ಬೆಂಗಳೂರು ಗ್ರಾಮಾಂತರ

ಡಿಕೆಶಿಗೆ ಅಭಿನಂದನಾ ಸಮಾರಂಭ

Published On :

ಕ.ಪ್ರ. ವಾರ್ತೆ, ರಾಮನಗರ, ಜ.23
ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ಡಿ.ಕೆ. ಶಿವಕುಮಾರ್ ಅವರಿಗೆ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಜ.26ರಂದು ನಗರದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಸಿ.ಎಂ. ಲಿಂಗಪ್ಪ ತಿಳಿಸಿದರು.
ನಗರದ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅಂದು ಮಧ್ಯಾಹ್ನ 1ಕ್ಕೆ ಸಮಾರಂಭ ನಡೆಯಲಿದೆ. ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಬಳಿಕ ಶಿವಕುಮಾರ್ ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ಕಾರ್ಯಕ್ರಮ ನಡೆಸುವರು. ಬಳಿಕ ಐಜೂರು ವೃತ್ತದಿಂದ ಪದವಿ ಪೂರ್ವ ಕಾಲೇಜು ಮೈದಾನದವರೆಗೆ ಮೆರವಣಿಗೆ ಮೂಲಕ ವೇದಿಕೆಗೆ ಕರೆದೊಯ್ಯಲಾಗುವುದು ಎಂದು ಅವರು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.  
ನೀರು ಘಟಕ ಉದ್ಘಾಟನೆ: ವೇದಿಕೆ ಕಾರ್ಯಕ್ರಮ ಮುಕ್ತಾಯದ ನಂತರ ನಗರದ ಐಜೂರು ಮತ್ತು ವಿಜಯನಗರದಲ್ಲಿ ಈಗಾಗಲೇ ಪೂರ್ಣಗೊಂಡಿರುವ ಶುದ್ಧ ಕುಡಿಯುವ ನೀರು ಘಟಕಗಳನ್ನು ಸಚಿವ ಶಿವಕುಮಾರ್ ಉದ್ಘಾಟಿಸುವರು. ಮಧ್ಯಾಹ್ನ 3ಕ್ಕೆ ಬಿಡದಿ ಹೋಬಳಿಯ ಬಾನಂದೂರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಅಭಿವೃದ್ಧಿ ಕುರಿತಂತೆ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಲಿಂಗಪ್ಪ ಹೇಳಿದರು. ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ಈಗಾಗಲೇ ಸಾಕಷ್ಟು ಭರವಸೆಗಳು ಈಡೇರಿವೆ. ರಾಮನಗರಕ್ಕೆ ತೀರಾ ಅತ್ಯಗತ್ಯವಾಗಿರುವ ಕಾವೇರಿ ಕುಡಿಯುವ ನೀರಿನ 2ನೇ ಹಂತದ ಕಾಮಗಾರಿಗೆ ಶೀಘ್ರದಲ್ಲಿಯೇ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಮಾರಾಟ ಕೂಡದು: ಬದುಕಲು ನೆಲೆ ಇಲ್ಲದ ಕಡುಬಡವರಿಗೆ ನಿವೇಶನ ಒದಗಿಸಲಾಗುವುದು. ನಿವೇಶನ ಪಡೆದುಕೊಂಡವರು ಯಾವುದೇ ಕಾರಣಕ್ಕೂ ಮಾರಾಟ ಮಾಡಬಾರದು. ಹೀಗಾದಲ್ಲಿ ನಿವೇಶನ ನೀಡುವ ಉದ್ದೇಶ ಸಾರ್ಥಕವಾಗುವುದಿಲ್ಲ. ಈ ಹಿಂದೆ ವಿಜಯನಗರ ಬಡಾವಣೆಯಲ್ಲಿ ಬಡವರಿಗೆ ಹಂಚಿದ್ದ ನಿವೇಶನಗಳು ಪರಭಾರೆ ಆಗಿದ್ದು, ಅವನ್ನು ಖರೀದಿಸಿದ ಉಳ್ಳವರು ಬಹುಮಹಡಿ ಕಟ್ಟಡಗಳನ್ನು ಕಟ್ಟಿಕೊಂಡಿದ್ದಾರೆ ಎಂದು ಲಿಂಗಪ್ಪ ವಿಷಾದಿಸಿದರು.  
ಮತ್ತೆ ಅಧಿಕಾರಕ್ಕೆ: ಯುಪಿಎ 1 ಮತ್ತು 2ರ ಅವಧಿಯಲ್ಲಿ ನಡೆದ ಜನಪರ ಕಾರ್ಯಕ್ರಮಗಳನ್ನೇ ಮುಂದಿಟ್ಟುಕೊಂಡು ಲೋಕಸಭಾ ಚುನಾವಣೆ ಎದುರಿಸಲಾಗುವುದು. ಈ ಬಾರಿಯೂ ಕಾಂಗ್ರೆಸ್ ಪಕ್ಷವೇ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಯ್ಯದ್ ಜಿಯಾ ಉಲ್ಲಾ, ಪ್ರಧಾನ ಕಾರ್ಯದರ್ಶಿ ಮರಿದೇವರು, ಕೆಪಿಸಿಸಿ ಸದಸ್ಯ ಕೆ.ರಮೇಶ್, ನಗರಸಭೆ ಮಾಜಿ ಅಧ್ಯಕ್ಷ ಕೆ. ಶೇಷಾದ್ರಿ, ಟೌನ್ ಘಟಕದ ಅಧ್ಯಕ್ಷ ವೆಂಕಟೇಶ್, ಕಾಂತರಾಜ ಪಟೇಲ್ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.