ಬೆಂಗಳೂರು ಗ್ರಾಮಾಂತರ

ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ಪ್ರದರ್ಶನ

Published On :

ಕ.ಪ್ರ. ವಾರ್ತೆ    ರಾಮನಗರ    ಫೆ.19
ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯು ಫೆ.20 ರಿಂದ 25ರವರೆಗೆ 6 ದಿನಗಳ ಕಾಲ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ರೇಷ್ಮೆನಾಡು ವಸ್ತ್ರೋತ್ಸವವು ನಗರದ ಡಾ.ಬಿ.ಆರ್.ಅಂಬೇಡ್ಕರ್ಭ್ವನದಲ್ಲಿ ಆಯೋಜಿಸಲಾಗಿದೆ.
ಮೇಳವನ್ನು ಫೆ.20ರ ಸಂಜೆ 4ಕ್ಕೆ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಅವರು
ಉದ್ಘಾಟಿಸುವರು. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆ ವಹಿಸುವರು. ಸಂಸದ ಡಿ.ಕೆ.ಸುರೇಶ್, ಜಿ.ಪಂ. ಅಧ್ಯಕ್ಷ ಎಚ್.ಸಿ.ರಾಜು, ತಾ.ಪಂ. ಅಧ್ಯಕ್ಷೆ ಲಕ್ಷ್ಮೀಮಂಜುನಾಥ್ ಭಾಗವಹಿಸುವರು. ಪ್ರದರ್ಶನದಲ್ಲಿ ಭಾಗವಹಿಸಲಿಚ್ಛಿಸುವ ನೇಕಾರರ ಸಹಕಾರ ಸಂಘದವರು ಹಾಗೂ ನೇಕಾರರು ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, 1ನೇ ಮಹಡಿ, ಜಿಲ್ಲಾ ಪಂಚಾಯಿತಿ ಭವನ, ಬಿ.ಎಂ.ರಸ್ತೆ, ರಾಮನಗರ ದೂ.080-27272288 ಸಂಪರ್ಕಿಸಬಹುದು. ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಶೇಕಡಾ 20ರಷ್ಟು ರಿಯಾಯಿತಿ ನೀಡಲಾಗುವುದು. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮೇಳದ ಸದುಪಯೋಗಪಡೆದುಕೊಳ್ಳುವಂತೆ ಕೈಮಗ್ಗ, ಜವಳಿ ಇಲಾಖೆ ಸಹಾಯಕ ನಿರ್ದೇಶಕ ರವೀಂದ್ರ ಕೋರಿದ್ದಾರೆ.

ಕೃಷಿಯಿಂದ ರೈತ ವಿಮುಖ: ಮಾಜಿ ಶಾಸಕ ಲಿಂಗಪ್ಪ


ಕ.ಪ್ರ. ವಾರ್ತೆ    ರಾಮನಗರ    ಫೆ.19
ಕಳೆದೊಂದು ದಶಕದಿಂದ ಮಳೆಯ ಪ್ರಮಾಣ ಕ್ಷೀಣಿಸಿದ್ದು, ಜಿಲ್ಲೆಯಾದ್ಯಂತ ಬರ ಆವರಿಸಿದೆ. ಇದರಿಂದ ಕೃಷಿಯನ್ನೇ ನಂಬಿ ಬದುಕುತ್ತಿರುವ ರೈತರು ಸಂಕಷ್ಟಕ್ಕೊಳಗಾಗಿ ಕೃಯಿಂದ ವಿಮುಖರಾಗುತ್ತಿದ್ದಾರೆ. ರೈತರು ಕೃಷಿಯಲ್ಲೇ ಮುಂದುವರಿಯುವಂತೆ ಪ್ರೇರೇಪಿಸುವ ಉದ್ದೇಶದಿಂದ ಉತ್ತಮ ರೈತರನ್ನು ಗುರುತಿಸಿ ಸನ್ಮಾನಿಸಲಾಗುತ್ತಿದೆ ಎಂದು ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಹೇಳಿದರು.
ನಗರದ ಸ್ಫೂರ್ತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉತ್ತಮ ಕೃಷಿಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಬರದ ಬವಣೆಯಲ್ಲೂ ರೈತರು ಕಷ್ಟಪಟ್ಟು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕೃಷಿ ಕಷ್ಟ ಸಾಧ್ಯವಾಗಿದ್ದು, ಆದಾಯಕ್ಕಿಂತ ಖರ್ಚೇ ಹೆಚ್ಚಾಗಿದೆ ಎಂದು ವಿಷಾದಿಸಿದರು.
ರೈತರು ಇಂದಿನ ಪರಿಸ್ಥಿತಿಗೆ ಅನುಗುಣವಾಗಿ ಕೃಷಿ ಕೈಗೊಳ್ಳಬೇಕು. ಕೃಷಿಯಲ್ಲಿ ವೈಜ್ಞಾನಿಕತೆಯನ್ನು ಅಳವಡಿಸಿಕೊಳ್ಳಬೇಕು. ಆಯಾ ಹವಾಗುಣಕ್ಕೆ ಹೊಂದಿಕೊಂಡು, ಕಡಿಮೆ ಖರ್ಚಿನಲ್ಲಿ ಉತ್ತಮ ಇಳುವರಿ ನೀಡುವ ಬೆಳೆಗಳನ್ನು ಮಾತ್ರ ಬೆಳೆಯಬೇಕು ಎಂದು ಲಿಂಗಪ್ಪ ಸಲಹೆ ನೀಡಿದರು.
ಜಿಲ್ಲೆಯಲ್ಲಿ ಅಂತರ್ಜಲದ ಮಟ್ಟ ಪಾತಾಳಕ್ಕಿಳಿದಿದೆ. ಸುಮಾರು 80 ಸಾವಿರಕ್ಕೂ ಹೆಚ್ಚು ಕೊಳವೆ ಬಾವಿಗಳು ಬತ್ತಿ ಹೋಗಿವೆ. ಇದರಿಂದ ಮಾವು ಸೇರಿದಂತೆ ತೋಟಗಾರಿಕೆ ಬೆಳೆಗಳು ಸಂಪೂರ್ಣ ನಾಶ ಹೊಂದುವ ಹಂತಕ್ಕೆ ತಲುಪಿವೆ. ಇಂತಹ ಪರಿಸ್ಥಿಯಲ್ಲೂ ಉತ್ತಮ ಬೆಳೆ ಬೆಳೆದು, ಲಾಭ ಗಳಿಸಿರುವ ರೈತರು ಮಾದರಿಯಾಗಿದ್ದಾರೆ ಎಂದರು.
ಸರ್ಕಾರವು ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆಯನ್ನು ನಿಗದಿಪಡಿಸುವ ಸಲುವಾಗಿ ಕೃಷಿ ಬೆಲೆ ನಿಗದಿ ಆಯೋಗ ರಚಿಸಲು ಮುಂದಾಗಿರುವುದು ಸ್ವಾಗತಾರ್ಹ. ಆದರೆ, ಅದಕ್ಕೂ ಮೊದಲು ರೈತರು ಬೆಳೆ ಬೆಳೆಯಲು ಮಾಡುವ ಖರ್ಚನ್ನು ಲೆಕ್ಕ ಹಾಕಲು ಆಯೋಗ ರಚಿಸಬೇಕು ಎಂದು ಹೇಳಿದರು.  
ಸುಮಾರು 70ಕ್ಕೂ ಹೆಚ್ಚು ಕೃಷಿಕರನ್ನು ಸನ್ಮಾನಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮರಿದೇವರು, ತಹಸೀಲ್ದಾರ್ ಹನುಮಂತರಾಯಪ್ಪ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯರಾಮಯ್ಯ, ರಾಜು, ಬಾಬು ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.