ನಗರಸಭಾ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರ ಸ್ವೀಕಾರ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆ ನೂತನ ಅಧ್ಯಕ್ಷ- ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಶಂಶುನ್ನೀಸಾ ಮತ್ತು ಮಂಜುಳಾ ಅವರು ಸೋಮವಾರ ನಗರಸಭೆ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿದರು.
ತಮ್ಮ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿದ ನಗರಸಭಾಧ್ಯಕ್ಷೆ ಶಂಶುನ್ನೀಸಾ, ಎಲ್ಲರ ವಿಶ್ವಾಸ ಮತ್ತು ಬೆಂಬಲದಿಂದ ಅಪೂರ್ವ ಅವಕಾಶ ದೊರೆತಿದೆ. ಈ ಅವಕಾಶವನ್ನು ನಗರದ ಸರ್ವಾಂಗೀಣ ಪ್ರಗತಿಯ ಹಿತಾಸಕ್ತಿಯಲ್ಲಿ ಬಳಸಿಕೊಳ್ಳಲಾಗುವುದು ಎಂದರು.
ನಗರಸಭಾ ಉಪಾಧ್ಯಕ್ಷೆ ಮಂಜುಳಾ ಮಾತನಾಡಿ, ದೊಡ್ಡಬಳ್ಳಾಪುರ ನಗರದ ಹತ್ತು ಹಲವು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಕೈಗೊಳ್ಳಬೇಕಿದೆ. ಈ ಎಲ್ಲ ಉದ್ದೇಶಗಳ ಸಾಫಲ್ಯಕ್ಕೆ ಎಲ್ಲ ಸದಸ್ಯರು ಮತ್ತು ಸಾರ್ವಜನಿಕರ ಸಹಕಾರ ಬಹುಮುಖ್ಯ. ಭ್ರಷ್ಟಾಚಾರ ರಹಿತ ಆಡಳಿತ ನಮ್ಮ ಆದ್ಯತೆಯಾಗಬೇಕು ಎಂದರು.
ನಗರಸಭೆ ಹಿರಿಯ ಸದಸ್ಯ ತ.ನ.ಪ್ರಭುದೇವ್ ಮತ್ತು ಕನ್ನಡಪಕ್ಷದ ಅಧ್ಯಕ್ಷ ಸಂಜೀವನಾಯಕ್ ಮಾತನಾಡಿ, ನಗರ ವ್ಯಾಪ್ತಿಯಲ್ಲಿ ಹದಗೆಟ್ಟಿರುವ ಆಡಳಿತ ವ್ಯವಸ್ಥೆಯನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ದೊಡ್ಡ ಮಟ್ಟದ ಸವಾಲುಗಳು ನೂತನವಾಗಿ ಅಧಿಕಾರಕ್ಕೆ ಬಂದಿರುವ ಎಲ್ಲ ಸದಸ್ಯರ ಮೇಲಿದೆ. ಅದಕ್ಕೆ ಪೂರಕವಾಗಿ
ಬಿಗಡಾಯಿಸಿರುವ ನೀರಿನ ಸಮಸ್ಯೆಯಿಂದ ಹೊರಬರಲು ವೈಜ್ಞಾನಿಕ ರೀತಿಯ ಯೋಜನೆಗಳನ್ನು ಹಾಕಿಕೊಳ್ಳಬೇಕಿದೆ. ಜನಸ್ನೇಹಿ ಆಡಳಿತ ನೀಡಲು ಒತ್ತು ನೀಡಬೇಕು. ಶಾಶ್ವತ ಯೋಜನೆಗಳನ್ನು ರೂಪಿಸುವ ಚಿಂತನೆ ನಡೆಯಬೇಕು. ರಸ್ತೆಗಳ ಸ್ಥಿತಿ ಸುಧಾರಿಸಬೇಕು. ಮೂಲಸೌಕರ್ಯಗಳನ್ನು ಒದಗಿಸಲು ವ್ಯವಸ್ಥಿತ ಯೋಜನೆಗಳ ಅಗತ್ಯವಿದೆ. ಜಲಮೂಲಗಳ ಸುರಕ್ಷತೆ ಮತ್ತು ನೀರಿನ ಮಿತವ್ಯಯದ ಬಗ್ಗೆ ಅರಿವು ಮೂಡಿಸಬೇಕಿದೆ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಬಿ.ಮುನೇಗೌಡ, ನಗರಸಭಾ ಸದಸ್ಯರಾದ ಆರ್.ಗೋವಿಂದರಾಜು ಸೇರಿದಂತೆ ಜೆಡಿಎಸ್, ಕನ್ನಡಪಕ್ಷ ಮತ್ತು ಕೆಲ ಪಕ್ಷೇತರ ಚುನಾಯಿತ ನಗರಸಭಾ ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಜರಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರು ಉಪಸ್ಥಿತರಿರಲಿಲ್ಲ. ಇದೇ ಸಂದರ್ಭದಲ್ಲಿ ನೂತನ ನಗರಸಭಾ ಅಧ್ಯಕ್ಷ-ಉಪಾಧ್ಯಕ್ಷರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

