ವಿಜೃಂಭಣೆ ಗಣರಾಜ್ಯೋತ್ಸವಕ್ಕೆ ಸಿದ್ಧತೆ
ಕ.ಪ್ರ.ವಾರ್ತೆ , ರಾಮನಗರ , ಜ.11
ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಲು ರಾಷ್ಟ್ರೀಯ ಹಬ್ಬಗಳು ಸಹಕಾರಿಯಾಗಿವೆ. ಈ ನಿಟ್ಟಿನಲ್ಲಿ ಮುಂಬರುವ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಿ, ದೇಶಕ್ಕೆ ಗೌರವ ಸಮರ್ಪಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ.
ಗಣರಾಜ್ಯೋತ್ಸವ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ. ವಿಶ್ವನಾಥ್ ಅವರು ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಗಣರಾಜ್ಯೋತ್ಸವ ಕಾರ್ಯಕ್ರಮವು ಎಂದಿನಂತೆ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿರುವರು. ಜಿಲ್ಲೆಯ ಸಚಿವರು, ಶಾಸಕರು, ಜನಪ್ರತಿನಿಧಿಗಳು ಮತ್ತಿತರ ಗಣ್ಯರು ಭಾಗವಹಿಸಲಿದ್ದು, ಕಾರ್ಯಕ್ರಮ ಯಶಸ್ವಿಗೊಳ್ಳಲು ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದರು.
ವೇದಿಕೆ ವ್ಯವಸ್ಥೆ, ಶಾಮಿಯಾನ, ಕುಡಿಯುವ ನೀರಿನ ವ್ಯವಸ್ಥೆ, ಕುರ್ಚಿ ವ್ಯವಸ್ಥೆಯನ್ನು ಲೋಕೋಪಯೋಗಿ ಇಲಾಖೆ ಹಾಗೂ ನಗರಸಭೆ ವಹಿಸಿಕೊಳ್ಳಬೇಕು. ಕಲಾ ತಂಡಗಳು ಹಾಗೂ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕಣತಿ ಇಲಾಖೆ ವಹಿಸಿಕೊಳ್ಳಬೇಕು. ಕ್ರೀಡಾಂಗಣದ ಸ್ವಚ್ಛತೆಯನ್ನು ನಗರಸಭೆ, ಹೂ ಕುಂಡಗಳ ಅಲಂಕಾರವನ್ನು ತೋಟಗಾರಿಕಾ ಇಲಾಖೆ, ಪಥ ಸಂಚಲನದ ಉಸ್ತುವಾರಿಯನ್ನು ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿಗಳು ವಹಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಶಾಲಾ ಮಕ್ಕಳಿಗೆ ಸಿಹಿ ಹಂಚುವುದನ್ನು ವಾಣಿಜ್ಯ ತೆರಿಗೆ ಇಲಾಖೆಗೆ, ಕಾರ್ಯಕ್ರಮದ ಗಣ್ಯರು ಆಹ್ವಾನಿತರ ಆತಿಥ್ಯವನ್ನು ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ವಹಿಸಿದರು. ಜನವರಿ 23 ಮತ್ತು 24ರಂದು ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ಪೂರ್ವಾಭ್ಯಾಸವನ್ನು ನಡೆಸಿ ಸಿದ್ಧತೆ ಕೈಗೊಳ್ಳುವಂತೆ ಸೂಚಿಸಿದರು.
ಗಣರಾಜ್ಯೋತ್ಸವ ದಿನದಂದು ಎಲ್ಲಾ ಸರ್ಕಾರಿ ಕಚೇರಿಗಳ ಕಟ್ಟಡಗಳ ಮೇಲೆ ವಿದ್ಯುತ್ ಅಲಂಕಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿ, ಬೆಸ್ಕಾಂನಿಂದ ಕ್ರೀಡಾಂಗಣ ಹಾಗೂ ಪ್ರಮುಖ ಸ್ಥಳಗಳ ವಿದ್ಯುತತ್ದೀಪಾಲಂಕಾರ ಮಾಡುವಂತೆ ಹೇಳಿದರು.
ಕಡ್ಡಾಯ ಹಾಜರಿಗೆ ಸೂಚನೆ: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸ್ವಇಚ್ಛೆಯಿಂದ ಪಾಲ್ಗೊಂಡು ಗೌರವ ಸಮರ್ಪಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿರುತ್ತದೆ. ಅಂದು ಸಮಾರಂಭದಲ್ಲಿ ಎಲ್ಲಾ ಸರ್ಕಾರಿ ಅಧಿಕಾರಿ ನೌಕರರು ಕಡ್ಡಾಯವಾಗಿ ಪಾಲ್ಗೊಳ್ಳಬೇಕಿದೆ. ಗೈರಾದವರ ವಿರುದ್ಧ ಕೆಸಿಎಸ್ಆರ್ ನಿಯಮಗಳ ರೀತ್ಯಾ ಕ್ರಮಕೈಗೊಳ್ಳುವುದಾಗಿ ಅವರು ಎಚ್ಚರಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿ.ಪಂ. ಉಪ ಕಾರ್ಯದರ್ಶಿ ಆರ್.ಲತಾ, ಯೋಜನಾ ನಿರ್ದೇಶಕಿ ವೈಶಾಲಿ, ಡಿಡಿಪಿಐ ಪ್ರಹ್ಲಾದಗೌಡ, ಡಿಡಿಪಿಯು ಲಿಂಗರಾಜು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

