ಬೆಂಗಳೂರು ಗ್ರಾಮಾಂತರ

ಕಸ್ತೂರಿ ಕರ್ನಾಟಕ ವೇದಿಕೆ ಕಾರ್ಯಕರ್ತರ ಬಂಧನ, ಬಿಡುಗಡೆ

Published On :

ರಾಮನಗರ: ಬಿಡದಿಯ ನಿತ್ಯಾನಂದ ಧ್ಯಾನಪೀಠಾಶ್ರಮದ ಎದುರು ಪ್ರತಿಭಟನೆ ನಡೆಸುತ್ತಿದ್ದ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ 26 ಮಂದಿ ಕಾರ್ಯಕರ್ತರನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಶುಕ್ರವಾರ ಬಂಧಿಸಿ, ನಂತರ ಬಿಡುಗಡೆ ಮಾಡಿದ್ದಾರೆ.
ಬಿಡದಿಯ ಧ್ಯಾನಪೀಠಾಶ್ರಮದಲ್ಲಿ ಕೃಷಿ ಜಮೀನಿನಲ್ಲಿ ನಿರ್ಮಿಸಿರುವ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಬೇಕು ಹಾಗೂ ನಿತ್ಯಾನಂದ ಸ್ವಾಮಿಯನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ವೇದಿಕೆ ಕಾರ್ಯಕರ್ತರು ಗುರುವಾರದಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದರು.
ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ನಿತ್ಯಾನಂದ ಆಶ್ರಮದ ಮೇಲೆ ಗುರುವಾರ ದಾಳಿ ನಡೆದ ಹಿನ್ನೆಲೆಯಲ್ಲಿ ಬಿಡದಿಯ ಧ್ಯಾನಪೀಠದ ಸುತ್ತಲ 1 ಕಿ.ಮೀ. ವ್ಯಾಪ್ತಿಯಲ್ಲಿ ರಾಮನಗರ ತಹಸೀಲ್ದಾರ್ ಹನುಮಂತರಾಯಪ್ಪ ಗುರುವಾರ ರಾತ್ರಿ ನಿಷೇಧಾಜ್ಞೆ ಹೊರಡಿಸಿದ್ದರು.
ನಿಷೇಧಾಜ್ಞೆ ಜಾರಿ ಹಿನ್ನೆಲೆಯಲ್ಲಿ ಬಿಡದಿ ಪೊಲೀಸರು ಬಂಧಿಸಿ, ಬಿಡದಿ ಠಾಣೆಗೆ ಕರೆದೊಯ್ದರು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಬಂಧಿಸಿದ ಪೊಲೀಸರ ಕ್ರಮವನ್ನು ಖಂಡಿಸಿ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸಲು ಮುಂದಾದ ಮಹಿಳಾ ಕಾರ್ಯಕರ್ತರನ್ನು ಹಾಗೂ ಬೆಂಗಳೂರು-ಮೈಸೂರು ಹೆದ್ದಾರಿ ತಡೆ ನಡೆಸಲು ಮುಂದಾದ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರತಿಭಟನಾಕಾರರು ಠಾಣೆಯಲ್ಲಿಯೇ ಧರಣಿ ಮುಂದುವರೆಸಿದರು. ನಂತರ ಸ್ವಯಂ ಜಾಮೀನಿನ ಮೇರೆಗೆ ಬಂಧಿತರನ್ನು ಬಿಡುಗಡೆ ಮಾಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೇದಿಕೆಯ ರಾಜ್ಯಾಧ್ಯಕ್ಷ ಎಲ್.ರಮೇಶ್‌ಗೌಡ, ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಬೇಕಾದ ತಹಸೀಲ್ದಾರ್ ನಿಷೇಧಾಜ್ಞೆ ಜಾರಿಗೊಳಿಸುವ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಅಧಿಕಾರಿಗಳೇ ಅಕ್ರಮ ಕಟ್ಟಡಗಳ ರಕ್ಷಣೆಗೆ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಇದರಿಂದ ಅಧಿಕಾರಿಗಳು ಮತ್ತು ಪೊಲೀಸರು ನಿತ್ಯಾನಂದನ ಏಜೆಂಟ್‌ರಂತೆ ಕಾರ್ಯ ನಿರ್ವಹಿಸುತ್ತಿರುವುದು ಸಾಬೀತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾಡ ದ್ರೋಹಿ, ಕಪಟಿ ನಿತ್ಯಾನಂದನನ್ನು ಬಿಡದಿ ಆಶ್ರಮ ಹಾಗೂ ಕರ್ನಾಟಕದಿಂದ ಹೊರದಬ್ಬದ ಹೊರತು ವಿರಮಿಸುವುದಿಲ್ಲ. ಪೊಲೀಸರು ನಮ್ಮ ವಿರುದ್ಧ ಎಷ್ಟೇ ಮೊಕದ್ದಮೆ ದಾಖಲಿಸಿದರೂ ಎದೆಗುಂದುವುದಿಲ್ಲ. ನಿತ್ಯಾನಂದನನ್ನು ಗಡಿಪಾರು ಮಾಡುವವರೆಗೂ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದರು.
ಸಂಘಟನೆಯ ಪದಾಧಿಕಾರಿಗಳಾದ ಯೋಗೇಶ್‌ಗೌಡ, ವೆಂಕಿ, ಪ್ರತಾಪ್, ಕರಿಯಪ್ಪ, ನಾಗರತ್ನ, ಲಕ್ಷ್ಮಮ್ಮ, ರಾಜಮ್ಮ, ಮಂಗಳಮ್ಮ, ಮಹೇಶ್, ಸತೀಶ್, ಸಂಜೀವ್, ದರ್ಶನ್‌ಗೌಡ, ವಸಂತ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.