ಶಾಸಕಾಂಗ, ಕಾರ್ಯಾಂಗ ನಂಬಿಕೆ ಕಳೆದುಕೊಳ್ಳುತ್ತಿವೆ
ರಾಮನಗರ: ಪ್ರಸ್ತುತ ಸನ್ನಿವೇಶದಲ್ಲಿ ಶಾಸಕಾಂಗ, ಕಾರ್ಯಾಂಗ ವ್ಯವಸ್ಥೆಗಳು ಜನರಲ್ಲಿ ನಂಬಿಕೆ ಕಳೆದುಕೊಳ್ಳುತ್ತಿವೆ. ಆದರೆ, ನ್ಯಾಯಾಂಗ ವ್ಯವಸ್ಥೆ ತನ್ನ ಕಾರ್ಯವನ್ನು ಯಶಸ್ವಿಯಾಗಿ ನಿಭಾಯಿಸುವ ಮೂಲಕ ಜನರಲ್ಲಿ ನಂಬಿಕೆಯನ್ನು ಉಳಿಸಿಕೊಂಡಿದೆ ಎಂದು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ತಿಳಿಸಿದರು.
ತಾಲೂಕಿನ ಬಸವನಪುರದ ಬಳಿ ಇರುವ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಜಿಲ್ಲಾ ವಕೀಲರ ಸಂಘ ಹಾಗೂ ರಾಜ್ಯ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯಿಂದ ನಡೆದ 21ನೇ ಶತಮಾನದಲ್ಲಿ ಯುವ ವಕೀಲರ ಮುಂದಿರುವ ಸವಾಲುಗಳು ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭ್ರಷ್ಟಾಚಾರದಲ್ಲಿ ನಿರತರಾಗಿರುವ ಜನಪ್ರತಿನಿಧಿಗಳು ಹಾಗೂ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಸರ್ಕಾರಿ ಅಧಿಕಾರಿಗಳನ್ನು ಕಟಕಟೆಯಲ್ಲಿ ನಿಲ್ಲಿಸಲಾಗುತ್ತಿದೆ. ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ನ್ಯಾಯಾಂಗವು ಚಾಟಿ ಏಟು ನೀಡುತ್ತಿದೆ ಎಂದರು.
ಇತ್ಯರ್ಥ: ಸುಪ್ರೀಂ ಕೋರ್ಟ್ನಲ್ಲಿ 50 ಸಾವಿರ, ವಿವಿಧ ರಾಜ್ಯಗಳ ಹೈಕೋರ್ಟ್ಗಳಲ್ಲಿ 18 ಲಕ್ಷ, ಜಿಲ್ಲಾ ಮತ್ತು ತಾಲೂಕು ನ್ಯಾಯಾಲಗಳಲ್ಲಿ 1.5 ಕೋಟಿಗೂ ಹೆಚ್ಚು ಪ್ರಕರಣಗಳನ್ನು ಪ್ರತಿ ವರ್ಷ ಇತ್ಯರ್ಥಗೊಳಿಸಲಾಗುತ್ತಿದೆ. ವಿಶ್ವದ ಬೇರಾವುದೇ ರಾಷ್ಟ್ರದಲ್ಲಿ ಇಷ್ಟು ಪ್ರಮಾಣದಲ್ಲಿ ಪ್ರಕರಣಗಳು ಇತ್ಯರ್ಥವಾಗುತ್ತಿಲ್ಲ ಎಂದು ಹೇಳಿದರು.
ಇಂದಿನ ಆಧುನಿಕ ಸಮಾಜದಲ್ಲೂ ಮಹಿಳೆಯರನ್ನು ಎರಡನೆ ದರ್ಜೆಯವಳಂತೆ ನೋಡಲಾಗುತ್ತಿದೆ. ಮಹಿಳೆ ಮೇಲೆ ದಬ್ಬಾಳಿಕೆ, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲೇ ಇವೆ. ಆದ್ದರಿಂದ ನ್ಯಾಯಾಲಯವು ಬಹುತೇಕ ಪ್ರಕರಣಗಳಲ್ಲಿ ಮಹಿಳೆಯರ ಪರವಾಗಿಯೇ ತೀರ್ಪು ನೀಡಲಾಗುತ್ತಿದೆ ಎಂದು ನಾಗಮೋಹನದಾಸ್ ತಿಳಿಸಿದರು.
ಹಿಂದೇಟು: ದೌರ್ಜನ್ಯಕ್ಕೊಳಗಾದ ಶೇ.10ರಷ್ಟು ಮಂದಿ ಮಾತ್ರವೇ ನ್ಯಾಯಾಲಯಕ್ಕೆ ಬರುತ್ತಿದ್ದಾರೆ. ಆದರೆ, ಶೇ.90ರಷ್ಟು ಜನರು ಅನ್ಯಾಯವಾದರೂ ನ್ಯಾಯಾಲಯಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಕಾನೂನಿನ ಅರಿವು ಇಲ್ಲದಿರುವುದೇ ಇದಕ್ಕೆ ಕಾರಣವಾಗಿದೆ ಎಂದು ಹೇಳಿದರು.
ದೇಶದಲ್ಲಿ 1947ರ ವೇಳೆಗೆ ಶೇ.25ರಷ್ಟು ಅಕ್ಷರಸ್ಥರಿದ್ದರು. 2012ರಲ್ಲಿ ಶೇ.75ರಷ್ಟು ಅಕ್ಷರಸ್ಥರಿದ್ದಾರೆ. ಆದರೆ, ಕಾನೂನು ಶಿಕ್ಷಣದ ಪದವೀಧರರ ಸಂಖ್ಯೆ ಕಡಿಮೆ ಇದೆ. ಕಾನೂನು ಶಿಕ್ಷಣವನ್ನು ಪಡೆದು, ವಕೀಲರಾಗಲು ಗುಣಾತ್ಮಕ ಶಿಕ್ಷಣವನ್ನು ಪಡೆಯಬೇಕು. ಕಾನೂನು ಶಿಕ್ಷಣದ ಜತೆಗೆ ಇನ್ನಿತರೆ ಕ್ಷೇತ್ರಗಳ ಮಾಹಿತಿಗಳನ್ನು ತಿಳಿದುಕೊಂಡು ತಮ್ಮ ಅರಿವಿನ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ನ್ಯಾಯಾಲಯಗಳಲ್ಲಿ ದಾಖಲಾಗುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಇಲ್ಲದಿದ್ದರೆ ಕಕ್ಷಿದಾರರು ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಕಳೆದುಕೊಳ್ಳುತ್ತಾರೆ. ಪ್ರಕರಣಗಳ ಇತ್ಯರ್ಥ ವಿಳಂಬವಾಗುವುದರಿಂದ ಸಮಯ, ಕ್ಷಕ್ಷಿದಾರರ ಹಣ, ಸಾಕ್ಷಿ ನಾಶ, ಭ್ರಷ್ಟಾಚಾರ ಉಂಟಾಗುತ್ತದೆ. ಅಲ್ಲದೆ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುವ ಜತೆಗೆ ಅರಾಜಕತೆ ಉಂಟಾಗುತ್ತದೆ ಎಂದು ಅವರು ಹೇಳಿದರು.
ಉತ್ತಮ ದರ್ಜೆಯಲ್ಲಿ ತೇರ್ಗಡೆ: ಕಾನೂನು ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ತಮಗೆ ನಿರ್ದಿಷ್ಟಪಡಿಸಿರುವ ಪಠ್ಯಕ್ರಮವನ್ನು ಅಧ್ಯಯನ ಮಾಡಿ ಉತ್ತಮ ದರ್ಜೆಯಲ್ಲಿ ತೇರ್ಗಡೆಯಾಗಬೇಕು. ವಿಚಾರ ಸಂಕಿರಣಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬಹುದು ಎಂದು ಕಾಲೇಜಿನ ಪ್ರಾಂಶುಪಾಲ ಎ.ಗೋಪಾಲ ಅಭಿಪ್ರಾಯಪಟ್ಟರು.
ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಹಾಗೂ ಕಾನೂನು ಅಧ್ಯಯನದ
ಡೀನ್.ಕೆ.ಎಂ.ಎಚ್.ರಾಯಪ್ಪ ಅವರನ್ನು ಸನ್ಮಾನಿಸಲಾಯಿತು. ಕಾನೂನು ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಎಚ್.ಕೆ. ಜಗದೀಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಎಚ್.ಕುಮಾರ್, ವಕೀಲ ಎಚ್.ಬಿ. ಶಿವಣ್ಣ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

