ಬೆಂಗಳೂರು ಗ್ರಾಮಾಂತರ

ಸಹಕಾರಿ ಸಿಬ್ಬಂದಿಗೆ ತರಬೇತಿ ಅಗತ್ಯ: ಹನುಮಂತೇಗೌಡ

Published On :

ಹೊಸಕೋಟೆ : ಸಹಕಾರಿ ಸಂಘಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ಸದಸ್ಯರುಗಳು ಸಂವಿಧಾನದ 97ನೇ ತಿದ್ದುಪಡಿಯ ಬಗ್ಗೆ ತಿಳಿವಳಿಕೆ ಹೊಂದಬೇಕಾದ್ದು ಅತ್ಯವಶ್ಯವಾಗಿದೆ ಎಂದು ಗ್ರಾಮಾಂತರ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ, ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿರ್ದೇಶಕ ಹನುಮಂತೇಗೌಡ ಹೇಳಿದರು.
ಪಟ್ಟಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಂಡಳಿಯು ರಾಜ್ಯಾದ್ಯಂತ 8 ಕೇಂದ್ರಗಳನ್ನು ಹೊಂದಿದ್ದು ಸಹಕಾರ ಸಂಘಗಳ ಸಿಬ್ಬಂದಿಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ತರಬೇತಿ ನೀಡುವ ಕಾರ್ಯದಲ್ಲಿ ನಿರತವಾಗಿದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಒಳಗೊಂಡಂತೆ ಇನ್ನಿತರೆ ಸಂಘಗಳ ಕಾರ್ಯದರ್ಶಿಗಳು, ಆಡಳಿತ ಮಂಡಳಿ ನಿರ್ದೇಶಕರುಗಳಿಗೆ ಸಹಕಾರ ಕಾಯಿದೆಯಡಿ ಬದಲಾವಣೆಗಳ ಬಗ್ಗೆ ತಿಳಿವಳಿಕೆ ನೀಡಲಾಗುತ್ತಿದೆ. ತರಬೇತಿಯಲ್ಲಿ ಪಡೆದುಕೊಂಡ ಅಂಶಗಳನ್ನು ಸಮರ್ಪಕವಾಗಿ ಅಳವಡಿಸಿಕೊಂಡಲ್ಲಿ ಮಾತ್ರ ಸಾರ್ಥಕವಾಗಲಿದೆ. ಗ್ರಾಮಾಂತರ ಜಿಲ್ಲೆಯಾದ್ಯಂತ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಯೋಜಿಸಲಾಗಿದೆ ಎಂದರು.
ಅಪೆಕ್ಸ್ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ. ತಮ್ಮೇಗೌಡ ಮಾತನಾಡಿ, ಸಹಕಾರ ಸಂಘಗಳ ಚುನಾವಣೆಗಳಿಗೆ ಸಂಬಂಧಪಟ್ಟಂತೆ 97ನೇ ತಿದ್ದುಪಡಿಯಲ್ಲಿ ಮಹತ್ತರವಾದ ಮಾರ್ಪಾಟು ಮಾಡಲಾಗಿದೆ. ಸಹಕಾರ ಸಂಘಗಳ ಸಿಬ್ಬಂದಿ ಕಾಯಿದೆಗಳ ಬಗ್ಗೆ ಅಗತ್ಯ ಮಾರ್ಗದರ್ಶನ ಪಡೆಯಲು ಇಂತಹ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿವೆ ಎಂದರು.
ಪ್ರಮುಖ ಅಂಶ ವಿವರ: ಸಹಕಾರ ಚುನಾವಣೆ ಆಯೋಗದ ಉಪನಿಬಂಧಕ ಆರ್. ಲೋಕೇಶ್, ಸಹಕಾರಿ ಕಾಯಿದೆಯ ತಿದ್ದುಪಡಿಯ ಪ್ರಮುಖ ಅಂಶಗಳ ಬಗ್ಗೆ ವಿವರಿಸಿದರು. ನಿವೃತ್ತ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅಶ್ವತ್ಥಯ್ಯ ಸಿಬ್ಬಂದಿ ವ್ಯಕ್ತಿ ನೈಪುಣ್ಯದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾಮಾಂತರ ಜಿಲ್ಲೆಯ ಸಹಕಾರ ಒಕ್ಕೂಟದ ವ್ಯಾಪ್ತಿಯಲ್ಲಿ ಉತ್ತಮ ಕಾರ್ಯನಿರ್ವಹಣೆಗಾಗಿ ತಾಲೂಕು ಇಟ್ಟಸಂದ್ರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕಾರ್ಯದರ್ಶಿಯನ್ನು ಸನ್ಮಾನಿಸಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷ ನಾರಾಯಣಗೌಡ, ಅಧ್ಯಕ್ಷ ಟಿ.ಸೊಣ್ಣಪ್ಪ, ನಿರ್ದೇಶಕ ಮುನಿರಾಮಯ್ಯ, ಸಹಕಾರ ಒಕ್ಕೂಟದ ಸಿಇಒ ಎಸ್.ಪಿ. ಪುರುಷೋತ್ತಮ್ ಉಪಸ್ಥಿತರಿದ್ದರು. ಕಾರ್ಯಕ್ರಮ ಪ್ರಾರಂಭಕ್ಕೆ ಮೊದಲು ಇತ್ತೀಚೆಗೆ ರೈಲು ದುರಂತದಲ್ಲಿ ಮೃತಪಟ್ಟ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಸುಭಾಷ್ ರೆಡ್ಡಿ ಪಾಟೀಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.