ತೈಲೋತ್ಪನ್ನಗಳ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ
ದೇವನಹಳ್ಳಿ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಜನವಿರೋಧಿ ನೀತಿಗಳಿಂದಾಗಿ ದಿನಬಳಕೆ ವಸ್ತುಗಳ ಬೆಲೆ ಏರಿಕೆಯ ಜೊತೆಯಲ್ಲಿ ಮಧ್ಯಮ ವರ್ಗದವರು ಮತ್ತು ರೈತರು ಹೆಚ್ಚಾಗಿ ಬಳಸುವ ಪೆಟ್ರೋಲ್ ಡೀಸೆಲ್ ಅಲ್ಲದೆ ಅಡುಗೆ ಅನಿಲಗಳ ಬೆಲೆ ಏರಿಕೆ ವಿರುದ್ಧ ದೇವನಹಳ್ಳಿ ತಾಲೂಕು ಭಾರತೀಯ ಜನತಾ ಪಕ್ಷ ಕಾರ್ಯಕರ್ತರು ಪ್ರತಿಭಟಿಸಿದರು.
ಮಾಜಿ ಶಾಸಕ ಜಿ.ಚಂದ್ರಣ್ಣ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಎತ್ತಿನ ಗಾಡಿಯೊಂದರಲ್ಲಿ ಅಡುಗೆ ಅನಿಲದ ಸಿಲೆಂಡರ್ ಇಟ್ಟು ಪ್ರತಿಭಟನಾ ಮೆರವಣಿಗೆ ನಡೆಸಿ ಇಂಧನ ಸಚಿವ ಎಂ.ವೀರಪ್ಪ ಮೊಯ್ಲಿ ಅವರ ಅಣಕು ಶವಯಾತ್ರೆ ಮತ್ತು ಮಿನಿ ವಿಧಾನಸೌಧದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ದಹನ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಜಿ. ಚಂದ್ರಣ್ಣ ಮಾತನಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ
ಜನವಿರೋಧಿ ನೀತಿಗಳಿಂದಾಗಿ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಜೀವನ ಮಾಡುವುದೇ ಕಷ್ಟವಾಗಿದೆ ಎಂದರು. ಈ ಭಾಗದ ಲೋಕಸಭಾ ಸದಸ್ಯರು ಹಾಗೂ ಸಚಿವರಾದ
ಎಂ. ವೀರಪ್ಪ ಮೊಯ್ಲಿ ಅವರು ಪ್ರಭಾವಿ ಖಾತೆಗಳನ್ನು ಹೊಂದಿದ್ದರೂ ಅವರು ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಯಾವುದೇ ಆಶ್ವಾಸನೆಗಳು ಈಡೇರಿಸದೆ ಈ ಭಾಗದ ಜನಕ್ಕೆ ದ್ರೋಹವೆಸಗಿದ್ದಾರೆ ಎಂದರು. ದೇವನಹಳ್ಳಿ ಜಿಲ್ಲಾ ಕೇಂದ್ರವಾಗಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಸಹ ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಎ.ಸಿ.ಗುರುಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ನಾಗೇಶ್, ರಾಜ್ಯ ಪರಿಷತ್ ಕಾರ್ಯದರ್ಶಿ ದೇ.ಸೂ. ನಾಗರಾಜ್ ಮಾತನಾಡಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಜನರು ದೂರವಿಟ್ಟು ನರೇಂದ್ರ ಮೋದಿ ಪ್ರಧಾನಿಯಾಗಲು ಎಲ್ಲ ಮತಬಾಂಧವರು ಸಹಕಾರ ನೀಡಬೇಕೆಂದು ಕೋರಿದರು.
ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಹನುಮಂತರಾಯಪ್ಪ, ಹುರುಳುಗುರ್ಕಿ ಶ್ರೀನಿವಾಸ್, ತಾ.ಅಧ್ಯಕ್ಷ ರಾಜಗೋಪಾಲ್, ಟೌನ್ ಅಧ್ಯಕ್ಷ ಎಸ್. ರಮೇಶ್ಕುಮಾರ್, ಹಾಗೂ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಅಗತ್ಯ ವಸ್ತುಗಳ ಮತ್ತು ತೈಲೋತ್ಪನ್ನಗಳ ಬೆಲೆ ಏರಿಕೆಯಾಗಿರುವುದನ್ನು ಸರ್ಕಾರ ಕಡಿಮೆ ಮಾಡಬೇಕೆನ್ನುವ ಮನವಿಯನ್ನು ರಾಜ್ಯಪಾಲರಿಗೆ ಕಳುಹಿಸಿಕೊಡಬೇಕೆಂದು ತಹಸೀಲ್ದಾರರಿಗೆ ಚಂದ್ರಣ್ಣ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

