ಬೆಂಗಳೂರು ಗ್ರಾಮಾಂತರ

ಬಗರ್ಹುಕುಂ ಸಕ್ರಮಕ್ಕೆ ಆಗ್ರಹ

Published On :

ಕ.ಪ್ರ.ವಾರ್ತೆ  ರಾಮನಗರ  ನ.28
ಬಗರ್ಹುಕುಂ ಸಾಗುವಳಿ ಸಕ್ರಮೀಕರಣ ಮತ್ತು ಭೂ ರಹಿತರಿಗೆ ಭೂ ಮಂಜೂರಾತಿ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಹುಜನ ಸಮಾಜ ಪಕ್ಷ(ಬಿಎಸ್ಪಿ) ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರದಿಂದ ಅಹೋರಾತ್ರಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ.
ಪಕ್ಷದ ನೂರಾರು ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಪ್ರತಿಭಟನೆ ಪ್ರಾರಂಭಿಸಿದರು. ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಮತ್ತು ಜಿಲ್ಲಾಡಳಿತ, ಅಧಿಕಾರಿ ಶಾಹಿಯ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಂಪತ್ತು ಸಮಾನಾಂತರವಾಗಿ ಹಂಚಿಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯವಾಗಿದೆ. ಅದಕ್ಕೆ ವ್ಯತಿರಿಕ್ತವಾಗಿ ಸಂಪತ್ತು ಕೆಲವೇ ವ್ಯಕ್ತಿಗಳ ಮುಷ್ಠಿ, ಮಾಲೀಕತ್ವದಲ್ಲಿದೆ. ಹೀಗಾಗಿ ಅಸಮಾನತೆ ತಾಂಡವಾಡುತ್ತಿದೆ ಎಂದು ಅವರು ಕಿಡಿ ಕಾರಿದರು.
ರಾಮನಗರ ಜಿಲ್ಲಾದ್ಯಂತ ಸಹಸ್ರಾರು ನಿರ್ವಸತಿಗರು ಭೂ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿ ಕಾದು ಕುಳಿತಿದ್ದಾರೆ. ಬಗರ್ಹುಕುಂ ಸಾಗುವಳಿಯಡಿ ಸಕ್ರಮೀಕರಣಕ್ಕೂ ವರ್ಷಾನುಗಟ್ಟಲೆಯಿಂದ ಸಲ್ಲಿಸಿರುವ ಅರ್ಜಿಗಳ ವಿಲೇವಾರಿ ಆಗಿಲ್ಲ ಎಂದು ಅವರು ಆರೋಪಿಸಿದರು.  ಜನಪ್ರತಿನಿಧಿಗಳ ನಿರ್ಲಕ್ಷ್ಯ, ಅಧಿಕಾರಿಗಳ ತಾತ್ಸಾರದಿಂದ ಶೋಷಿತರ ಬದುಕಿನ ಬವಣೆಗೆ ಕೊನೆ ಇಲ್ಲದಂತಾಗಿದೆ. ಜನಪ್ರಿಯ ಯೋಜನೆಗಳ ಹೆಸರಿನಲ್ಲಿ ಸರ್ಕಾರ ಕಣ್ಣೊರೆಸುವ ತಂತ್ರ ಮಾಡುವ ಬದಲು ಜನರನ್ನು ಆರ್ಥಿಕ ಸ್ವಾವಲಂಬಿಗಳಾಗಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.  ಸರ್ಕಾರವು ವಿ.ಬಾಲಸುಬ್ರಹ್ಮಣಿಯನ್  ವರದಿಯನ್ನು ಜಾರಿಗೊಳಿಸಬೇಕು. ನಮೂನೆ 50, 53ರಲ್ಲಿ ಅರ್ಜಿ ಸಲ್ಲಿಸಿರುವ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪಂಗಡದ ಸಾಗುವಳಿದಾರರಿಗೆ ಭೂ ಮಂಜೂರಾತಿ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್, ಆಂಜನಪ್ಪ, ಶಿವರಾಂ, ರಮೇಶ್, ನಿಂಗರಾಜು, ನಾಗೇಶ್, ಗೌರಮ್ಮ, ಪ್ರೇಮ, ಶಿವಮಾದು, ಕೃಷ್ಣಪ್ಪ, ಮುನಿರಾಜು, ಸುಜೀವನ್ಕುಮಾರ್ ಮತ್ತಿತರರು
ಧರಣಿ ನೇತೃತ್ವ ವಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.