ಬೆಂಗಳೂರು ಗ್ರಾಮಾಂತರ

ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶ ನೀಡಲು ಕರೆ

Published On :

ಚನ್ನಪಟ್ಟಣ: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯನ್ನು 5ನೇ ಸ್ಥಾನದೊಳಗೆ ತರಲು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹೆಚ್ಚಿನ ಶ್ರಮ ವಹಿಸುವಂತೆ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪ್ರಹ್ಲಾದಗೌಡ ತಿಳಿಸಿದರು.
ಚನ್ನಪಟ್ಟಣ ಇನ್ಸ್‌ಟಿಟ್ಯೂಟ್ ಆಫ್ ಸ್ಪೋರ್ಟ್ಸ್ ಅಂಡ್ ಕಲ್ಚರ್ ಕ್ಲಬ್ ಹಮ್ಮಿಕೊಂಡಿದ್ದ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕಳೆದ ಸಾಲಿನಲ್ಲಿ 10ನೇ ಸ್ಥಾನದೊಳಗೆ ತರಬೇಕೆಂಬ ಗುರಿ ಹೊಂದಿದ್ದು 8ನೇ ಸ್ಥಾನ ಪಡೆಯುವ ಮೂಲಕ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಸಾಧನೆ ಮಾಡಿದ್ದೆವು. ಈ ಬಾರಿ ಇನ್ನೂ ಉತ್ತಮ ಫಲಿತಾಂಶ ಪಡೆಯಲು ನಾವೆಲ್ಲ ಶ್ರಮಿಸಬೇಕಿದೆ ಎಂದರು.
ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಸರಿಸಮಾನವಾಗಿ ಸ್ಪರ್ಧೆ ನೀಡುತ್ತಿದ್ದು ಇತ್ತೀಚಿನ ಫಲಿತಾಂಶದಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳು ಉತ್ತಮ ಸಾಧನೆ ತೋರಿವೆ. ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಹಲವಾರು ಸೌಕರ್ಯಗಳನ್ನು ನೀಡುತ್ತಿದ್ದು, ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಮುಂದಿನ ಜೀವನವನ್ನು ಉತ್ತಮ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಸಂಸ್ಥೆಯ ಅಧ್ಯಕ್ಷ ಸಿ.ಎನ್.ನಾರಾಯಣಸ್ವಾಮಿ ಮಾತನಾಡಿ, ಜೀವನದ ಮಹತ್ವದ ಘಟ್ಟವಾದ  ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಸಮರ್ಥವಾಗಿ ಎದುರಿಸಿದರೆ ಮುಂದಿನ ಜೀವನ ಸುಖಮಯವಾಗಿರುತ್ತದೆ. ಪ್ರತಿ ವಿದ್ಯಾರ್ಥಿಗೂ ಆತನು ಪರೀಕ್ಷೆಯಲ್ಲಿ ಗಳಿಸುವ ಅಂಕಗಳೇ ಜೀವನದ ಮುಂದಿನ ದಾರಿದೀಪ. ಸಂಸ್ಥೆಯ ವತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಚರ್ಚಾಸ್ಪರ್ಧೆ, ರಸಪ್ರಶ್ನೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪರೀಕ್ಷೆಗೆ ಆಣಿಗೊಳಿಸುವ ಕಾರ್ಯ ಮಾಡಲಾಗುತ್ತಿದೆ. ತಾಲೂಕಿನ 38 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅವರ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಲು ಇದು ಸಹಕಾರಿಯಾಗಿದೆ ಎಂದರು.
ಸಂಸ್ಥೆ ಕಾರ್ಯದರ್ಶಿ ಟಿ.ಕೆ.ಯೋಗೇಶ್ ಮಾತನಾಡಿ, ಈ ಹಿಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಉತ್ತೀರ್ಣರಾಗಬೇಕೆಂದರೆ ದೊಡ್ಡ ಸಾಧನೆಯನ್ನೇ ಮಾಡಬೇಕಿತ್ತು. ಸರ್ಕಾರಿ ಶಾಲೆಗಳಲ್ಲಿ ಕಲಿಯಲು ಸೂಕ್ತ ವ್ಯವಸ್ಥೆಗಳಿರಲಿಲ್ಲ. ಶಿಕ್ಷಕರ ಕೊರತೆ, ಮೂಲಭೂತ ಸಮಸ್ಯೆಗಳ ನಡುವೆಯೇ ಕಲಿಯಬೇಕಿತ್ತು. ಈಗ ಸಕಲ ವ್ಯವಸ್ಥೆಗಳನ್ನು ಎಲ್ಲ ಶಾಲೆಗಳಿಗೂ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ಕಠಿಣ ಅಭ್ಯಾಸ ಮಾಡಬೇಕೆಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ಪ, ಸಂಸ್ಥೆ ಉಪಾಧ್ಯಕ್ಷ ನಿಂಗೇಗೌಡ, ಖಜಾಂಚಿ ವಿಶ್ವನಾಥ್, ನಿರ್ದೇಶಕರಾದ ಟಿ.ಕೆ.ನಾಗರಾಜು, ಹುಲುವಾಡಿ ಶಿವಕುಮಾರ್, ನಾಗಣ್ಣ, ಬಾಲಕೃಷ್ಣ, ಸದಸ್ಯರಾದ ರಾಮು, ವೆಂಕಟರಾಮು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.