ಬೆಂಗಳೂರು ಗ್ರಾಮಾಂತರ

ದೌರ್ಜನ್ಯದ ವಿರುದ್ಧ ಮಹಿಳೆಯರು ಜಾಗೃತರಾಗಲಿ

Published On :

ಕ.ಪ್ರ.ವಾರ್ತೆ  ರಾಮನಗರ   ಜ.1
ಮಹಿಳೆಯರ ಮೇಲಿನ ದೌರ್ಜನ್ಯ ದಿನೇ ದಿನೇ ಹೆಚ್ಚುತ್ತಿದ್ದು, ಮಹಿಳೆಯರ ರಕ್ಷಣೆಗಾಗಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ. ದೌರ್ಜನ್ಯದ ವಿರುದ್ಧ ಮಹಿಳೆಯರು ಜಾಗೃತರಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಎಸ್.ಎಂ. ಚಂದ್ರ ಕರೆ ನೀಡಿದರು.
ನಗರದ ಗುರುಭವನದಲ್ಲಿ ಸರ್ವಜನ ಮಹಿಳಾ ಮತ್ತು ಮಕ್ಕಳ ರಕ್ಷಣಾ ವೇದಿಕೆ, ವಿಧವೆಯರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ವಿಶೇಷ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ಕೌಟುಂಬಿಕ ದೌರ್ಜನ್ಯ ಹೆಚ್ಚುತ್ತಿದ್ದು, ಸರ್ಕಾರವು ಮಹಿಳೆಯರ ರಕ್ಷಣೆಗಾಗಿ ರೂಪಿಸಿರುವ ಕಾನೂನುಗಳ ಬಗ್ಗೆ ಅರಿವು ಪಡೆದುಕೊಳ್ಳಬೇಕು. ಆ ಮೂಲಕ ತಮ್ಮ ಮೇಲೆ ನಡೆಯುವ ದೌರ್ಜನ್ಯಗಳ ವಿರುದ್ಧ ಹೋರಾಟ ನಡೆಸಬೇಕು. ಮಹಿಳೆಯರಿಗೆ ಕಾನೂನಿನ ಅರಿವು ಮೂಡಿಸಲು ಸಂಘ-ಸಂಸ್ಥೆಗಳು ಮುಂದಾಗಬೇಕು ಎಂದರು.
ಭೂಮಿಯ ಮೇಲೆ ಜನಿಸಿದ ಪ್ರತಿಯೊಂದು ಮಗುವಿಗೂ ಬದುಕುವ ಹಕ್ಕಿದೆ. ಮಗು ಹುಟ್ಟುವ ಮೊದಲೇ ತಾಯಿಯ ಆರೈಕೆ, ಬೇಕಾದ ಔಷಧೋಪಚಾರ, ತೊಂದರೆ ಇಲ್ಲದ ಹೆರಿಗೆ, ಬೆಳೆಯುತ್ತಿರುವ ಮಕ್ಕಳಿಗೆ ಆರೋಗ್ಯ ಸೇವೆ, ಪೌಷ್ಟಿಕ ಆಹಾರ, ಪರಿಶುದ್ಧ ಗಾಳಿ, ನೀರು, ಸೂಕ್ತವಾದ ವಾತಾವರಣ ಸೌಲಭ್ಯಗಳಿರುವ ಮನೆ ಕಲ್ಪಿಸುವುದು ಆಯಾ ಸಮುದಾಯದ ಜನರ ಕರ್ತವ್ಯ. ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸ ಕೊಡಿಸುವುದು ಎಲ್ಲರ ಜವಾಬ್ದಾರಿ ಎಂದು ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ರಾಧಾ ತಿಳಿಸಿದರು.
ಮನುಷ್ಯನನ್ನು ಓದು ಶುದ್ಧನಾಗಿ ಮಾಡಿದರೆ, ಬರಹ ಬುದ್ಧಿವಂತನಾಗಿ ಮಾಡುತ್ತದೆ. ಮಾನವನಿಗೆ ಮೂಲಭೂತ ಶಿಕ್ಷಣ ಅತ್ಯಗತ್ಯ. ಶಿಕ್ಷಣದಿಂದಾಗಿ ಅರಿವು ಹುಟ್ಟುತ್ತದೆ. ಅರಿವಿನಿಂದಾಗಿ ಅಭಿಮಾನ, ಜಾಗೃತಿಯಿಂದಾಗಿ ಪ್ರಗತಿ, ಪ್ರಗತಿಯಿಂದಾಗಿ ಸ್ವಾಭಿಮಾನ ಹುಟ್ಟುತ್ತದೆ ಎಂದು ಸಂಘದ ಸಂಸ್ಥಾಪಕ ಅಧ್ಯಕ್ಷ ಸಿ.ಗೋವಿಂದರಾಜು ತಿಳಿಸಿದರು.
ಮಹಿಳೆಯರ ಏಳ್ಗೆಗೆ ಶ್ರಮ: ಜಿಲ್ಲೆಯಲ್ಲಿರುವ ವಿಧವೆಯರನ್ನು ಸಂಘಟಿಸಬೇಕೆಂಬ ಸದುದ್ದೇಶದಿಂದ ಸರ್ವಜನ ಮಹಿಳಾ ಮತ್ತು ಮಕ್ಕಳ ರಕ್ಷಣಾ ವೇದಿಕೆ ಮತ್ತು ವಿಧವೆಯರ ಕ್ಷೇಮಾಭಿವೃದ್ಧಿ ಸಂಘ ಸ್ಥಾಪಿಸಲಾಗಿದೆ. ಈ ಸಂಘಗಳ ಮೂಲಕ ಸಮಾಜದಲ್ಲಿ ದೌರ್ಜನ್ಯಕ್ಕೊಳಗಾದ ಮಹಿಳೆಯರ ಏಳ್ಗೆಗೆ ಶ್ರಮಿಸಲಾಗುವುದು ಎಂದರು.
ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರದಲ್ಲೂ ಮಹಿಳೆ ಮತ್ತು ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಶಿಬಿರಗಳನ್ನು ಆಯೋಜಿಸುವುದರ ಜತೆಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಅವರಿಗೆ ದೊರಕಿಸಿಕೊಡುವ ನಿಟ್ಟಿನಲ್ಲಿ ಸಂಘ ಕಾರ್ಯ ನಿರ್ವಹಿಸಲಿದೆ ಎಂದರು.
ಕಾರ್ಯಕ್ರಮದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷೆ ಅನುಸೂಯಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣೇಗೌಡ, ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿ ರಾಮಚಂದ್ರಯ್ಯ, ಮಧುಗೌಡ, ಎಲ್.ಚಂದ್ರಶೇಖರ್, ನಾಗೇಶ್, ರೋಹಿಣಿಪ್ರಿಯ, ಅಂದಾನಪ್ಪ, ಎಂ.ಚಂದ್ರ, ಗುರುಮೂರ್ತಿ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.