ಬೆಂಗಳೂರು ಗ್ರಾಮಾಂತರ

'ದೇಶವನ್ನು ಆರ್ಥಿಕವಾಗಿ ದಿವಾಳಿ ಮಾಡಿದ ಯುಪಿಎ'

Published On :

ದೊಡ್ಡಬಳ್ಳಾಪುರ: ಇಲ್ಲಿನ ನಗರ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಮತಗಟ್ಟೆ ಮಟ್ಟದ ಕಾರ್ಯಕರ್ತರ ಸಮಾವೇಶ ಕನ್ನಡ ಜಾಗೃತ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಫುಲ್ ಉದ್ಘಾಟಿಸಿದರು. ಅವರು ಮಾತನಾಡಿ, ಯುಪಿಎ ಸರ್ಕಾರ ದೇಶವನ್ನು ಆರ್ಥಿಕವಾಗಿ ದಿವಾಳಿ ಮಾಡಿದೆ. ಹಣದುಬ್ಬರ ಮತ್ತು ಬೆಲೆ ಏರಿಕೆ ನಿಯಂತ್ರಣಕ್ಕೆ ಕಡಿವಾಣ ಹಾಕುವಲ್ಲಿ ವಿಫಲವಾಗಿದೆ. ಹೀಗಾಗಿ ದೇಶದ ಸಾಮಾಜಿಕ ಬದುಕು ಅಸ್ಥಿರತೆಯಲ್ಲಿದೆ. ಇದಕ್ಕೆ ನೇರ ಕಾರಣ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು. ಇದಕ್ಕೆ ತಿಲಾಂಜಲಿ ನೀಡುವ ಸಂದರ್ಭ ಹತ್ತಿರದಲ್ಲಿದೆ. ದೇಶ ಬಯಸುವ ನಾಯಕನಾಗಿ ನರೇಂದ್ರಮೋದಿ ಹೊರಹೊಮ್ಮಿದ್ದಾರೆ. ಹೀಗಾಗಿ ಜನ ಬದಲಾವಣೆ ಬಯಸಿದ್ದಾರೆ. ಬಿಜೆಪಿ ಪ್ರಚಂಡ ಜಯಭೇರಿ ಮೊಳಗಿಸಲಿದೆ ಎಂದರು. ಬಿಜೆಪಿ ನಗರ ಘಟಕದ ಅಧ್ಯಕ್ಷ ಎಚ್.ಎಸ್.ಶಿವಶಂಕರ್ ಮಾತನಾಡಿ ಯುವ ಘಟಕವನ್ನು ವ್ಯವಸ್ಥಿತವಾಗಿ ಸಂಘಟಿಸಬೇಕು. ಮತಗಟ್ಟೆ ಹಂತದಲ್ಲಿ ಸದೃಢ ಸಂಘಟನೆ ಮುಖ್ಯ ಎಂದರು. ರಾಜ್ಯ ಮುಖಂಡ ಸುರೇಶ್, ಯುವಮೋರ್ಚಾ ನಗರಾಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷ ಸುರೇಶ್ಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್, ಮುಖಂಡರಾದ ಡಿ.ಎಲ್. ಸತ್ಯನಾರಾಯಣ್, ಆವಲಕೊಂಡಪ್ಪ, ಮಹದೇವ್ ಮತ್ತಿತರರು ಉಪಸ್ಥಿತರಿದ್ದರು.
ಇಂದು ಬೃಹತ್ ಪ್ರತಿಭಟನೆ
ನೆಲಮಂಗಲ: ತಾಲೂಕಿನ ಮಾದನಾಯಕನಹಳ್ಳಿ ವೃತ್ತದಲ್ಲಿ ಜ. 22ರ ಬುಧವಾರ ಬೆಳಿಗ್ಗೆ 9 ಘಂಟೆಗೆ ಅರ್ಕಾವತಿ ಕಾಲುವೆ ಪಾತ್ರದ ಗ್ರಾಮಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅರ್ಕಾವತಿ ನದಿ ಕಾಲುವೆಯ ಸುತ್ತಮುತ್ತಲಿನ 1 ಕಿಲೋ ಮೀಟರ್ ವ್ಯಾಪ್ತಿಯ ಎಲ್ಲಾ ಮನೆ, ಗೋಡೌನ್, ಕಾಂಪೌಂಡ್, ವಾಣಿಜ್ಯ ಕಟ್ಟಡಗಳನ್ನು ನ್ಯಾಯಾಲಯದ ಆದೇಶದಂತೆ ತೆರವುಗೊಳಿಸಲು ಮುಂದಾಗಿರುವ ಬಿ.ಡಿ.ಎ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಈ ಪ್ರತಿಭಟನೆ ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಸಂಘದ ಸದಸ್ಯ ಮುನಿರಾಜು ತಿಳಿಸಿದ್ದಾರೆ.  


ಸವಲತ್ತುಗಳ ವಿವರ ಕುರಿತು ಮಾಹಿತಿ ಕೇಂದ್ರ
ರಾಮನಗರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ವಕ್ಫ್ ಮಂಡಳಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಹಕ್ಕು ಸಮಿತಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸರ್ಕಾರೇತರ ಸಂಸ್ಥೆಗಳಲ್ಲಿರುವ ಅನೇಕ ಸವಲತ್ತುಗಳನ್ನು ಅಲ್ಪಸಂಖ್ಯಾತರಿಗೆ ಮಾಹಿತಿ ನೀಡುವ ಉದ್ದೇಶದಿಂದ ಮಾಹಿತಿ ಕೇಂದ್ರವನ್ನು ತೆರೆಯಲಾಗಿದೆ. ಈ ಕೇಂದ್ರವು ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 2ನೇ ಮಹಡಿ, ಪಂಚಾಯತ್ ಭವನ, ರಾಮನಗರ ಜಿಲ್ಲೆ ಇಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿ ಸುಮಯ್ಯಾ ರೂಹಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.