ಸುಧಾರಿತ ಪದ್ಧತಿಯಿಂದ ಇಳುವರಿ ಸಾಧ್ಯ
ಕನ್ನಡಪ್ರಭ ವಾರ್ತೆ, ರಾಮನಗರ, ಜೂ.19
ಆಹಾರ ಉತ್ಪಾದನೆಯಲ್ಲಿ ಭಾರತ ಸ್ವಾವಲಂಬನೆ ಸಾಧಿಸಿದ್ದರೂ ವಿಶ್ವದ ಇತರೆ ರಾಷ್ಟ್ರಗಳಿಗೆ ಹೋಲಿಸಿದಲ್ಲಿ ಉತ್ತಮ ಇಳುವರಿ ಪಡೆಯುವಲ್ಲಿ ಹಿಂದುಳಿದಿದೆ.
ಹಾಗಾಗಿ, ಈ ನಿಟ್ಟಿನಲ್ಲಿ ನಮ್ಮ ಕೃಷಿಕರು ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡಲ್ಲಿ ಮಾತ್ರ ರೈತರು ಆರ್ಥಿಕ ಸಬಲತೆ ಸಾಧಿಸಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅಭಿಪ್ರಾಯಪಟ್ಟರು.
ನಗರದ ಗುರುಭವನದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ಕೃಷಿ ಇಲಾಖೆ 2014-15ನೇ ಸಾಲಿನ ಭೂಚೇತನ ಕಾರ್ಯಕ್ರಮದಡಿ ಆಯ್ಕೆಯಾಗಿರುವ ರೈತ ಅನುವುಗಾರರಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ರೈತ ಕ್ಷೇತ್ರ ಪಾಠಶಾಲೆ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೃಷಿಯನ್ನೇ ನಂಬಿರುವ ರೈತರು ವ್ಯವಸಾಯವನ್ನು ಶಾಪವೆಂದು ಪರಿಗಣಿಸಿದ್ದಾರೆ. ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ದೊರೆಯದಿರುವುದು ಹಾಗೂ ಹವಾಮಾನ ವೈಪರೀತ್ಯದಿಂದಾಗಿ ರೈತರು ನಷ್ಟ ಅನುಭವಿಸುತ್ತಿದ್ದು, ಕೃಷಿ ಚಟುವಟಿಕೆಯಿಂದ ದೂರವಾಗುವಂತೆ ಮಾಡುತ್ತಿದೆ. ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡಲ್ಲಿ ಮಾತ್ರ ರೈತರು ಆರ್ಥಿಕ ಸಬಲತೆ ಸಾಧಿಸಲು ಸಾಧ್ಯವಾಗಲಿದೆ ಎಂದು ವೆಂಕಟೇಶ್ ಹೇಳಿದರು.
ಈ ಕಾರ್ಯಾಗಾರದಲ್ಲಿ ತರಬೇತಿ ಪಡೆದ ಅನುವುಗಾರರು ಗ್ರಾಮ ಮಟ್ಟದಲ್ಲಿ ರೈತರಿಗೆ ತಂತ್ರಜ್ಞಾನದ ಬಗ್ಗೆ ಮಾಹಿತಿ ನೀಡುವ ಜತೆಗೆ ಪ್ರೋತ್ಸಾಹಿಸುವ ಕೆಲಸ ಮಾಡಬೇಕಿದೆ. ರೈತರು ಬೇಸಾಯದ ಜತೆಗೆ ಜೇನು ಸಾಕಣೆ, ಅಣಬೆ ಬೇಸಾಯ, ಪಶು ಸಂಗೋಪನೆ, ಕುರಿ, ಕೋಳಿ ಸಾಕಾಣಿಕೆಯಂತಹ ಉಪ ಕಸುಬುಗಳನ್ನು ಅಳವಡಿಸಿಕೊಂಡಲ್ಲಿ ಸರ್ಕಾರಿ ಉದ್ಯೋಗಿಯಷ್ಟೇ ಆದಾಯ ಗಳಿಸಬಹುದು ಎಂದರು.
ಗ್ರಾಪಂಗೆ ಒಬ್ಬ ಮಾದರಿ ರೈತ: ತರಬೇತಿ ಪಡೆದ ಅನುವುಗಾರರು ತಮ್ಮ ಜವಾಬ್ದಾರಿಯನ್ನು ಅರಿತು ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕನಿಷ್ಠ ಒಬ್ಬರನ್ನು ಮಾದರಿ ರೈತರನ್ನಾಗಿ ರೂಪಿಸಬೇಕಿದೆ. ಕೃಷಿ ಕ್ಷೇತ್ರದಿಂದ ವಿಮುಖರಾಗುತ್ತಿರುವ ವಿದ್ಯಾವಂತ ಯುವಕರನ್ನು ಮತ್ತೆ ಕೃಷಿಯತ್ತ ಆಕರ್ಷಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ವೆಂಕಟೇಶ್ ಕಿವಿಮಾತು ಹೇಳಿದರು.
ಈ ಕಾರ್ಯಕ್ರಮದ ಮೂಲಕ ಜಿಲ್ಲೆಯಲ್ಲಿ ಕೃಷಿ ಉತ್ಪಾದನೆಯನ್ನು ಶೇ.20 ರಷ್ಟು ಹೆಚ್ಚಿಸುವ ಗುರಿ ಹೊಂದಲಾಗಿದೆ. ತಾಂತ್ರಿಕತೆ ಜತೆಗೆ ಉತ್ತಮ ಗುಣಮಟ್ಟದ ಬೀಜಗಳ ಪೂರೈಕೆಗೆ ಗ್ರಾಮ ಮಟ್ಟದಲ್ಲೇ ಬೀಜೋತ್ಪಾದನೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಆಧುನಿಕ ತಂತ್ರಜ್ಞಾನಗಳಿಂದ ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಇತರೆ ಇಲಾಖೆಗಳ ಸಹಕಾರದೊಂದಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕೃಷಿ ಇಲಾಖೆ ಜಂಟಿ ಆಯುಕ್ತ ಅಣ್ಣಯ್ಯ ತಿಳಿಸಿದರು.
ಜಿಲ್ಲೆಯಲ್ಲಿ 94 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಯೋಜನೆಯನ್ನು ಅನುಷ್ಟಾನಗೊಳಿಸುತ್ತಿದ್ದು, ರೈತ ಅನುವುಗಾರರಿಗೆ ಕೃಷಿ ವಿಶ್ವವಿದ್ಯಾಲಯದಲ್ಲೇ 5 ದಿನಗಳ ಬುನಾದಿ ತರಬೇತಿ ನೀಡಲಾಗಿದೆ. ಪ್ರತಿ 500 ಹೆಕ್ಟೇರ್ ಪ್ರದೇಶಕ್ಕೆ ಒಬ್ಬರು ಅನುವುಗಾರರಂತೆ ಮೊದಲನೇ ಹಂತದ 84 ಅನುವುಗಾರರ ಜತೆಗೆ ಈಗ 174 ಅನುವುಗಾರರನ್ನು ನೇಮಕ ಮಾಡಿಕೊಳ್ಳಲಾಗಿದೆ. ಪ್ರತಿ ಅನುವುಗಾರರಿಗೆ ಕನಿಷ್ಠ 100 ಹೆಕ್ಟೇರ್ ಪ್ರದೇಶದಲ್ಲಿ ಭೂಚೇತನ ಯೋಜನೆ ಅನುಷ್ಠಾನದ ಗುರಿ ನೀಡಲಾಗಿದೆ ಎಂದರು.
ಮೂರ್ನಾಲ್ಕು ಗ್ರಾಮಗಳನ್ನು ಸೇರಿಸಿ ಒಂದು ಗ್ರಾಮಗುಚ್ಛವೆಂದು ಪರಿಗಣಿಸಿ ಕೃಷಿ ಪರಿಕರಗಳನ್ನು ದಾಸ್ತಾನು ರಿಯಾಯಿತಿ ದರದಲ್ಲಿ ವಿತರಣೆ ಮಾಡಲು ಯೋಜನೆ ರೂಪಿಸಲಾಗಿದೆ.
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಯೋಜನೆಗಳ ಕೈಪಿಡಿಗಳನ್ನು ಬಿಡುಗಡೆಗೊಳಿಸಲಾಯಿತು. ಅನುವುಗಾರರಿಗೆ ನೀಡಲಾಗುತ್ತಿರುವ ಕೃಷಿ ಪರಿಕರ ಕಿಟ್ಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು. ಸಹಾಯಕ ಕೃಷಿ ನಿರ್ದೇಶಕರಾದ ನಾಗರಾಜು, ವಾಣಿ, ಕೃಷ್ಣಪ್ಪ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

