ಡಾ.ಸರೋಜಿನಿ ಮಹಿಷಿ ವರದಿ ಜಾರಿ ಒತ್ತಾಯಿಸಿ ಪ್ರತಿಭಟನೆ
ರಾಮನಗರ: ಡಾ.ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರುನಾಡ ಸೇನೆ ಸಂಘಟನೆ ವತಿಯಿಂದ ನ.25ರಂದು ನಗರದಲ್ಲಿ ಪ್ರತಿಭಟನೆ ನಡೆಸುವುದಾಗಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಎಂ.ಜಗದೀಶ್ ತಿಳಿಸಿದರು.
ಕರ್ನಾಟಕವು ಏಕೀಕರಣಗೊಂಡ ನಂತರ ನಮ್ಮನ್ನಾಳಿದ ಯಾವೊಂದು ಸರ್ಕಾರವೂ ನಾಡಿನಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕೆ ಆದ್ಯತೆ ನೀತಿಯನ್ನು ಜಾರಿಗೊಳಿಸಿಲ್ಲ ಎಂದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ದೂರಿದರು.
ಕನ್ನಡ ನಾಡಿನಲ್ಲಿ ಸ್ಥಾಪನೆಗೊಳ್ಳುವ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಿಲ್ಲ. ಹೀಗಾಗಿ ಕನ್ನಡ ನಾಡಿನಲ್ಲಿ ಕನ್ನಡಿಗರೇ ನಿರುದ್ಯೋಗಿಗಳಾಗಿದ್ದಾರೆ. ಉದ್ಯೋಗದ ಹಕ್ಕನ್ನು ಪಡೆದುಕೊಳ್ಳಲು ಕನ್ನಡಿಗರು ಹೋರಾಟ ನಡೆಸುತ್ತಿದ್ದರೂ ಸರ್ಕಾರ ಮಾತ್ರ ಜಾಣ ಕಿವುಡು ಪ್ರದರ್ಶಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾಡಿನಲ್ಲಿ ಸ್ಥಾಪನೆಯಾಗುವ ಕಂಪೆನಿಗಳಲ್ಲಿ ಶೇ.80ರಷ್ಟು ಉದ್ಯೋಗವನ್ನು ಕನ್ನಡಿಗರಿಗೆ ಮೀಸಲಿಡಬೇಕು ಎಂದು 1983ರಲ್ಲಿ ಡಾ.ಸರೋಜಿನಿ ಮಹಿಷಿ ನೇತೃತ್ವದ ಸಮಿತಿಯು ವರದಿ ನೀಡಿದೆ. 30 ವರ್ಷಗಳೇ ಕಳೆದರೂ ಈ ವರದಿಯನ್ನು ಯಾವೊಂದು ಸರ್ಕಾರವೂ ಅನುಷ್ಠಾನಕ್ಕೆ ತರದೆ ಕನ್ನಡಿಗರಿಗೆ ಅನ್ಯಾಯ ಎಸಗಿವೆ ಎಂದು ಆರೋಪಿಸಿದರು.
ಸ್ವಾಭಿಮಾನ ಶೂನ್ಯ ಜನಪ್ರತಿನಿಧಿಗಳು ಹಾಗೂ ಸರ್ಕಾರದ ಅವೈಜ್ಞಾನಿಕ ನೀತಿಗಳಿಂದಾಗಿ ಕನ್ನಡಿಗರು ನಿರುದ್ಯೋಗಿಗಳಾಗಿಯೇ ಉಳಿದಿದ್ದಾರೆ. ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವಂತೆ ನ.25ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಜಗದೀಶ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

