ಆನೇಕಲ್ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರಾಗಿ ಸೋಮಶೇಖರ್
ಆನೇಕಲ್: ಆನೇಕಲ್ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಸೋಮಶೇಖರ್ ಹಾಗೂ ಉಪಾಧ್ಯಕ್ಷರಾಗಿ ಶ್ರೀನಿವಾಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸೋಮಶೇಖರ್ ಮಾತನಾಡಿ ಬ್ಯಾಂಕು ತನ್ನ ಸದಸ್ಯರಿಗೆ ಕೃಷಿ ಸಾಲ, ಹೈನುಗಾರಿಕೆ, ತೋಟಗಾರಿಕೆ ಸೇರಿದಂತೆ ಶೇ. 3 ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುತ್ತಿದೆ. ಮುಂಬರುವ ದಿನಗಳಲ್ಲಿ ಹೆಚ್ಚಿನ ರೈತರಿಗೆ ಸಾಲ ಸೌಲಭ್ಯ ವಿಸ್ತರಿಸುವ ಮೂಲಕ ಸಹಕಾರ ಕ್ಷೇತ್ರದ ಆಶಯಗಳನ್ನು ಪೂರೈಸಲಾಗುವುದು ಎಂದರು.
ಬ್ಯಾಂಕಿನಲ್ಲಿ ಪ್ರಸಕ್ತ ಸಾಲಿಗೆ ಇ-ಸ್ಟಾಂಪಿಂಗ್ ವ್ಯವಸ್ಥೆ ಇದ್ದು ಜನ ಸಾಮಾನ್ಯರು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದ ಅವರು ಯಶಸ್ವಿನಿ ಯೋಜನೆಯಡಿ ಆರೋಗ್ಯ ಭಾಗ್ಯವನ್ನು ಕಾಪಾಡಿಕೊಳ್ಳಬೇಕೆಂದರು.
ಉಪಾಧ್ಯಕ್ಷ ಶ್ರೀನಿವಾಸ್ ಮಾತನಾಡಿ ಪರಿಶಿಷ್ಟ ಜಾತಿ ಹಾಗೂ ವರ್ಗದ ಬಂಧುಗಳಿಗೆ ಮತ್ತು ಮಹಿಳೆಯರಿಗೆ ವಿಶೇಷ ಯೋಜನೆಗಳಿದ್ದು ಇದರ ಬಗ್ಗೆ ಗಮನಹರಿಸಬೇಕೆಂದರು. ಸದಸ್ಯ ಮಿತ್ರರು ಸಾಲ ಮರುಪಾವತಿಯನ್ನು ಅವಧಿಯೊಳಗೆ ನೀಡಿ ಇತರ ರೈತ ಬಾಂಧವರಿಗೆ ಸಾಲ ಸೌಲಭ್ಯ ದೊರೆಯುವಂತೆ ಸಹಾಯ ಮಾಡಬೇಕೆಂದರು.
ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಬಿ.ಜಿ. ಆಂಜಿನಪ್ಪ, ಕೆ.ಬಿ. ಶಿವಪ್ಪ, ರಾಮಕೃಷ್ಣ, ಮಧು, ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
ಮದುವೆ ದಿಬ್ಬಣ ಬಸ್ ಹಳ್ಳಕ್ಕೆ ಬಿದ್ದು 20 ಮಂದಿಗೆ ಗಾಯ
ಆನೇಕಲ್ಲು: ಮದುವೆ ದಿಬ್ಬಣದ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ನಂತರ ಹಳ್ಳಕ್ಕೆ ಬಿದ್ದ ಘಟನೆ ಬನ್ನೇರುಘಟ್ಟ ಠಾಣಾ ವ್ಯಾಪ್ತಿಯ ಶ್ಯಾನುಭೋಗನಹಳ್ಳಿ ಬಳಿ ನಡೆದಿದೆ.
ಆನೇಕಲ್ ತಾಲೂಕಿನ ಆದಿಗೊಂಡನಹಳ್ಳಿಯ ಮದುವೆ ಮನೆಯವರು ಖಾಸಗಿ ಬಸ್‌ನಲ್ಲಿ ಶ್ಯಾನುಭೋಗನಹಳ್ಳಿಯ ತಗ್ಗೀಕುಪ್ಪೆ ಗ್ರಾಮಕ್ಕೆ ತೆರಳುತ್ತಿದ್ದರು. ರಸ್ತೆಯ ಹಾಳಾದ ಕಾರಣ ಗುಂಡಿ ತಪ್ಪಿಸಲು ಚಾಲಕ ಪ್ರಯತ್ನಿಸಿದಾಗ ಈ ಘಟನೆ ನಡೆದಿದೆ. ಬಸ್‌ನಲ್ಲಿದ್ದ 4 ಜನರು ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. 20 ಜನರಿಗೆ ಸಣ್ಣ ಪುಟ್ಟ ಗಾಯಗಳಿಗಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೂರು ದಾಖಲಿಸಿಕೊಂಡು ತನಿಖೆ ನಡೆಸುವುದಾಗಿ ಬನ್ನೇರುಘಟ್ಟ ಪಿಎಸ್ಸೈ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

