ಬಡವರ ಬದುಕಿನ ಹೋರಾಟ ನನ್ನ ಸಿದ್ಧಾಂತ: ವೀರಪ್ಪ ಮೊಯ್ಲಿ
ದೊಡ್ಡಬಳ್ಳಾಪುರ: ನಾನು ಓಟಿನ ಲಾಭಕ್ಕಾಗಿ ಕೆಲಸ ಮಾಡಿಲ್ಲ. ಬದಲಾಗಿ ಬಡವರ ಬದುಕಿನ ಪ್ರಶ್ನೆಯನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಿದ್ದೇನೆ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ವೀರಪ್ಪ ಮೊಯ್ಲಿ ಹೇಳಿದರು.
ತಾಲೂಕಿನ ಕೊನಘಟ್ಟದಲ್ಲಿ ಗುರುವಾರ ಮಧ್ಯಾಹ್ನ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಎತ್ತಿನಹೊಳೆ ಮತ್ತು ಶಾಶ್ವತ ನೀರಾವರಿ ಯೋಜನೆಗಳನ್ನು ಅವೈಜ್ಞಾನಿಕ ಎಂದು ಕರೆದು ಜಾರಿ ಸಾಧ್ಯವಿಲ್ಲ ಎಂದು ಹೇಳಿದ್ದ ಕುಮಾರಸ್ವಾಮಿ ದಿಢೀರನೇ ವರಸೆ ಬದಲಿಸಿದ್ದಾರೆ. ಕೇವಲ ಪ್ರತಿಷ್ಠೆಯ ರಾಜಕಾರಣಕ್ಕಾಗಿ ರಾಮನಗರದಿಂದ ಚಿಕ್ಕಬಳ್ಳಾಪುರಕ್ಕೆ ಬಂದಿದ್ದಾರೆ. ಕೋಮುವಾದಿ ಶಕ್ತಿಗಳು ಈ ದೇಶದ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಜನರನ್ನು ಓಟ್ಬ್ಯಾಂಕ್ ಆಗಿ ಸೃಷ್ಟಿಸಿಕೊಳ್ಳುವ ಹುನ್ನಾರ ಮಾಡುತ್ತಿವೆ. ಅಂತಹ ಶಕ್ತಿಗಳು ಬೆಳೆಯದಂತೆ ಚಿವುಟಿ ಹಾಕುವ ಕೆಲಸವನ್ನು ಅಗತ್ಯವಾಗಿ ಮಾಡಬೇಕಿದೆ. ಬಿಜೆಪಿ ದೇಶದ ಐಕ್ಯತೆಗೆ ಮಾರಕವಾಗುವ ಪ್ರಣಾಳಿಕೆಯನ್ನು ಹೊರತಂದಿದೆ. ಇದು ಜಾತ್ಯತೀತ ರಾಷ್ಟ್ರದ ಪರಿಕಲ್ಪನೆಗೆ ವಿರುದ್ಧ ಎಂದರು.
ಚಿಕ್ಕಬಳ್ಳಾಪುರ ಕ್ಷೇತ್ರದ ಜನತೆಯ ಬೆಂಬಲದಿಂದ ರಾಜಕೀಯ ಮರುಜನ್ಮ ಪಡೆದು ರಾಷ್ಟ್ರ ರಾಜಕಾರಣದಲ್ಲಿ ಗಣನೀಯ ಕೆಲಸ ಮಾಡಿದ್ದೇನೆ. ಆ ಮೂಲಕ ಕ್ಷೇತ್ರಕ್ಕೂ ಕೂಡ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ. ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ ಉದ್ಯೋಗ ಮೇಳಗಳು ಅನೇಕ ವಿದ್ಯಾವಂತ ಯುವಕರಿಗೆ ಬದುಕಿನ ಮಾರ್ಗವನ್ನು ತೋರಿಸಿಕೊಟ್ಟಿವೆ. ಶಿಕ್ಷಣ, ಮೂಲಸೌಕರ್ಯ ಮತ್ತು ಆರೋಗ್ಯಕ್ಕೆ ಒತ್ತು ನೀಡಿ ಕೆಲಸ ಮಾಡಿದ್ದೇನೆ. ಎತ್ತಿನಹೊಳೆ ಯೋಜನೆಯನ್ನು ನನ್ನ ಸ್ವಾರ್ಥಕ್ಕಾಗಿ ಮಾಡುತ್ತಿಲ್ಲ. ಈ ಜನರ ನೀರಿನ ಬವಣೆ ನೀಗಿಸುವುದು ನನ್ನ ಧರ್ಮ.
ಅದನ್ನು ರಾಜಕಾರಣಕ್ಕೆ ಬಳಸಿಕೊಳ್ಳುವಷ್ಟು ಸಣ್ಣತನದ ರಾಜಕಾರಣಿ ನಾನಲ್ಲ ಎಂದರು.
ಕೇಂದ್ರದ ಯುಪಿಎ ಸರ್ಕಾರ ಹಲವು ಸವಾಲುಗಳನ್ನು ಮುಂದಿಟ್ಟುಕೊಂಡೂ ಕೂಡ ಉತ್ತಮ ಕೆಲಸ ಮಾಡಿದೆ. ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಬಲಿಷ್ಠ ಶಕ್ತಿಯಾಗಿ ರೂಪಗೊಳ್ಳಲಿದೆ. ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಮೋದಿ ಹೆಸರಿನಲ್ಲಿ ಓಟು ಕೇಳುವ ಬಿಜೆಪಿಗೆ ಪಕ್ಷದ ಅಸ್ತಿತ್ವದ ಪ್ರಶ್ನೆ ಎದುರಾಗಿರಬೇಕು ಎಂಬ ಅನುಮಾನ ನನ್ನನ್ನು ಕಾಡುತ್ತಿದೆ ಎಂದರು.
ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ, ಶಾಸಕ ಟಿ.ವೆಂಕಟರಮಣಯ್ಯ, ಜಿ.ಪಂ ಮಾಜಿ ಅಧ್ಯಕ್ಷ ಸಿ.ಡಿ.ಸತ್ಯನಾರಾಯಣಗೌಡ, ನಗರಸಭೆ ಮಾಜಿ ಅಧ್ಯಕ್ಷ ಜೆ.ರಾಜೇಂದ್ರ, ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯದರ್ಶಿ ರಮ್ಯ ಲಕ್ಷ್ಮೀಪತಿ, ಕಾಂಗ್ರೆಸ್ ತಾಲೂಕು ಕಾರ್ಯದರ್ಶಿ ಜಿ.ಲಕ್ಷ್ಮೀಪತಿ, ಮುಖಂಡ ನಾರಾಯಣಗೌಡ ಮತ್ತಿತರರು ಮಾತನಾಡಿದರು. ಕೆಪಿಸಿಸಿ ಸದಸ್ಯ ಎಂ.ಜಿ.ಶ್ರೀನಿವಾಸ್, ಮುಖಂಡರಾದ ತಿ.ರಂಗರಾಜು, ರೇವತಿ, ಜೆ.ನಾಗೇಂದ್ರಸ್ವಾಮಿ ಸೇರಿದಂತೆ ಹಲವು ಸ್ಥಳೀಯ ಮುಖಂಡರು ಹಾಜರಿದ್ದರು. ಇದೇ ಸಂದರ್ಭದಲ್ಲಿ ಹಲವು ಮುಖಂಡರು ಪಕ್ಷಕ್ಕೆ ಸೇರ್ಪಡೆಗೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

