ಬೆಂಗಳೂರು ಗ್ರಾಮಾಂತರ

ಧನಂಜಯ ಹಂಗಾಮಿ

Published On :

ಕ.ಪ್ರ.ವಾರ್ತೆ  ರಾಮನಗರ  ಜೂ.16
ಜಿಲ್ಲಾ ಪಂಚಾಯಿತಿ ಹಂಗಾಮಿ ಅಧ್ಯಕ್ಷರಾಗಿ ಮಾಗಡಿ ತಾಲೂಕಿನ ತಿಪ್ಪಸಂದ್ರ ಕ್ಷೇತ್ರದ ಜೆಡಿಎಸ್ ಸದಸ್ಯ ಎಂ.ಕೆ. ಧನಂಜಯ ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಅಧ್ಯಕ್ಷ ಎಚ್.ಸಿ.ರಾಜು ಮತ್ತು ಉಪಾಧ್ಯಕ್ಷೆ ಎಸ್.ಬಿ.ಗೌರಮ್ಮ ಅವರ ಅಧಿಕಾರಾವಧಿ ಅಂತ್ಯಗೊಂಡಿರುವ
ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಕಾಯ್ದೆಯನ್ವಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿರುವ ಧನಂಜಯ ಹಂಗಾಮಿ ಅಧ್ಯಕ್ಷ ಪಟ್ಟಕ್ಕೇರಿದ್ದಾರೆ.
ಕಡೆಯ 20 ತಿಂಗಳ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲು ನಿಗದಿಗೆ ಹೈಕೋರ್ಟ್
ತಡೆಯಾಜ್ಞೆ ನೀಡಿದೆ. ಈ ಪರಿಣಾಮ ಜೂ.13ಕ್ಕೆ ನಡೆಯಬೇಕಿದ್ದ ಉಭಯ ಸ್ಥಾನಗಳ ಚುನಾವಣೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ರದ್ದುಪಡಿಸಿತ್ತು.
ರಾಜ್ಯದ ಬಹುತೇಕ ಜಿಲ್ಲಾ ಪಂಚಾಯಿತಿಗಳಲ್ಲೂ ಇಂಥದ್ದೇ ಸನ್ನಿವೇಶ ಎದುರಾಗಿದ್ದು, ಅಲ್ಲೂ ಅವಧಿ ಮುಕ್ತಾಯದ ತರುವಾಯ ನಿಯಮಾನುಸಾರ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರು ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ.
ರಾಜು ಹಸ್ತಾಂತರ : ಜಿ.ಪಂ. ಭವನದ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ಗಮನ ಅಧ್ಯಕ್ಷ ಎಚ್.ಸಿ.ರಾಜು, ನಿರ್ಗಮನ ಉಪಾಧ್ಯಕ್ಷೆ ಗೌರಮ್ಮ ಮತ್ತು ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಹೂಗುಚ್ಛ ನೀಡುವ ಮೂಲಕ ಧನಂಜಯ ಅವರಿಗೆ ಅಧಿಕಾರ ವಹಿಸಿಕೊಟ್ಟರು.
ಸ್ಥಾಯಿ ಸಮಿತಿ ಅಧ್ಯಕ್ಷರಾದ ರಘುಕುಮಾರ್ ಮತ್ತು ವಿಜಯಕುಮಾರ್, ಮಾಜಿ ಅಧ್ಯಕ್ಷರಾದ ಬಿ.ವಿ.ಹಂಸಕುಮಾರಿ, ಕೆ.ಮುದ್ದುರಾಜ್ ಯಾದವ್, ಸದಸ್ಯರಾದ ಎಚ್.ಎಲ್.ಚಂದ್ರ, ಸುಧಾ ರಾಜು, ಜೆಡಿಎಸ್ ಮುಖಂಡರು, ಕಾರ್ಯಕರ್ತರು, ಹಿತೈಷಿಗಳು ಧನಂಜಯ ಅವರನ್ನು ಅಭಿನಂದಿಸಿದರು.
ಉತ್ತಮ ಕೆಲಸ: ತಮಗೆ ಸಿಕ್ಕಿರುವ ಈ ಅನಿರೀಕ್ಷಿತ ಅವಕಾಶವನ್ನು ಬಳಸಿಕೊಂಡು ಉತ್ತಮ ಕೆಲಸ ಮಾಡುವೆ.
ಜಿ.ಪಂ.ನ ಎಲ್ಲ ಸದಸ್ಯರು, ಸಚಿವ, ಸಂಸದ, ಶಾಸಕರನ್ನೆಲ್ಲ ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆ ಅಭಿವೃದ್ಧಿಗೆ ಶ್ರಮಿಸುವೆ ಎಂದು ಹಂಗಾಮಿ ಅಧ್ಯಕ್ಷ ಧನಂಜಯ ಸುದ್ದಿಗಾರರಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಪ್ರಮುಖವಾಗಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಅದನ್ನು ನೀಗಿಸಲು ಒತ್ತು ನೀಡಲಾಗುವುದು. ಹಾಸ್ಟೆಲ್ ಅವ್ಯವಸ್ಥೆ, ಶೈಕ್ಷಣಿಕ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುವೆ. ಇರುವಷ್ಟು ಅವಧಿಯಲ್ಲಿ ಗಮನ ಸೆಳೆಯುವಂತಹ ಕೆಲಸ ಮಾಡುವೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.