ಬೆಂಗಳೂರು ಗ್ರಾಮಾಂತರ

ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಲು ಮತದಾನ ಮಾಡಿ

Published On :

ರಾಮನಗರ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ದೇಶದ ಪ್ರತಿಯೊಬ್ಬ ಪ್ರಜೆಯು ಮತದಾನ ಮಾಡಬೇಕು. ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಎಲ್ಲರೂ ಕೊಡುಗೆ ನೀಡಬೇಕು  ಎಂದು ಜಿ.ಪಂ. ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಎಂ.ವಿ. ವೆಂಕಟೇಶ್ ತಿಳಿಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಸಾರ್ವಜನಿಕರನ್ನು ಪ್ರೇರೇಪಿಸಲು ಆಯೋಜಿಸಿರುವ 4 ದಿನದ ರಂಗೋಲಿ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳಿಗೆ ನೀಡಿರುವ ಪರಮಾಧಿಕಾರವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
2014ರ ಲೋಕಸಭಾ ಚುನಾವಣೆಯಲ್ಲಿ ಯುವ ಸಮುದಾಯ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಹಾಗೂ ಇತರರೂ ಮತದಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲು ರಂಗೋಲಿ ಸ್ಪರ್ಧೆ ಸೇರಿದಂತೆ ಹಲವಾರು ಸ್ಪರ್ಧೆಗಳನ್ನು ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿಯಿಂದ ಆಯೋಜಿಸಲಾಗಿದೆ ಎಂದು ವೆಂಕಟೇಶ್ ತಿಳಿಸಿದರು.
ಯುವ ಮತದಾರರನ್ನು ಮತಗಟ್ಟೆಗಳಿಗೆ ಸೆಳೆಯಬೇಕಿದೆ. ಅವರಿಗೆ ಮತದಾನದ ಮಹತ್ವವನ್ನು ತಿಳಿಸಲು ಆಯೋಜಿಸಿರುವ ರಂಗೋಲಿ ಸ್ಪರ್ಧೆಯಲ್ಲಿ 18 ವರ್ಷ ತುಂಬಿದವರು ಸಕ್ರಿಯವಾಗಿ ಪಾಲ್ಗೊಂಡು  ಸುಂದರವಾಗಿ ರಂಗೋಲಿಯನ್ನು ಬಿಡಿಸಿರುವ ಜತೆಗೆ ಇತರರನ್ನು ಪ್ರೇರೇಪಿಸುವಂತಹ ಘೋಷಣೆಗಳನ್ನು ರಚಿಸಿರುವುದು ಸ್ವಾಗತಾರ್ಹ ಎಂದರು.
ಏ.17ರಂದು ನಡೆಯುವ ಚುನಾವಣೆಯಲ್ಲಿ ಎಲ್ಲರೂ ಮತ ಕೇಂದ್ರಗಳಿಗೆ ತೆರಳಿ ಮತದಾನ ಮಾಡಿದಲ್ಲಿ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಅಡಿಪಾಯವಾಗಲಿದೆ. ಮತದಾನದ ದಿನವನ್ನು ಹಬ್ಬದ ದಿನದಂತೆ ಆಚರಿಸಿ ಸಂಭ್ರಮದಿಂದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ ಎಂದು ಕರೆ ನೀಡಿದರು.
ವಿಜೇತರಿಗೆ ಬಹುಮಾನ ವಿತರಣೆ: ರಂಗೋಲಿ ಸ್ಪರ್ಧೆಯಲ್ಲಿ ಗಂಗಾ ಪ್ರಥಮ, ಕೆ.ರಾಧಾ ದ್ವಿತೀಯ, ಕೆ. ದಿವ್ಯ ತೃತೀಯ ಹಾಗೂ ಎನ್. ಪ್ರತಿಭಾ, ಜಿ.ಆರ್. ಮಮತಾ ಅವರಿಗೆ ಸಮಾಧಾನಕರ ಬಹುಮಾನ ನೀಡಲಾಯಿತು. ಭಾಗವಹಿಸಿದ್ದವರೆಲ್ಲರಿಗೂ  ಪ್ರಶಂಸನಾ ಪತ್ರಗಳನ್ನು ವಿತರಿಸಲಾಯಿತು. ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಹಾಗೂ ವಾರ್ತಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ  ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.