ಬೆಂಗಳೂರು ನಗರ

'ಪರಿಶಿಷ್ಟರ ಹಾಸ್ಟೆಲ್‌ಗಳಿಗೆ ರು. 200 ಕೋಟಿ ಅನುದಾನ'

Published On :

ಬೆಂಗಳೂರು: ಹಿಂದುಳಿದ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿ ನಿಲಯಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಬಜೆಟ್‌ನಲ್ಲಿ 200 ಕೋಟಿ ಅನುದಾನ ನಿಗದಿಪಡಿಸುವುದಾಗಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಭರವಸೆ ನೀಡಿದ್ದಾರೆ.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಬುಧವಾರ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ 'ರಾಜ್ಯದ ಹಾಸ್ಟೆಲ್ ವಿದ್ಯಾರ್ಥಿಗಳ ಸಮಾವೇಶ ಹಾಗೂ ಸರ್ವೇಕ್ಷಣಾ ವರದಿ ಬಿಡುಗಡೆ' ಕಾರ್ಯಕ್ರಮದಲ್ಲಿ 'ರೋಗಗ್ರಸ್ತ ಹಾಸ್ಟೆಲ್‌ಗಳು' ಎಂಬ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಹಾಸ್ಟೆಲ್‌ಗಳ ಪರಿಸ್ಥಿತಿ ನನಗೆ ತಿಳಿದಿದೆ. ಹೀಗಾಗಿ ಎಲ್ಲಾ ಹಾಸ್ಟೆಲ್‌ಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಈ ಬಾರಿ ಬಜೆಟ್‌ನಲ್ಲಿ ಪ್ರತ್ಯೇಕವಾಗಿ 200 ಕೋಟಿ ನೀಡುವಂತೆ ಮುಖ್ಯಮಂತ್ರಿಯವರ ಬಳಿ ಚರ್ಚಿಸುತ್ತೇನೆ. ಇದಕ್ಕೂ ಮೊದಲು ಎರಡು ದಿನದೊಳಗೆ ಹಾಸ್ಟೆಲ್ ವಿದ್ಯಾರ್ಥಿಗಳು ಮತ್ತು  ವಾರ್ಡನ್‌ಗಳ ಜೊತೆ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತೇನೆ ಎಂದರು.
ನಾವು ಹಿಂದುಳಿದಿಲ್ಲ: ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳನ್ನು ಜನರು ಹಿಂದುಳಿದ ಜಾತಿಯವನು ಎಂಬ ದೃಷ್ಟಿಯಲ್ಲೇ ನೋಡುತ್ತಾರೆ. ಎಲ್ಲಿಯವರೆಗೂ ಹಿಂದುಳಿದಿದ್ದೇವೆ ಎಂಬ ಮನೋಸ್ಥಿತಿಯಿಂದ ನಾವು ಹೊರ ಬರುವುದಿಲ್ಲವೋ ಅಲ್ಲಿಯವರೆಗೂ ಸಮಾಜದಲ್ಲಿ ಸಮಾನವಾಗಿ ಬದುಕಲು ಸಾಧ್ಯವಿಲ್ಲ ಎಂಬ ವಿಚಾರವನ್ನು ಎಲ್ಲಾ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕೆಂದು ಹೇಳಿದರು.
ಸಚಿವ ನಾರಾಯಣಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪ್ರತಿಯೊಂದು ಹಕ್ಕನ್ನು ಹೋರಾಟದಿಂದಲೇ ಪಡೆಯಬೇಕಾದ ಪರಿಸ್ಥಿತಿ ಉಂಟಾಗಿದೆ.  ನಾನು ಅಧಿಕಾರಕ್ಕೆ ಬಂದ ಬಳಿಕ 25 ವರ್ಷಗಳಿಂದಲೂ ಪರಿಷ್ಕೃತಗೊಳ್ಳದ ವಿದ್ಯಾರ್ಥಿ ವೇತನ ಪರಿಷ್ಕರಿಸಿದ್ದೇನೆ ಎಂದರು.
ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ, ಎಸ್‌ಸಿ, ಎಸ್‌ಟಿ, ಬಿಸಿಎಂ ಹಾಸ್ಟೆಲ್‌ಗಳ ಸರ್ವೇಕ್ಷಣೆಯ ರಾಜ್ಯ ಸಂಚಾಲಕ ಪ್ರಶಾಂತ್ ಪವಾರ್, ಎಬಿವಿಪಿ ಸುನೀಲ್ ಅಂಬೇಕರ್, ರಮೇಶ್ ಕೆ, ಡಾ.ಬಿ.ವಿ. ವಸಂತ ಕುಮಾರ್, ವಿನಯ್ ಬಿದಿರೆ, ರಘು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.