ಬೆಂಗಳೂರು ಗ್ರಾಮಾಂತರ

ಜಿಲ್ಲಾದ್ಯಂತ ಮತದಾರರ ಜಾಗೃತಿ

Published On :

ಚನ್ನಪಟ್ಟಣ: ಜಿಲ್ಲೆಯಲ್ಲಿ ನೂರಕ್ಕೆ ನೂರರಷ್ಟು ಮತದಾನ ನಡೆಯುವಂತೆ ಮಾಡಬೇಕೆಂಬ ಗುರಿಯೊಂದಿಗೆ ಜಿಲ್ಲೆಯಾದ್ಯಂತ  ಮತದಾರರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೆಂಕಟೇಶ್ ತಿಳಿಸಿದರು.
ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಮತದಾರ ಜಾಗೃತಿ ಅಭಿಯಾನ (ಸ್ವೀಪ್) ಅಂಗವಾಗಿ ಅಕ್ಷರ ಇಡ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಜಗತ್ತಿನ  ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಜನತಂತ್ರ ವ್ಯವಸ್ಥೆಗೆ ಗೌರವ ಸಲ್ಲಬೇಕೆಂದರೆ ಪ್ರತಿಯೊಬ್ಬ ಮತದಾರನೂ ಮತ ಚಲಾವಣೆ ಮಾಡಬೇಕು ಎಂದರು.
ಮತದಾರರಿಗೆ ಮತದಾನದ ಮಹತ್ವದ ಬಗ್ಗೆ ವಿನೂತನ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸುತ್ತಿದ್ದು, ಈಬಾರಿಯ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಮತದಾನವಾಗುವಂತೆ ಜಾಗೃತಿ ಮೂಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಮ್ಮ ಸಂವಿಧಾನ  ಪ್ರಜೆಗಳೇ ಪ್ರಭುಗಳು ಎಂದು ಸಾರಿ ಹೇಳಿದೆ. ಜನತಂತ್ರ ವ್ಯವಸ್ಥೆಯಲ್ಲಿ ಜನತೆಯ ಕೈಯಲ್ಲಿ ಅಧಿಕಾರ ಕೇಂದ್ರೀಕೃತವಾಗಿದ್ದು ಈ ಅಧಿಕಾರವನ್ನು ಚಲಾಯಿಸುವುದರಿಂದ ಮಾತ್ರ ದಕ್ಷ ಆಡಳಿತ ವ್ಯವಸ್ಥೆಯನ್ನು ರಚಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದ ಅವರು, ಈ ಬಾರಿಯ ಚುನಾವಣೆಯಲ್ಲಿ  ಪ್ರತಿಯೊಬ್ಬ ಮತದಾರನೂ ಮತದಾನ ಮಾಡಬೇಕೆಂದು ತಿಳಿಸಿದರು.
ಚುನಾವಣಾ ಆಯೋಗ ಮತದಾರರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಮತದಾನದ ಅವಧಿಯನ್ನು ಒಂದು ತಾಸುಗಳ ಕಾಲ ಹೆಚ್ಚಿಸಿದೆ. ಈ ಹಿಂದೆ ಬೆಳಿಗ್ಗೆ 7 ರಿಂದ 5ಗಂಟೆಯ ವರೆಗಿದ್ದ ಮತದಾನ ಸಮಯ ಈಬಾರಿ ಸಂಜೆ 6 ಗಂಟೆಯವರೆಗೆ ಹೆಚ್ಚಿಸಲಾಗಿದ್ದು ಈ ಅವಧಿಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಆಮಿಷಕ್ಕೆ ಬಲಿಯಾಗ ಬೇಡಿ: ಮುಕ್ತ ಮತ್ತು ನಿರ್ಭೀತ ಮತದಾನಕ್ಕಾಗಿ ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಮತದಾರರು  ಯಾವುದೇ ಅಂಜಿಕೆ ಇಲ್ಲದೆ ಮತದಾನ ಮಾಡಬಹುದಾಗಿದ್ದು, ಯಾವುದೇ ಆಮಿಷಕ್ಕೆ ಬಲಿಯಾಗದೆ ಮತದಾನ ಮಾಡುವಂತೆ ಮನವಿ ಮಾಡಿದರು.
ಜಾಗೃತಿಗಾಗಿ ಅಕ್ಷರ ಇಡ್ಲಿ: ಈ ಸಂದರ್ಭದಲ್ಲಿ ಮಾತನಾಡಿದ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವೀರಭದ್ರಪ್ಪ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನಿರ್ದೇಶನದಂತೆ ನಮ್ಮ ಇಲಾಖೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಅಕ್ಷರ ಇಡ್ಲಿ ಕಾರ್ಯಕ್ರಮದ ಮೂಲಕ ಸಾರ್ವಜನಿಕರಲ್ಲಿ ಮತ ಜಾಗೃತಿ ಮೂಡಿಸುತ್ತಿದೆ. ರಾಮನಗರ ಮತ್ತು ಮಾಗಡಿಯಲ್ಲಿ ಅಕ್ಷರ ದೋಸ ಮೂಲಕ ಜಾಗೃತಿ ಮೂಡಿಸಲಾಗಿದ್ದು ಇದೇ ಮೊದಲ ಬಾರಿಗೆ ಅಕ್ಷರ ಇಡ್ಲಿ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಇಡ್ಲಿಯ ಮೇಲೆ ಏ.17 ರಂದು ತಪ್ಪದೇ ಮತಹಾಕಿ ಎಂಬ ಸಂದೇಶ ನೀಡುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವುದಾಗಿ ಮಾಹಿತಿ ನೀಡಿದರು. ಸ್ವೀಪ್ ಯೋಜನೆಯಡಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ಹಮ್ಮಿ ಕೊಂಡಿರುವುದಾಗಿ ಅವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.