ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿ
ಕ.ಪ್ರ.ವಾರ್ತೆ ರಾಮನಗರ ಫೆ.25
ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗಿರುವ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ತಮಗಿರುವು ಹಕ್ಕುಗಳ ಬಗ್ಗೆ ಅರಿವು ಪಡೆದು, ಅವುಗಳ ಸದುಪಯೋಗಪಡೆದುಕೊಂಡು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಕೆ.ಪ್ರಹ್ಲಾದ್ ಕರೆ ನೀಡಿದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆದ ಉಚಿತ ಕಡ್ಡಾಯ ಶಿಕ್ಷಣ ಹಾಗೂ ಮಕ್ಕಳ ಹಕ್ಕುಗಳ ಕುರಿತ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂಟರ್ನೆಟ್, ದೃಶ್ಯ ಮಾಧ್ಯಮ, ಮೊಬೈಲ್ಗಳ ಹಾವಳಿಯಿಂದ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇಂತಹ ಮಕ್ಕಳನ್ನು ಸರಿದಾರಿಗೆ ತರುವುದು ಪೋಷಕರು ಹಾಗೂ ಶಿಕ್ಷಕರ ಜವಾಬ್ದಾರಿಯಾಗಿದೆ. ಮಕ್ಕಳು ತಮ್ಮ ಅಮೂಲ್ಯವಾದ ಬಾಲ್ಯವನ್ನು ವ್ಯರ್ಥವಾಗಿ ಕಳೆಯುತ್ತಿದ್ದಾರೆ. ತಮಗೆ ಅರಿವಿಲ್ಲದಂತೆಯೇ ಹಾದಿ ತಪ್ಪುತ್ತಿದ್ದಾರೆ. ಪೋಷಕರು ಮತ್ತು ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.
ಬಾಲ್ಯವಾಸ್ಥೆಯಲ್ಲಿ ಮಕ್ಕಳು ದುಶ್ಚಟಗಳಿಗೆ ಬಲಿಯಾಗದೆ ಅಧ್ಯಯನದ ಜತೆಗೆ ಪಠ್ಯೇತರ ಚಟುವಟಕೆಗಳಲ್ಲಿಯೂ ಪಾಲ್ಗೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಬೇಕು. ಉತ್ತಮವಾದ ಅಧ್ಯಯನವನ್ನು ಮಾಡುವ ಮೂಲಕ ಉನ್ನತ ಸ್ಥಾನಮಾನಗಳನ್ನು ಅಲಂಕರಿಸಿ ಉತ್ತಮ ಸಮಾಜ ನಿರ್ಮಾಣ ಮಾಡಲು ಸಹಕರಿಸಬೇಕು ಎಂದು ಕರೆ ನೀಡಿದರು.
ಮಹತ್ವದ್ದು: ಪ್ರತಿಯೊಬ್ಬ ವ್ಯಕ್ತಿಗೂ ಬಾಲ್ಯಾವಸ್ಥೆ ಎಂಬುದು ಮಹತ್ವದ್ದಾಗಿದೆ. ಸರ್ಕಾರ ಜಾರಿ ಮಾಡಿರುವ ಹಕ್ಕುಗಳನ್ನು ಮಕ್ಕಳು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ತಿಳಿಸಿದರು.
ಜಿಲ್ಲೆಯಲ್ಲಿ ಫಿಲೇಚರ್, ಕ್ರಷರ್ಗಳಲ್ಲಿ ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ದುಡಿಸಿಕೊಳ್ಳಲಾಗುತ್ತಿದೆ. ಇಂತಹ ಪ್ರತಿಕೂಲ ವಾತಾವರಣದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಮಕ್ಕಳನ್ನು ರಕ್ಷಿಸಿ ಉತ್ತಮ ಬದುಕಿನ ಬುನಾದಿಗೆ ಅಧಿಕಾರಿಗಳು, ಸಂಘಸಂಸ್ಥೆಗಳ ಜತೆಗೆ ಸಾರ್ವಜನಿಕರು ಕೈಜೋಡಿಸುವ ಅವಶ್ಯಕತೆಯಿದೆ ಎಂದು ವೆಂಕಟೇಶ್ ಹೇಳಿದರು.
ಶಿಕ್ಷಣದಿಂದ ವಂಚಿತ: ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳ ಬೇಜವಾಬ್ದಾರಿಯಿಂದ ಎಷ್ಟೋ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಮಕ್ಕಳಿಗೆ ಇರುವ ಹಕ್ಕುಗಳನ್ನು ದೊರಕಿಸಿಕೊಡಲು ಎಲ್ಲ ಇಲಾಖೆಗಳೂ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಎಡ್ವರ್ಡ್ ಥಾಮಸ್ ಹೇಳಿದರು.
ಶಿಕ್ಷಣವು ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರವು ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆಯನ್ನು ಜಾರಿಗೊಳಿಸಿದೆ. 6 ರಿಂದ 14 ವರ್ಷ ವಯಸ್ಸಿನ ಪ್ರತಿಯೊಂದು ಮಗುವು ಪ್ರಾಥಮಿಕ ಶಿಕ್ಷಣದ ಹಂತ ಪೂರೈಸುವವರೆಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹೊಂದುವ ಹಕ್ಕನ್ನು ನೀಡಿದೆ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಬಿ. ಶಿವರಾಜೇಗೌಡ ತಿಳಿಸಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ಎಸ್.ಎಚ್. ಹೊಸಗೌಡರ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಎಚ್.ಆರ್. ಉಮೇಶ್ ಆರಾಧ್ಯ, ಡಯಟ್ನ ಉಪನ್ಯಾಸಕ ಬಿ.ಎಚ್.ಕೃಷ್ಣಪ್ರಸಾದ್, ಡಿಡಿಪಿಐ ಪ್ರಹ್ಲಾದ್ ಗೌಡ, ಬಿಇಒ ಕುಮಾರಸ್ವಾಮಿ, ಮಹಿಳಾ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಎಸ್.ಎಂ. ಚಂದ್ರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕೆ.ರಾಧಾ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

