18 ರಂದು ಕೌಶಲ್ಯ, ಉದ್ಯೋಗ ಮೇಳಕ್ಕೆ ಸಿದ್ಧತೆ
ರಾಮನಗರ: ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ವೃತ್ತಿ ಮಾರ್ಗದರ್ಶನ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು ಅಣಿಗೊಳಿಸುವ ನಿಟ್ಟಿನಲ್ಲಿ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಜ.18ರಂದು ಕೌಶಲ್ಯ ಮತ್ತು ಉದ್ಯೋಗ ಮೇಳವನ್ನು ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಡಿ.ಎಸ್. ವಿಶ್ವನಾಥ್ ತಿಳಿಸಿದರು.
ಜಿಲ್ಲಾಡಳಿತ, ಉದ್ಯೋಗ ಮತ್ತು ತರಬೇತಿ ಇಲಾಖೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಈ ಮೇಳವನ್ನು ಸಂಘಟಿಸುತ್ತಿರುವುದಾಗಿ ತಮ್ಮ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ವಿವರಿಸಿದರು.
ಉನ್ನತ ವ್ಯಾಸಂಗ ಮಾಡಲು ಇಚ್ಛಿಸುವವರಿಗೆ ಹಾಗೂ ತರಬೇತಿ ಪಡೆದು ಉದ್ಯೋಗ ಪಡೆಯಲು ಆಸಕ್ತಿ ಹೊಂದಿರುವವರಿಗೆ ಅಗತ್ಯ ಮಾರ್ಗದರ್ಶನ ನೀಡುವುದು ಈ ಮೇಳದ ಉದ್ದೇಶವಾಗಿದೆ. ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉದ್ಯೋಗ ಪಡೆದು ಆರ್ಥಿಕವಾಗಿ ಸದಣಢರನ್ನಾಗಿಸುವ ಆಶಾಭಾವನೆ ವ್ಯಕ್ತಪಡಿಸಿದರು.
15 ಸಂಸ್ಥೆಗಳ ಆಗಮನ: ಜ.18ರಂದು ನಡೆಯುವ ಈ ಮೇಳಕ್ಕೆ ಸುಮಾರು 15 ಸಂಸ್ಥೆಗಳು ಆಗಮಿಸಲಿದ್ದು, 4 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ದೊರೆಯಲಿವೆ. ಸಂಸ್ಥೆಗಳ ಮಾಲೀಕರು ಮೇಳದಲ್ಲಿ ಭಾಗವಹಿಸಿ ಅಭ್ಯರ್ಥಿಗಳನ್ನು ಸ್ಥಳದಲ್ಲಿಯೇ ಆಯ್ಕೆ ಮಾಡುವರು. ಜಿಲ್ಲೆಯ ನಿರುದ್ಯೋಗಿಗಳು ಈ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಶ್ವನಾಥ್ ಕರೆ ನೀಡಿದರು. ಕೌಶಲ್ಯ ಹಾಗೂ ಉದ್ಯೋಗ ಮೇಳವನ್ನು ವ್ಯವಸ್ಥಿತವಾಗಿ ಸಂಘಟಿಸಲಾಗುತ್ತಿದ್ದು, ಕೌಶಲ್ಯದ ಕೊರತೆ ಇರುವ ಅಭ್ಯರ್ಥಿಗಳಿಗೆ ಜಿಲ್ಲೆಯಲ್ಲಿ ಮತ್ತು ಲಭ್ಯವಿರುವ ಇತರೆ ಸಂಸ್ಥೆ, ಇಲಾಖೆಗಳ ಯೋಜನೆಗಳಲ್ಲಿ ಜಿಲ್ಲಾಡಳಿತದಿಂದಲೇ ಕೌಶಲ್ಯ ತರಬೇತಿಯನ್ನು ನೀಡಿ, ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ಪರಿಚಯ ಪತ್ರ: ಜ.18ರ ಬೆಳಗ್ಗೆ 9ಕ್ಕೆ ಮೇಳ ಪ್ರಾರಂಭಗೊಳ್ಳಲಿದ್ದು, ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲೆಗಳು, ವ್ಯಕ್ತಿ ಪರಿಚಯ ಪತ್ರದೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕಿದೆ. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ.(ಅನುತ್ತೀರ್ಣ ಹಾಗೂ ತೇರ್ಗಡೆ), ಪಿ.ಯು.ಸಿ., ಐ.ಟಿ.ಐ, ಜೆ.ಒ.ಸಿ., ಡಿಪ್ಲೊಮೊ, ಯಾವುದೇ ಪದವಿ, ಸ್ನಾತಕೋತ್ತರ ಪದವಿ ತೇರ್ಗಡೆಯಾಗಿದ್ದು, 18 ವರ್ಷ ಮೇಲ್ಪಟ್ಟವರು ಭಾಗವಹಿಸಿ ಹೆಸರು ನೋಂದಾಯಿಸಿಕೊಂಡು ನೇರಸಂದರ್ಶನದಲ್ಲಿ ಭಾಗವಹಿಸಬಹುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

