ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ ತಾಪಂ: ಕೈ-ಕಮಲ ದೋಸ್ತಿ

Published On :

ದೊಡ್ಡಬಳ್ಳಾಪುರ: ಅನಿರೀಕ್ಷಿತ ರಾಜಕೀಯ ಬೆಳವಣಿಗೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮೈತ್ರಿ ಸಾಫಲ್ಯವಾಗಿದೆ. ಪರಿಣಾಮವಾಗಿ ಕಾಂಗ್ರೆಸ್‌ನ ತಾಲೂಕು ಪಂಚಾಯಿತಿ ಸದಸ್ಯೆ ಶ್ಯಾಮಲ ಜಿ. ಲಕ್ಷ್ಮೀಪತಿ ನೂತನ ಅಧ್ಯಕ್ಷರಾಗಿ ಮತ್ತು ಜಯಲಕ್ಷ್ಮೀ ಶಂಕರಾಚಾರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕೋರಂ ಕೊರತೆಯಿಂದ ಜು.5ರಂದು ಮುಂದೂಡಲ್ಪಟ್ಟಿದ್ದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆ ಗುರುವಾರ ನಡೆಯಿತು. ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಸಮ್ಮುಖದಲ್ಲಿ ಪ್ರಸಕ್ತ ತಾಲೂಕು ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ 3ನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳಾ ಅಭ್ಯರ್ಥಿಗೆ ಮೀಸಲಾಗಿತ್ತು. 20 ಸದಸ್ಯ ಬಲ ಹೊಂದಿರುವ ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿಯಲ್ಲಿ ಚುನಾವಣೆ ಪ್ರಕ್ರಿಯೆ ನಡೆಸಲು ಕನಿಷ್ಠ ಶೇ.50 ಅಂದರೆ 10 ಸದಸ್ಯರ ಹಾಜರು ಅನಿವಾರ್ಯವಾಗಿತ್ತು.
ತೀವ್ರ ಹಣಾಹಣೆ: ಈ ಬಾರಿಯ ಚುನಾವಣೆ ತೀವ್ರ ಹಣಾಹಣೆಯಿಂದ ಕೂಡಿತ್ತು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಶ್ಯಾಮಲ ಮತ್ತು ಬಿಜೆಪಿಯ ರತ್ನಮ್ಮ ನಾಮಪತ್ರ ಸಲ್ಲಿಸಿದ್ದರು. ಅದೇ ರೀತಿ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಜಯಲಕ್ಷ್ಮಿ ಹಾಗೂ ಜೆಡಿಎಸ್‌ನ ದೀಪಾ ಆಕಾಂಕ್ಷಿಯಾಗಿದ್ದರು. ವಿಜೇತ ಅಭ್ಯರ್ಥಿಗಳಾದ ಶ್ಯಾಮಲ ಮತ್ತು ಜಯಲಕ್ಷ್ಮಿ ಪರವಾಗಿ 10 ಮತಗಳು ಬಿದ್ದಿದ್ದರೆ ವಿರುದ್ಧವಾಗಿ 9 ಮತಗಳು ಬಿದ್ದಿವೆ. ಒಬ್ಬ ಸದಸ್ಯರು ಗೈರು ಹಾಜರಾಗಿದ್ದರು.
ಕೊನೆಯ ಅವಧಿ: ಪ್ರಸಕ್ತ ತಾಲೂಕು ಪಂಚಾಯಿತಿ ಸದಸ್ಯರ ಅಧಿಕಾರಾವಧಿಯ ಕೊನೆಯ ಹಂತ ಇದಾಗಿದ್ದು, 2015ರ ಫೆಬ್ರವರಿಗೆ ಅವಧಿ ಕೊನೆಗೊಳ್ಳಲಿದೆ. ಅದಕ್ಕೂ ಮುನ್ನ ಚುನಾವಣೆ ಘೋಷಣೆಯಾದರೆ ಅಲ್ಲಿಗೆ ಅವಧಿ ಮುಕ್ತಾಯಗೊಳ್ಳಲಿದೆ. ಹೀಗಾಗಿ ಬಾಕಿ ಉಳಿದಿರುವ ಕೆಲಸಗಳನ್ನು ಪೂರ್ಣಗೊಳಿಸುವುದಕ್ಕೆ ಅಧ್ಯಕ್ಷ-ಉಪಾಧ್ಯಕ್ಷರು ಆದ್ಯತೆ ನೀಡಬೇಕಿದೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ನೂತನ ಅಧ್ಯಕ್ಷ-ಉಪಾಧ್ಯಕ್ಷರು, ಪಕ್ಷಾತೀತವಾಗಿ ಪಂಚಾಯಿತಿಯ ಅಭಿವೃದ್ಧಿಗೆ ಶ್ರಮಿಸುವ ಭರವಸೆ ನೀಡಿದ್ದಾರೆ.
ಅಭಿನಂದನೆ:ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಶಾಸಕ ಟಿ. ವೆಂಕಟರಮಣಯ್ಯ, ಮಾಜಿ ಶಾಸಕ ಆರ್.ಜಿ. ವೆಂಕಟಾಚಲಯ್ಯ, ಜೆ. ನರಸಿಂಹಸ್ವಾಮಿ ಮತ್ತಿತರರು ಅಭಿನಂದಿಸಿದ್ದಾರೆ. ತಾಲೂಕು ಪಂಚಾಯಿತಿ ಕಚೇರಿ ಮುಂದೆ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.