ಆಸ್ತಿ ವಿಚಾರ ಮಾರಣಾಂತಿಕ ಹಲ್ಲೆ: ಪಾತಕಿಗಳನ್ನು ಗಡಿಪಾರು ಮಾಡಿ
ಕ.ಪ್ರ.ವಾರ್ತೆ ರಾಮನಗರ ನ.25
ತಾಲೂಕಿನ ಚಿಕ್ಕಗಂಗವಾಡಿ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಮಾರಣಂತಿಕ ಹಲ್ಲೆಗೊಳಗಾಗಿರುವ ಭಾಗ್ಯಮ್ಮ ಮತ್ತು ಶಶಿಕುಮಾರ್ ಅವರಿಗೆ ನ್ಯಾಯ ದೊರಕಿಸಿಕೊಡಬೇಕು ಹಾಗೂ ಅವರನ್ನು ಕೊಲೆ ಮಾಡಲೆತ್ನಿಸಿದ ಪಾತಕಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಸೋಮಶೇಖರ್ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
ನ.20ರಂದು ಜಮೀನೊಂದರಲ್ಲಿ ಕೃಷಿ ಕಾರ್ಯದಲ್ಲಿ ನಿರತರಾಗಿದ್ದ ಭಾಗ್ಯಮ್ಮ ಮತ್ತು ಈಕೆಯ ಮಗ ಶಶಿಕುಮಾರ್ ಅವರನ್ನು ಕತ್ತು ಕೊಯ್ದು ಕೊಲೆ ಮಾಡಲು ವಿಫಲ ಯತ್ನ ನಡೆಸಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಿರ್ಲಕ್ಷ್ಯ ಮನೋಭಾವ ತಾಳಿದ್ದಾರೆ ಎಂದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
ಘಟನೆ ನಡೆದು 5 ದಿನ ಕಳೆದರೂ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ. ಕಣ್ಣೆದುರೇ ಇದ್ದರೂ ಬಂಧಿಸದಿರುವುದು ಅನುಮಾನಕ್ಕೆಡೆ ಮಾಡಿಕೊಟ್ಟಿದೆ. ಭಾಗ್ಯಮ್ಮ ಮತ್ತು ಕುಟುಂಬದ ಮೇಲೆ ಈ ಆರೋಪಿಗಳು ಹಲ್ಲೆ ನಡೆಸಿರುವುದು 4ನೇ ಬಾರಿಯಾಗಿದೆ. ಆದ್ದರಿಂದ ಪೊಲೀಸರು ಗೂಂಡಾ ಕಾಯ್ದೆ ಅನ್ವಯ ಕೇಸು ದಾಖಲಿಸಿ ಗಡೀಪಾರು ಮಾಡಬೇಕು ಎಂದು ಆಗ್ರಹಿಸಿದರು.
ಈ ಘಟನೆಗೆ ಪರೋಕ್ಷವಾಗಿ ಕಂದಾಯ ಇಲಾಖೆ ಅಧಿಕಾರಿಗಳೂ ಕೂಡ ಕಾರಣಕರ್ತರಾಗಿದ್ದಾರೆ. ಜಮೀನು ವಿವಾದವನ್ನು ಶೀಘ್ರವಾಗಿ ಬಗೆಹರಿಸಿದ್ದಲ್ಲಿ ಈ ಘಟನೆ ನಡೆಯುತ್ತಲೇ ಇರಲಿಲ್ಲ. ಅಧಿಕಾರಿಗಳು ಲಂಚದಾಸೆಗಾಗಿ ಮಾಡಿರುವ ತಪ್ಪಿನಿಂದ ಭಾಗ್ಯಮ್ಮ ಅವರ ಕುಟುಂಬ ಪರಿತಪಿಸುತ್ತಿದೆ ಎಂದರು.
ಜಿಲ್ಲೆಯಲ್ಲಿ ಪದೇ ಪದೇ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯುತ್ತಿದ್ದರೂ ಪೊಲೀಸ್ ಸೇರಿದಂತೆ ಎಲ್ಲಾ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ದಲಿತರು ನೆಮ್ಮದಿಯಿಂದ ಜೀವನ ನಡೆಸದಂತ ಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಹೀಗೇ ಮುಂದುವರಿದರೆ ಸಂಘಟನೆ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಸೋಮಶೇಖರ್ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.
ಗೋಷ್ಠಿಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಾಂತಮೂರ್ತಿ, ಶಿವಲಿಂಗಯ್ಯ, ಚಕ್ಕಲೂರು ಚೌಡಯ್ಯ, ಕೃಷ್ಣ, ಶಿವಮುತ್ತು, ಸಿದ್ದವೀರಯ್ಯ, ಅಪ್ಪಾಜಿ, ಮಹೇಶ್ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

