ಬೆಂಗಳೂರು ಗ್ರಾಮಾಂತರ

ಪೊಲೀಸ್ ಅಧಿಕಾರಿ ಪ್ರಕರಣ ತನಿಖೆ ಅಗತ್ಯ

Published On :

ದೊಡ್ಡಬಳ್ಳಾಪುರ: ಪೊಲೀಸ್ ಅಧಿಕಾರಿ ರವೀಂದ್ರನಾಥ್ ಪ್ರಕರಣದಲ್ಲಿ ಗಂಭೀರ ಸ್ವರೂಪದ ತನಿಖೆ ಅಗತ್ಯವಿದೆ ಎಂದು ಮಾಜಿ ಕೇಂದ್ರ ಸಚಿವ, ಸಂಸದ ಎಂ ವೀರಪ್ಪ ಮೊಯ್ಲಿ ಅಭಿಪ್ರಾಯಪಟ್ಟರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಭಾನುವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಸಾಮಾಜಿಕ ಸೇವಾ ಮತ್ತು ಭದ್ರತಾ ಕ್ಷೇತ್ರದಲ್ಲಿ ಗಣನೀಯ ಬದಲಾವಣೆಗಳು ಅಗತ್ಯವಿದ್ದು, ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೆಲ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ. ಇದಕ್ಕೆ ಪೂರಕವಾಗಿ ಎಲ್ಲ ವಲಯಗಳಿಂದ ಸಹಕಾರ ಅಗತ್ಯವಾಗಿದೆ ಎಂದರು.
ಮತದಾರರಿಗೆ ಕೃತಜ್ಞತೆ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸತತ 2ನೇ ಬಾರಿಗೆ ಚುನಾಯಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಅವರು, ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಸಿದ್ಧಾಂತಕ್ಕೆ ಕ್ಷೇತ್ರದ ಜನ ಪುರಸ್ಕರಿಸಿದ್ದಾರೆ. ಅಪಪ್ರಚಾರಗಳಿಗೆ ಗಮನ ಕೊಡದೆ ನೈಜ ಅಭಿವೃದ್ಧಿ ಮತ್ತು ಪ್ರಗತಿಪರ ಚಿಂತನೆಗೆ ಒತ್ತು ನೀಡಿದ್ದಾರೆ. ಕ್ಷೇತ್ರದ ಎಲ್ಲ 8 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪಕ್ಷಕ್ಕೆ ಗಣನೀಯ ಬೆಂಬಲ ನೀಡಿದ ಎಲ್ಲ ಮತದಾರರು, ಸಹಕರಿಸಿದ ಕಾರ್ಯಕರ್ತರು ಮತ್ತು ಮುಖಂಡರು ಅಭಿನಂದನಾರ್ಹರು ಎಂದರು.
ಎತ್ತಿನಹೊಳೆ ಶೀಘ್ರ: ಬಯಲುಸೀಮೆ ಜಿಲ್ಲೆಗಳಿಗೆ ನೀರಾವರಿ ಒದಗಿಸುವ ಸಮಗ್ರ ಯೋಜನೆಯಾಗಿರುವ ಎತ್ತಿನಹೊಳೆ ಶೀಘ್ರದಲ್ಲೇ ಜಾರಿಗೆ ಬರಲಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಮಹತ್ವದ ಹಂತದಲ್ಲಿದ್ದು, ಕಾಮಗಾರಿ ಕೂಡ ಆದಷ್ಟು ಬೇಗ ಆರಂಭವಾಗಲಿದೆ. ಕೇವಲ ಭರವಸೆಯಲ್ಲಿ ಉಳಿಸದೆ, ಯೋಜನೆಯನ್ನು ಶಾಶ್ವತವಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಆಯಕಟ್ಟಿನ ಹಂತಗಳಲ್ಲಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.
ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ಸೇರಿದಂತೆ ಬಯಲುಸೀಮೆಯ 8 ಜಿಲ್ಲೆಗಳಿಗೆ ಸಮಗ್ರ ನೀರಾವರಿ ಒದಗಿಸುವ ಈ ಯೋಜನೆ ಯಾವುದೇ ಅಡ್ಡಿ ಆತಂಕಗಳು ಎದುರಾದರೂ ಅನುಷ್ಠಾನ ಶತಸಿದ್ಧ ಎಂದರು.
ಕಾಂಗ್ರೆಸ್ ಬಲ ಕುಂದಿಲ್ಲ: ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಸೋಲನ್ನು ಅನುಭವಿಸಿರಬಹುದು. ಆದರೆ ಮತಗಳಿಕೆ ಪ್ರಮಾಣದಲ್ಲಿ ಗಣನೀಯವಾಗಿಯೇ ಇದೆ. ಪಕ್ಷದ ಕೆಲ ಆಂತರಿಕ ವಿಚಾರಗಳೂ ಸೋಲಿಗೆ ಕಾರಣ ಎನ್ನಬಹುದು. ರಾಜ್ಯದಲ್ಲಿ ಕಳೆದ ಲೋಕಸಭಾ ಚುನಾವಣೆಗಿಂತ ಈ ಬಾರಿ ಸುಧಾರಿತ ಪ್ರದರ್ಶನವನ್ನು ಕಾಂಗ್ರೆಸ್ ನೀಡಿದೆ. ದೇಶದೆಲ್ಲೆಡೆ ಕಾಂಗ್ರೆಸ್ ವಿರೋಧಿ ಅಲೆ ಕಂಡು ಬಂದಿದ್ದರೂ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳು ಲಭ್ಯವಾಗಿರುವುದು ಉಲ್ಲೇಖಾರ್ಹ ಎಂದರು.
ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೇಂದ್ರದ ಮೂಲಕ ಬರುವ ಅನುದಾನದ ಸಮರ್ಪಕ ನಿರ್ವಹಣೆ ಮತ್ತು ಬಳಕೆಗೆ ಒತ್ತು ನೀಡಲಾಗುವುದು. ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಕಳೆದ 5 ವರ್ಷದಲ್ಲಿ ಕೂಡ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಹಲವು ಯೋಜನೆಗಳು  ಅನುಷ್ಠಾನಗೊಂಡಿವೆ. ಈ ಬಗ್ಗೆ ಜನತೆಗೆ ಸಮರ್ಪಕ ಮಾಹಿತಿ ತಲುಪಿಲ್ಲ ಎಂದರು.
ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ 47ಸಾವಿರಕ್ಕೂ ಅಧಿಕ ಮತಗಳನ್ನು ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.