ಮಗಳ ಮೇಲೆ ಅತ್ಯಾಚಾರವೆಸಗಿದ್ದ ತಂದೆಗೆ ಜೀವಾವಧಿ ಶಿಕ್ಷೆ ಕಾಯಂ
ಬೆಂಗಳೂರು: ತನ್ನ 13 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ತಂದೆಗೆ ಅಧೀನ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಕಾಯಂಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ.
ಮಗಳ ಮೇಲೆ ಅಮಾನವೀಯವಾಗಿ ಅತ್ಯಾಚಾರವೆಸಗಿರುವ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಅಧೀನ ನ್ಯಾಯಾಲಯದ ಕ್ರಮ ಸರಿಯಾಗಿದೆ. ಅಪ್ರಾಪ್ತ ಮಗಳ ಮೇಲೆ ತಂದೆ ಅತ್ಯಾಚಾರ ಎಸಗಿರುವುದು ಅತ್ಯಂತ ಅಮಾನುಷ ಕೃತ್ಯ. ಈ ಸಂಬಂಧ ಮಗಳೇ ಖುದ್ದು ಹೇಳಿಕೆ ನೀಡಿದ್ದಾಳೆ. ಯಾವುದೇ ಮಗಳು ತಂದೆಯ ಕುರಿತು ಸುಳ್ಳು ಹೇಳಿಕೆ ನೀಡುವುದಿಲ್ಲ. ಆದ್ದರಿಂದ ಆರೋಪಿ ಶಿಕ್ಷಾರ್ಹನಾಗಿದ್ದಾನೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಅಪರಾಧಿ ರವಿ ತನ್ನ ವಿರುದ್ಧದ ಶಿಕ್ಷೆಯನ್ನು ಕಡಿಮೆಗೊಳಿಸುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ.ಕೆ.ಎಲ್.ಮಂಜುನಾಥ್ ಹಾಗೂ ನ್ಯಾ.ಎಚ್.ಎಸ್.ಕೆಂಪಣ್ಣ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ತಂದೆಯಿಂದ ಮಗಳ ಮೇಲೆ ಅತ್ಯಾಚಾರ ನಡೆದಿದೆ ಎಂಬುದನ್ನು ವೈದ್ಯಕೀಯ ವರದಿಗಳು ದೃಢಪಡಿಸಿವೆ. ಬಾಲಕಿಯ ತಾಯಿ ಕೂಡ ತನ್ನ ಪತಿಯಿಂದ ನಡೆದ ಕೃತ್ಯಕ್ಕೆ ಸಾಕ್ಷಿಯಾಗಿದ್ದಾಳೆ. ಘಟನೆಗೆ ಪ್ರತ್ಯಕ್ಷ ಸಾಕ್ಷಿಯಿರುವ ಸಂದರ್ಭದಲ್ಲಿ ವಿಚಾರಣೆ ಹಾಗೂ ಅಧೀನ ನ್ಯಾಯಾಲಯದ ತೀರ್ಪಿನಲ್ಲಿ ಲೋಪದೋಷಗಳನ್ನು ಕಂಡುಹಿಡಿಯುವ ಪ್ರಶ್ನೆಯೇ ಬರುವುದಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.
ಜೀವಾವಧಿ ಶಿಕ್ಷೆಗೆ ಇಳಿಕೆ: ಆದರೆ, ಅಪರಾಧಿ ರವಿ ವಿರುದ್ಧ ಸಾಯುವರೆಗೆ ಜೈಲು ಶಿಕ್ಷೆ ವಿಧಿಸಿ ಅಧೀನ ನ್ಯಾಯಾಲಯ ಹೊರಡಿಸಿದ್ದ ಆದೇಶದಲ್ಲಿ ಕೆಲ ಮಾರ್ಪಾಡು ಮಾಡಿರುವ ಪೀಠ, ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿದೆ. ಇದರಿಂದ ರವಿ 14 ವರ್ಷಗಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

