ತಾಲೂಕಾದ್ಯಂತ ಕಾವೇರಿದ ಪ್ರಚಾರ
ದೊಡ್ಡಬಳ್ಳಾಪುರ: ತಾಲೂಕಿನಾದ್ಯಂತ ಲೋಕಸಭಾ ಚುನಾವಣಾ ಪ್ರಚಾರ ರಂಗೇರಿದೆ. ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಮತದಾರರ ಓಲೈಕೆಯಲ್ಲಿ ತೊಡಗಿದ್ದಾರೆ. ಈಗಾಗಲೇ ಗ್ರಾಮಾಂತರ ಪ್ರದೇಶದ ವಿವಿಧ ಹಳ್ಳಿಗಳಲ್ಲಿ ಪ್ರಚಾರ ಬಿರುಸಾಗಿದೆ.
ಈ ಬಾರಿ ಕಾಂಗ್ರೆಸ್ನಿಂದ ಹಾಲಿ ಸಂಸದ ಎಂ.ವೀರಪ್ಪ ಮೊಯ್ಲಿ ಕಣಕ್ಕಿಳಿದಿದ್ದು, ಬಿಜೆಪಿಯಿಂದ ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ ಅಖಾಡದಲ್ಲಿದ್ದಾರೆ. ಎಲ್ಲರ ನಿರೀಕ್ಷೆ ಮೀರಿ ಜೆಡಿಎಸ್ನಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸಿರುವುದು ಕ್ಷೇತ್ರದ ರಾಜಕೀಯ ಲೆಕ್ಕಾಚಾರಗಳ ವಿಶ್ಲೇಷಣೆಗೆ ಹೊಸ ತಿರುವು ನೀಡಿದೆ. ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್, 2 ರಲ್ಲಿ ಜೆಡಿಎಸ್ ಮತ್ತು ತಲಾ 1 ಕ್ಷೇತ್ರದಲ್ಲಿ ಬಿಜೆಪಿ ಮತ್ತು ಪಕ್ಷೇತರ ಶಾಸಕರಿದ್ದಾರೆ. ಕ್ಷೇತ್ರ ವ್ಯಾಪ್ತಿಯ 4 ಕ್ಷೇತ್ರಗಳಲ್ಲಿ ಜೆಡಿಎಸ್ 2 ಮತ್ತು 3 ನೇ ಸ್ಥಾನದಲ್ಲಿದ್ದು, ಪ್ರಬಲ ಸ್ಪರ್ಧೆಗೆ ಸಜ್ಜಾಗಿದೆ. ಅಲ್ಲದೆ ಮೋದಿ ಅಲೆ, ಬಿಜೆಪಿಯ ಚೇತರಿಕೆ ಕೂಡ ಈ ಬಾರಿಯ ಚುನಾವಣೆಯಲ್ಲಿ ಪ್ರಮುಖ ವಿಷಯ. ಹೀಗಾಗಿ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಕಂಡು ಬರುತ್ತಿದೆ.
ಪ್ರಚಾರ ಭರಾಟೆ: ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಶಾಸಕ ಟಿ.ವೆಂಕಟರಮಣಯ್ಯ, ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಚಾರ ಆರಂಭವಾಗಿದೆ. ಸಾಸಲು, ದೊಡ್ಡಬೆಳವಂಗಲ, ಮಧುರೆ ಹೋಬಳಿಗಳಲ್ಲಿ ಕ್ಷೇತ್ರದ ಅಭ್ಯರ್ಥಿ ವೀರಪ್ಪ ಮೊಯ್ಲಿ ಈಗಾಗಲೇ ಪ್ರಚಾರ ಸಭೆಗಳನ್ನು ನಡೆಸಿ ಹೋಗಿದ್ದಾರೆ. ಇನ್ನು ಗ್ರಾಮ ಮಟ್ಟದಲ್ಲಿ ಕಾರ್ಯಕರ್ತರು ಪ್ರಚಾರದಲ್ಲಿ ತೊಡಗಿದ್ದಾರೆ.
ಬಿಜೆಪಿಯಂತೂ ಅದ್ಧೂರಿಯಾಗಿಯೇ ತನ್ನ ಪ್ರಚಾರವನ್ನು ಆರಂಭಿಸಿದೆ. ಪಕ್ಷದ ರಾಷ್ಟ್ರಾಧ್ಯಕ್ಷ ರಾಜನಾಥಸಿಂಗ್ ಇಲ್ಲಿನ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ಕೊಟ್ಟರು. ಅದಾದ ನಂತರ ಅಭ್ಯರ್ಥಿ ಬಚ್ಚೇಗೌಡ ದೊಡ್ಡಬಳ್ಳಾಪುರ ನಗರದ ಹಲವು ಭಾಗಗಳು ಮತ್ತು ಗ್ರಾಮಾಂತರ ಪ್ರದೇಶದ ಕೆಲ ಹಳ್ಳಿಗಳಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಕೊನೆ ಹಂತದವರೆಗೆ ಅಭ್ಯರ್ಥಿಯನ್ನು ಪ್ರಕಟಿಸದೆ ಗೌಪ್ಯತೆ ಕಾಯ್ದುಕೊಂಡಿದ್ದ ಜೆಡಿಎಸ್ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವುದರೊಂದಿಗೆ ಚುನಾವಣಾ ಕಣವನ್ನು ರಂಗೇರಿಸಿದೆ.
ಕುಮಾರಸ್ವಾಮಿ ಗುರುವಾರದಂದು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ರೋಡ್ ಶೋ ಮತ್ತು ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಪಕ್ಷದ ಪರ ಅನೇಕ ಮಾಜಿ ಸಚಿವರು, ಶಾಸಕರು ಹಾಗೂ ಸ್ಥಳೀಯ ಮುಖಂಡರು ಹಂತ ಹಂತವಾಗಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ಅರಕೇಶ್ ಪರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅರವಿಂದ ಕೇಜ್ರಿವಾಲ್ ರೋಡ್ ಶೋ ನಡೆಸಿ ಮತಯಾಚಿಸಿದ್ದಾರೆ. ಉಳಿದಂತೆ
ಸಿಪಿಎಂ, ಬಿಎಸ್ಪಿ ಸೇರಿದಂತೆ ಅನೇಕ ರಾಜಕೀಯ ಪಕ್ಷಗಳು, ಪಕ್ಷೇತರ ಅಭ್ಯರ್ಥಿಗಳು ಕೂಡ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.
ಕುಮಾರಸ್ವಾಮಿ ರೋಡ್ ಶೋ ನಾಳೆ
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಹೋಬಳಿಗಳು ಮತ್ತು ನಗರ ಪ್ರದೇಶದಲ್ಲಿ ಏ.3ರಂದು ಗುರುವಾರ ರೋಡ್ ಶೋ ಮೂಲಕ ಮತಯಾಚಿಸಲಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಕ್ಷದ ತಾಲೂಕು ಅಧ್ಯಕ್ಷ ಆರ್. ಗೋವಿಂದರಾಜು, ಎಚ್ಡಿಕೆ ನೆಲಮಂಗಲದಿಂದ ದೊಡ್ಡಬಳ್ಳಾಪುರ ತಾಲೂಕಿಗೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ 2 ಗಂಟೆಗೆ ದೊಡ್ಡಬೆಳವಂಗಲದಲ್ಲಿ ಚುನಾವಣಾ ಪ್ರಚಾರ ಯಾತ್ರೆ ಕೈಗೊಳ್ಳುವ ಅವರು, ನಂತರ ಕನಸವಾಡಿಯ ಸುಪ್ರಸಿದ್ಧ ಶ್ರೀಮಧುರೆ ಶನಿಮಹಾತ್ಮ ದೇವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮತಯಾಚಿಸಲಿದ್ದಾರೆ. ಸಿಡಿ ಅಗ್ರಹಾರ, ಅರಳುಮಲ್ಲಿಗೆ ಮೂಲಕ ದೊಡ್ಡಬಳ್ಳಾಪುರ ನಗರಕ್ಕೆ ಬಂದು ಪ್ರಮುಖ ಬೀದಿಗಳಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ. ಕುಮಾರಸ್ವಾಮಿ ಅವರೊಂದಿಗೆ ಮಾಜಿ ಸಚಿವ ಜಮೀರ್ ಅಹ್ಮದ್, ವಿಧಾನಪರಿಷತ್ ಸದಸ್ಯ ಇ.ಕೃಷ್ಣಪ್ಪ, ಶಾಸಕ ಡಾ.ಶ್ರೀನಿವಾಸಮೂರ್ತಿ, ಪಿಳ್ಳಮುನಿಶಾಮಪ್ಪ ಮತ್ತಿತರರು ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

