ಸಮಸ್ಯೆ ಪರಿಹರಿಸಲು ತಿಂಗಳಿಗೊಮ್ಮೆ ಜನಸ್ಪಂದನೆ
ಸೂಲಿಬೆಲೆ: ಹೊಸಕೋಟೆ ತಾಲೂಕಿನಲ್ಲಿ ಜನರ ಸಮಸ್ಯೆಗಳನ್ನು ಆಲಿಸಲು ತಿಂಗಳಿಗೊಮ್ಮೆ ತಾಲೂಕು ಕಚೇರಿಯಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು ಎಂದು ಶಾಸಕ ಎನ್.ನಾಗರಾಜ್ ಹೇಳಿದರು.
ಸೂಲಿಬೆಲೆ ನಾಡಕಚೇರಿ ಆವರಣದಲ್ಲಿ ನಡೆದ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಮಾಸಾಶನ ಮಂಜೂರಾತಿ ಪತ್ರಗಳನ್ನು ವಿತರಿಸಿ ಮಾತನಾಡಿದರು.
ಬೆಳಗಾವಿ ಅಧಿವೇಶನ ನಂತರ ತಾಲೂಕು ಕಚೇರಿಯಲ್ಲಿ ಪ್ರತಿ ತಿಂಗಳಿಗೊಮ್ಮೆ ಎಲ್ಲ ಇಲಾಖೆ ಅಧಿಕಾರಿಗಳನ್ನು ಒಂದೆಡೆ ಸೇರಿಸಿ ಜನಸ್ಪಂದನೆ ಮೂಲಕ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ನೀಡುವ ಮೂಲಕ ಆಡಳಿತಕ್ಕೆ ಹೊಸ ರೂಪ ನೀಡುತ್ತೇನೆ ಎಂದರು.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಜನಪರ ಯೋಜನೆಗಳನ್ನು ರೂಪಿಸುತ್ತಿದೆ.ವಿಪಕ್ಷದ ಮರಳು ಮಾತಿಗೆ ಮತದಾರರು ಮೋಸ ಹೋಗಬಾರದು. ಬಡವರಿಗೆ ಸರ್ಕಾರದ ಯೋಜನೆಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಲ್ಲಿ ಅಧಿಕಾರಿಗಳು ಎಚ್ಚರವಹಿಸಬೇಕು. ಪಿಂಚಣಿ ಅದಾಲತ್ ಎಲ್ಲ ಹೋಬಳಿ ಕೇಂದ್ರಗಳಲ್ಲಾಗಿದ್ದು, ಕಸಬಾ, ಪುರಸಭೆ ವ್ಯಾಪ್ತಿ ಮಾತ್ರ ಉಳಿದಿದೆ. ತಾಲೂಕಿನ ಎಲ್ಲ ಹೋಬಳಿಗಳಿಗಿಂತ ಹೆಚ್ಚು 960 ಪಿಂಚಣಿದಾರರನ್ನು ಸೂಲಿಬೆಲೆ ಹೋಬಳಿಯಲ್ಲಿ ಆಯ್ಕೆ ಮಾಡಿದ್ದು ಸಂತಸದಾಯಕ ಎಂದು ತಿಳಿಸಿದರು.
ತಹಸೀಲ್ದಾರ್ ಕುಮಾರಸ್ವಾಮಿ ಮಾತನಾಡಿ, ಸರ್ಕಾರಿ ಯೋಜನೆಗಳು ಬಡವರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಕಾಳಜಿಯಿಟ್ಟು ಕೆಲಸ ಮಾಡಬೇಕು. ಸರ್ಕಾರಿ ಜಮೀನು ಕಬಳಿಸಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾವ ಗ್ರಾಮದಲ್ಲಿ ಸ್ಮಶಾನದ ಕೊರತೆ ಇದೆಯೇ ಅಂಥ ಕಡೆ ಜಮೀನು ಮಂಜೂರಾತಿಗಾಗಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಒತ್ತುವರಿ ಜಮೀನುಗಳನ್ನು ಬಿಡಿಸುವ ಕಾರ್ಯ ನಡೆಯುತ್ತಿದೆ. ಸರ್ಕಾರಿ ಸೌಲಭ್ಯಗಳ ಉದ್ದೇಶಕ್ಕೆ ಜಮೀನುಗಳನ್ನು ಉಳಿಸಿಕೊಳ್ಳಬೇಕಿದೆ ಎಂದು ನುಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪ್ರಸಾದ್ ಮಾತನಾಡಿ, ಸರ್ಕಾರ ಕ್ಷೀರ ಭಾಗ್ಯ, ಅನ್ನಭಾಗ್ಯ, ಶಾದಿ ಭಾಗ್ಯದಂಥ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ತಿಳಿಸಿದರು.
ಉಪ ತಹಸೀಲ್ದಾರ್ ರಾಮಕೃಷ್ಣಪ್ಪ, ಮುಖಂಡ ಯರೇಗೌಡ, ಗೋಪಾಲಪ್ಪ, ಮುನಿಶಾಮಣ್ಣ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

