ಬೆಂಗಳೂರು ಗ್ರಾಮಾಂತರ

ಮಿತಿಮೀರಿದ ಭ್ರಷ್ಟಾಚಾರ ದೇಶದ ಅಭಿವೃದ್ಧಿಗೆ ಮಾರಕ: ಡಾ. ಹನೀಫ್

Published On :

ರಾಮನಗರ: ಮಿತಿಮೀರಿದ ಭ್ರಷ್ಟಾಚಾರವು ದೇಶದ ಅಭಿವೃದ್ಧಿಗೆ ಮಾರಕವಾಗಿ ಪರಿಣಮಿಸಿದೆ. ಭ್ರಷ್ಟಾಚಾರದ ನಿರ್ಮೂಲನೆಗೆ ವಿದ್ಯಾರ್ಥಿ ದಿಸೆಯಿಂದಲೇ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಬೇಕು ಎಂದು ಗೌಸಿಯಾ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಮಹಮ್ಮದ್ ಹನೀಫ್ ಅಭಿಪ್ರಾಯಪಟ್ಟರು.
ನಗರದ ಗೌಸಿಯಾ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಎನ್‌ಎಸ್‌ಯುಐ ಜಿಲ್ಲಾ ಘಟಕವು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಮಾಹಿತಿ ಹಕ್ಕು ಕಾಯ್ದೆ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭ್ರಷ್ಟಾಚಾರವನ್ನು ತಡೆಗಟ್ಟಲು ಮಾಹಿತಿ ಹಕ್ಕು ಕಾಯ್ದೆಯನ್ನು ಅಸ್ತ್ರವಾಗಿ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.
ದೇಶದಾದ್ಯಂತ ವ್ಯಾಪಕವಾಗಿ ಆವರಿಸಿರುವ ಭ್ರಷ್ಟಾಚಾರವನ್ನು ತೊಡೆದು ಹಾಕುವ ಶಕ್ತಿ ಯುವ ಸಮುದಾಯಕ್ಕೆ ಮಾತ್ರ ಇದೆ. ಎಂಜಿನಿಯರ್ ವಿದ್ಯಾರ್ಥಿಗಳಿಗೂ ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚಾಗಿ ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.  
ಭಾರತ ಸರ್ಕಾರ ಜಾರಿಗೆ ತಂದಿರುವ ಆರ್‌ಟಿಐ ಕಾಯ್ದೆಗಳು ಅತ್ಯಂತ ಶ್ರೇಷ್ಠಮಟ್ಟದ್ದಾಗಿವೆ. ದೇಶದ ಪ್ರತಿಯೊಬ್ಬರಿಗೂ ಏಕರೂಪ ಹಾಗೂ ಗುಣಮಟ್ಟದ ಶಿಕ್ಷಣ ದೊರಕಿಸಿಕೊಡುವ ಉದ್ದೇಶದಿಂದ ಶಿಕ್ಷಣ ಹಕ್ಕು ಕಾಯ್ದೆಯನ್ನು ಅಂತೆಯೇ ಉತ್ತಮ ಆಡಳಿತ ವ್ಯವಸ್ಥೆಗಾಗಿ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತಂದಿದೆ. ಯುವ ಸಮುದಾಯ ಈ ಕಾಯ್ದೆಗಳ ಬಗ್ಗೆ ಅರಿವು ಪಡೆದುಕೊಂಡು ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಮಾಡಲು ಪಣ ತೊಡಬೇಕು ಎಂದು ವಕೀಲ ತಿಮ್ಮೇಗೌಡ ಕರೆ ನೀಡಿದರು.
ಮಹತ್ವದ ಪಾತ್ರ: ವಿದ್ಯಾರ್ಥಿಗಳು ಭವಿಷ್ಯದ ನಾಯಕರಾಗಿದ್ದು, ಭವ್ಯ ಭಾರತದ ನಿರ್ಮಾಣಕ್ಕೆ ರಾಜಕೀಯ ಸೇರಿದಂತೆ ಹೊರಗಿನ ವಿಚಾರಗಳನ್ನು ತಿಳಿದುಕೊಳ್ಳುವ ಅವಶ್ಯಕವಿದೆ. ಪ್ರತಿನಿತ್ಯ ಪ್ರತಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ವಿಶ್ವದಲ್ಲಿ ಭಾರತ ಅಗ್ರಸ್ಥಾನ ಪಡೆದುಕೊಳ್ಳಲು ಯುವ ಸಮುದಾಯದ ಪಾತ್ರ ಮಹತ್ವದ್ದು ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ಎಲ್. ಚಂದ್ರಶೇಖರ್ ತಿಳಿಸಿದರು.
ಮಾಹಿತಿ ಹಕ್ಕು ಕಾಯ್ದೆ ಯಾವುದೇ ಜಾತಿ, ವರ್ಗ ಅಥವಾ ಪಕ್ಷಕ್ಕೆ ಸೀಮಿತವಾಗಿಲ್ಲ. ಭ್ರಷ್ಟಾಚಾರವನ್ನು ತಡೆಯುವುದು ಈ ದೇಶದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ. ಸ್ವಾಸ್ಥ್ಯ ಸಮಾಜ ನಿರ್ಮಾಣದ ಆಯ್ಕೆ ನಿಮ್ಮ ಕೈಯಲ್ಲಿಯೇ ಇದೆ ಎಂದು ಎನ್‌ಎಸ್‌ಯುಐನ ರಾಜ್ಯ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಹೇಳಿದರು.
ಎನ್‌ಎಸ್‌ಯುಐನ ಜಿಲ್ಲಾಧ್ಯಕ್ಷ ಅನಿಲ್ ಜೋಗಿಂದರ್, ಮುಖಂಡ ವೆಂಕಟೇಶ್, ಗುರುಪ್ರಸಾದ್, ನೇತ್ರಕುಮಾರ್, ಪದಾಧಿಕಾರಿಗಳಾದ ಚೇತನ್, ಸಾಗರ್, ಚಂದ್ರು ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.