ್ತಿಗಳು, ಹಣಬಲದಿಂದ ಎಲ್ಲವನ್ನೂ ಗೆಲ್ಲುತ್ತಿದ್ದಾರೆ ಎಂದು ಆರೋಪಿಸಿದರು.
ಸಭೆ ಕರೆಯಿರಿ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಿಯಮಿತವಾಗಿ ಈ ಬಗೆಯ ಸಾಮಾಜಿಕ ದೌರ್ಜನ್ಯಗಳು ಮತ್ತು ಕಾನೂನು ಸುವ್ಯವಸ್ಥೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಸಭೆಗಳನ್ನು ಕರೆಯಬೇಕು. ತಾಲೂಕಿನಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.
ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಆರ್. ಚಂದ್ರ ತೇಜಸ್ವಿ, ತಾಲೂಕು ಕಾರ್ಯದರ್ಶಿ ಬಿ.ಜಿ. ಹೇಮಂತರಾಜು, ದಲಿತ ಹಕ್ಕುಗಳ ಸಮಿತಿ ಅಧ್ಯಕ್ಷ ಅಂಜನಮೂರ್ತಿ, ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಮುನಿರಾಜು, ಸಿಪಿಐ(ಎಂ)ನ ಕೆ. ರಘುರಾಂ, ಈಶ್ವರಯ್ಯ, ವಿ. ವೆಂಕಟೇಶ್ ಸೇರಿದಂತೆ ಸಿಪಿಐ(ಎಂ) ಮತ್ತು ದಲಿತ ಹಕ್ಕುಗಳ ಸಮಿತಿಯ ಹಲವಾರು ಮುಖಂಡರು ಭಾಗವಹಿಸಿದ್ದರು.
ವಿದ್ಯಾರ್ಥಿಗಳು ಭಾಗಿ: ಪ್ರತಿಭಟನೆಯಲ್ಲಿ ಹಲವು ಶಾಲಾ-ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರೂ ಪಾಲ್ಗೊಳ್ಳುವ ಮೂಲಕ ಯುವತಿಯರು-ವಿದ್ಯಾರ್ಥಿನಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿದರು. ಕೂಡಲೇ ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.