ಬಗರ್ಹುಕುಂ ಸಾಗುವಳಿ ಸಕ್ರಮಗೊಳಿಸಿ...
ದೊಡ್ಡಬಳ್ಳಾಪುರ: ಬಗರ್ಹುಕುಂ ಸಾಗುವಳಿ ಸಕ್ರಮಗೊಳಿಸಿ ಭೂರಹಿತರಿಗೆ ಭೂಮಿ ಕೊಡಿ ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಿಎಸ್ಪಿ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನಾ ಮೆರವಣಿಗೆ, ಧರಣಿ ಮತ್ತು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.
ಬಿಎಸ್ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, ಮನುವಾದಿ ಸರ್ಕಾರಗಳು ಜಾರಿ ಮಾಡುತ್ತಿರುವ ಯೋಜನೆಗಳ ಉದ್ದೇಶ ಬಡವರನ್ನು ಉದ್ದಾರ ಮಾಡುವುದಲ್ಲ. ಬದಲಿಗೆ ಬಡವರನ್ನು ಬಡವರಾಗಿಯೇ ಉಳಿಸಿ, ಯೋಜನೆಯ ಹೆಸರಿನಲ್ಲಿ ಓಟುಗಿಟ್ಟಿಸುವುದಾಗಿದೆ. ಬಹುಜನರನ್ನು ಮತಬ್ಯಾಂಕುಗಳನ್ನಾಗಿ ಮಾತ್ರ ಬಳಕೆ ಮಾಡಿಕೊಳ್ಳುವ ಕೆಲ ರಾಜಕೀಯ ಪಕ್ಷಗಳು ಸ್ವಾರ್ಥ ಸಾಧನೆಯಲ್ಲೇ ಮುಳುಗೇಳುತ್ತಿವೆ. 2009ರಲ್ಲಿ ಸರ್ಕಾರಿ ಭೂಮಿ ರಕ್ಷಿಸಲು ನೇಮಕವಾಗಿ ಬಾಲಸುಬ್ರಹ್ಮಣ್ಯನ್ ಸಮಿತಿ ವರದಿ ಮೂಲೆಗುಂಪಾಗಿದೆ.
ರಾಜ್ಯಾದ್ಯಂತ ಒತ್ತುವರಿಯಾಗಿರುವ 12ರಿಂದ 15 ಲಕ್ಷ ಎಕರೆ ಸರ್ಕಾರಿ ಭೂಮಿ ಸರ್ಕಾರದ ಸುಪರ್ದಿಗೆ ಬಂದಿಲ್ಲ. ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲೇ ಇದರ ವಿಷಕೂಪ ದೊಡ್ಡದಾಗಿದೆ. ಗ್ರಾಮಾಂತರ ಜಿಲ್ಲೆಯಲ್ಲಿ 35 ಸಾವಿರ ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದೆ. ದೊಡ್ಡಬಳ್ಳಾಪುರದಲ್ಲಿ 3500 ಎಕರೆ ಭೂಮಿ ಒತ್ತುವರಿದಾರರ ಸುಪರ್ದಿನಲ್ಲಿದೆ. ಈ ಭೂಮಿಯನ್ನು ಸರ್ಕಾರ ವಶಕ್ಕೆ ಪಡೆದು, ವಸತಿ ರಹಿತ ಬಡವರಿಗೆ ಹಂಚಬೇಕು. ತಾಲೂಕಿನಲ್ಲಿ ದಲಿತರು ವಾಸ ಮಾಡುವ ಕಾಲೋನಿಗಳು ಮೂಲಸೌಕರ್ಯಗಳ ಕೊರತೆಯಿಂದ ನರಳುತ್ತಿವೆ. ಸರ್ಕಾರ ಈ ಬಗ್ಗೆ ಗಂಭೀರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನಗರಸಭೆ ವ್ಯಾಪ್ತಿ ಮತ್ತು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಿವೇಶನ ರಹಿತ ಬಡ ಕುಟುಂಬಗಳಿಗೆ ಆಶ್ರಯ ಯೋಜನೆಯಡಿ ಉಚಿತ ನಿವೇಶನ ನೀಡಿ ಮನೆ ಕಟ್ಟಿಕೊಡಬೇಕು. ಕೊಳಗೇರಿ ವಾಸಿಗಳಿಗೆ ಹಕ್ಕುಪತ್ರ ವಿತರಣೆಯಾಗಬೇಕು. ಬಾಕಿ ಇರುವ ತೋಟಿ, ತಳವಾರಿ, ನಿರಗಂಟಿ ಪ್ರಕರಣಗಳನ್ನು ಕೂಡಲೇ ಸರ್ಕಾರ ಮರು ಮಂಜೂರು ಮಾಡಬೇಕು. ದಲಿತರಿಗೆ ಮೀಸಲಿರುವ ಸರ್ಕಾರಿ ಹಣ ಸಂಪೂರ್ಣ ಬಳಕೆಯಾಗಬೇಕು. ಅಂಬೇಡ್ಕರ್ ಅಭಿವೃದ್ಧಿ ನಿಗಮ ಅರ್ಜಿ ಸಲ್ಲಿಸಿರುವ ಎಲ್ಲ ಫಲಾನುಭವಿಗಳಿಗೆ ಸಾಲ ಮಂಜೂರಾಗಬೇಕು. ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆ ಸೇರಿದಂತೆ ತಾಲೂಕಿನ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಪರಮಶಿವಯ್ಯ ವರದಿ, ಎತ್ತಿನಹೊಳೆ ಯೋಜನೆ ಶೀಘ್ರ ಪೂರ್ಣಗೊಳಿಸಬೇಕು. ನಗರಸಭಾ ವ್ಯಾಪ್ತಿಯಲ್ಲಿ ಬಾಕಿ ಇರುವ ಫಲಾನುಭವಿಗಳಿಗೆ ಶೀಘ್ರ ನಿವೇಶನ ಹಂಚಿಕೆ ಮಾಡಬೇಕು ಎಂಬುದು ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಯಿತು. ಪ್ರತಿಭಟನಾಕಾರರು ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ತಾಲೂಕು ಬಿಎಸ್ಪಿ ಅಧ್ಯಕ್ಷ ಟಿ.ಬಸವರಾಜು ಸೇರಿದಂತೆ ರಾಜ್ಯ, ಜಿಲ್ಲಾ ಮತ್ತು ತಾಲೂಕು ಹಂತದ ಅನೇಕ ಮುಖಂಡರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

