ದೇವನಹಳ್ಳಿ: ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ 28 ನೆಯ ಪುಣ್ಯ ಸ್ಮರಣೆ ಅಂಗವಾಗಿ ಇಲ್ಲಿನ ಮಿನಿವಿಧಾನಸೌಧದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ವಿ.ಶಂಕರ್, ಉಪವಿಭಾಗಾಧಿಕಾರಿ ಮಂಜುನಾಥ್ ಹಾಗೂ ತಹಸೀಲ್ದಾರ್ ಕೇಶವಮೂರ್ತಿ ಜಗಜೀವನ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ವಿ.ಶಂಕರ್ ಮಾತನಾಡಿದರು. ಬಾಬು ಜಗಜೀವನರಾಂ ಭವನ ನಿರ್ಮಾಣ ಮಾಡಲು ದೇವನಹಳ್ಳಿ ಪಾರಿವಾಳ ಗುಟ್ಟದ ಬಳಿಯ ಸರ್ವೆ ನಂ. 147 ರ ಒಂದು ಎಕರೆ ಪ್ರದೇಶ ಗುರುತಿಸಲಾಗಿದ್ದು ಆದರೆ ಸಂಪರ್ಕ ರಸ್ತೆ ಇಲ್ಲದೇ ಇರುವುದರಿಂದ ಕಟ್ಟಡ ನಿರ್ಮಾಣ ವಿಳಂಬವಾಗುತ್ತಿದೆ ಎಂದು ತಹಸೀಲ್ದಾರ್ ತಿಳಿಸಿದರು.
ತಾವು ಸ್ಥಳಕ್ಕೆ ಭೇಟಿ ನೀಡಿ ಪಕ್ಕದಲ್ಲಿರುವ ರೈತರನ್ನು ವಿಶ್ವಾಸಕ್ಕೆ ಪಡೆದು ಸಮಸ್ಯೆ ಬಗೆಹರಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ್, ಬುಳ್ಳಹಳ್ಳಿ ರಾಜಪ್ಪ ಭಾಗವಹಿಸಿದ್ದರು.