ಸೂರ್ಯನಿಗೆ ನಮೋ ನಮಃ
ಮೈಸೂರು ಮಾಘ ಮಾಸ ಶುಕ್ಲ ಪಕ್ಷದ ಸಪ್ತಮಿ ತಿಥಿಯಂದು ಸೂರ್ಯನ ಜನ್ಮದಿನ. ಸಪ್ತಮಿ ತಿಥಿಯ ಅದಿದೇವತೆಯು ಸೂರ್ಯನೇ ಆಗಿರುವುದರಿಂದ ರಥಸಪ್ತಮಿ ದಿನವಾದ ಭಾನುವಾರ ಅರಮನೆ ಆವರಣದಲ್ಲಿ ನಡೆದ ಸಾಮೂಹಿಕ ಸೂರ್ಯ ನಮಸ್ಕಾರದಲ್ಲಿ ನೂರಾರು ಮಂದಿ ಭಾಗವಹಿಸಿ ಸೂರ್ಯನಿಗೆ ನಮಿಸಿದರು.
ಸ್ವಾಮಿ ವಿವೇಕಾನಂದ 150ನೇ ಜನ್ಮ ವರ್ಷಾಚರಣೆ ಸಮಿತಿಯು ಏರ್ಪಡಿಸಿದ್ದ ಈ ಸೂರ್ಯ ನಮಸ್ಕಾರವು ಬೆಳಗ್ಗೆ 6.30ಕ್ಕೆ ಆರಂಭವಾಯಿತು. ಮಕ್ಕಳು, ಯುವಕರು, ಗೃಹಿಣಿಯರು, ವಿದೇಶಿಯರು ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ರಾಮದಾಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮೊದಲಿಗೆ ಶಂಖನಾದ, ಪ್ರಾರ್ಥನೆ, ಸಂಕಲ್ಪ ಬೋಧನೆ, ಗಾಯತ್ರಿ ಮಂತ್ರ ಜಪಿಸಿ ಸಾಮೂಹಿಕವಾಗಿ 108 ಬಾರಿ ಸೂರ್ಯ ನಮಸ್ಕಾರ ಮಾಡಲಾಯಿತು. ನಿಯಮಬದ್ಧವಾದ ಉದಯ ಹಾಗೂ ಅಸ್ತಗಳ ಮೂಲಕ ನಮಗೆ ಶಿಸ್ತು ಬದ್ಧವಾದ ಕರ್ತವ್ಯ ಪ್ರಜ್ಞೆ, ಚೈತನ್ಯ ತುಂಬುವ ಸೂರ್ಯನ ಪೂಜೆಯೇ ಈ ದಿನದ ವಿಶೇಷ. ಈ ದಿನದಲ್ಲಿ ನಡೆಯುವ ಕೆಲಸ ಕಾರ್ಯಗಳು, ಕೋರಿಕೆಗಳು ಫಲಪ್ರದವಾಗುತ್ತವೆ ಎಂಬುದು ಜನರ ನಂಬಿಕೆ. ಆಹಾರಕ್ಕಾಗಿ, ರೋಗ ನಿವಾರಣೆಗಾಗಿ ಸೂರ್ಯೋಪಾಸನೆ ಮಾಡಬೇಕೆಂದು ಸ್ಕಂದ, ವರಾಹ ಪುರಾಣಗಳಲ್ಲಿ ಹೇಳಲಾಗಿದೆ.
ವೈವಸ್ವತ ಮನ್ವಂತರದ ಆರಂಭದ ದಿನ. ಸೂರ್ಯನು ಉತ್ತರಾಯಣನಾಗಿ ಸಪ್ತಾಶ್ವಗಳ ರಥವನ್ನೇರಿ, ಉತ್ತರ ದಿಕ್ಕಿನ ಮಾರ್ಗದಲ್ಲಿ ಹೊರಟ ದಿನ. ರಥ ಸಪ್ತಮಿ ದಿವಸ ರೋಗ ನಿವಾರಣೆಯನ್ನು, ದೇಹದಾರ್ಢ್ಯ ಹಾಗೂ ಆರೋಗ್ಯ ಬಯಸುವವರು ಸೂರ್ಯನ ಆರಾಧನೆ ಮಾಡಬೇಕೆಂಬ ನಿಯಮವಿದೆ. ರೋಗಾಣು ನಾಶಪಡಿಸುವ ಶಕ್ತಿ ಸೂರ್ಯನ ಕಿರಣಗಳಲ್ಲಿವೆ. ಬೆಳಗಿನ ಹಾಗೂ ಸಂಜೆಯ ಸೂರ್ಯ ಕಿರಣಗಳಿಂದ ಆರೋಗ್ಯ ವರ್ಧನೆಯಾಗುತ್ತದೆ. ಆದ್ದರಿಂದ ಯೋಗಾಸನಗಳಲ್ಲಿ ಮೊದಲ ಪ್ರಾಶಸ್ತ್ಯವನ್ನು ಸೂರ್ಯ ನಮಸ್ಕಾರಕ್ಕೆ ನೀಡಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

