ಬೆಂಗಳೂರು ಗ್ರಾಮಾಂತರ

ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ 25 ಲಕ್ಷ ಪರಿಹಾರ ವಿತರಿಸಿ: ಕರವೇ ಆಗ್ರಹ

Published On :

ಕ.ಪ್ರ.ವಾರ್ತೆ   ರಾಮನಗರ   ನ.27
ಉದ್ಧಟತನದಿಂದ ವರ್ತಿಸಿರುವ ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ ಬಂಧನ ಹಾಗೂ ಬೆಳಗಾವಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ರು.25 ಲಕ್ಷ ಪರಿಹಾರ ವಿತರಣೆಗೆ ಒತ್ತಾಯಿಸಿ ಕರವೇ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟಿಸಿದರು.
ನಗರದ ಐಜೂರು ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ರಸ್ತೆಯಲ್ಲಿ ಟೈರ್‌ಗಳಿಗೆ ಬೆಂಕಿ ಹೆಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಸಂಭಾಜಿ ಪಾಟೀಲ್, ಎಂಇಎಸ್, ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು.  ನಿನ್ನೆಯಷ್ಟೇ ಸರ್ಕಾರದ ಶವ ಯಾತ್ರೆ ಮಾಡುವುದಾಗಿ ಹೇಳಿಕೆ ನೀಡಿ ಕ್ಷಮೆಯಾಚಿಸಿದ್ದ ಸಂಭಾಜಿ ಪಾಟೀಲ್, ಬುಧವಾರ ಬೆಳಗಾವಿಯನ್ನು ಮಹರಾಷ್ಟ್ರಕ್ಕೆ ಸೇರಿಸಬೇಕೆಂದು ಮತ್ತೊಂದು ನಾಡ ವಿರೋಧಿ ಹೇಳಿಕೆ ನೀಡಿರುವುದನ್ನು ಪ್ರತಿಭಟನಾಕಾರರು ಖಂಡಿಸಿದರು.
ಅಸಂಬದ್ಧ ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತಿರುವ ಸಂಭಾಜಿ ಪಾಟೀಲ್ ಅವರನ್ನು ತಕ್ಷಣ ಬಂಧಿಸಬೇಕು. ಅವರ ಶಾಸಕತ್ವ ಅನರ್ಹಗೊಳಿಸಬೇಕು. ಕರವೇ ಕಾರ್ಯಕರ್ತರ ಹೂಡಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಸೂಕ್ತ ಪರಿಹಾರಕ್ಕೆ ಆಗ್ರಹ: ಬೆಳಗಾವಿ ಸುವರ್ಣ ಸೌಧದ ಎದುರು ಕಬ್ಬಿಗೆ ಬೆಂಬಲ ಬೆಲೆ ವಿಷಯವಾಗಿ ನಡೆಯುತ್ತಿರುವ ರೈತ ಹೋರಾಟದ ವೇಳೆ ನಡೆದ ರೈತ ವಿಠಲ ಅರಭಾವಿ ಆತ್ಮಹತ್ಯೆಗೆ ರಾಜ್ಯ ಸರ್ಕಾರವೇ ಕಾರಣವಾಗಿದೆ. ರೈತನ ಬಲಿ ಪಡೆದ ಸರ್ಕಾರ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯಬಾರದು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕಬ್ಬು ಬೆಲೆ ಮತ್ತು ರೈತರ ಎಲ್ಲ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕು. ಮೃತ ರೈತನ ಕುಟುಂಬಕ್ಕೆ ರು.25 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಬಿ.ಶ್ರೀಧರ್ ಹೊಸೂರು, ಎಂ.ಎಸ್. ಸತ್ಯನಾರಾಯಣ, ಶಂಭೂಗೌಡ, ಸಾಗರ್, ಕಬ್ಬಾಳೇಗೌಡ, ದೇವರಾಜ್, ಪುಟ್ಟೇಗೌಡ, ರಾಮಾಂಜು, ರಮಾನಂದಗೌಡ, ಹೇಮಂತ್, ಗಂಗಾಧರ್, ಕೀರ್ತಿ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.