ಬೆಂಗಳೂರು: ಬಾಣಸವಾಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ ಬಿಬಿಎಂಪಿ ನೌಕರ ಸೇರಿ ಇಬ್ಬರು ಮೃತಪಟ್ಟಿದ್ದಾರೆ.
ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತ ಪಟ್ಟಿದ್ದಾರೆ. ಕಮ್ಮನಹಳ್ಳಿ ಮುಖ್ಯರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಕಾಚರಕನಳ್ಳಿ ನಿವಾಸಿ ಮಂಚೇಗೌಡ(55) ಮೃತರು. ಇವರು ಬಿಬಿಎಂಪಿಯಲ್ಲಿ ಕ್ರಿಮಿನಾಶಕ ವಿಭಾಗದಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು.
ಮನೆಗೆ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ತೀವ್ರ ಗಾಯಗೊಂಡಿದ್ದ ಇವರನ್ನು ಅಪಘಾತವೆಸಗಿದ ಕಾರು ಚಾಲಕ ಆಸ್ಪತ್ರೆಗೆ ಸಾಗಿಸಿದ್ದರು. ಅದರೂ ಚಿಕಿತ್ಸೆ ಫಲಿಸದೆ ತಡರಾತ್ರಿ ಮೃತಪಟ್ಟಿದ್ದಾರೆ. ಕಾರು ಚಾಲಕನನ್ನು ಬಂಧಿಸಿರುವ ಪೊಲೀಸರು ವಾಹನ ವಶಕ್ಕೆ ತೆಗೆದುಕೊಂಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ನಿಂತಿದ್ದ ಕಂಟೈನರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ, ಆ ಕಾರಿನಲ್ಲಿದ್ದ ಪ್ರಯಾಣಿಕ ಮೃತಪಟ್ಟಿದ್ದಾರೆ. ಆಂಧ್ರದ ಚಿತ್ತೂರು ಮೂಲದ ರಾಜೇಶ್(27) ಮೃತರು. ಬಾಬುಸಾಬ್ ಪಾಳ್ಯದ ಮೇಲ್ಸೇತುವೆ ಬಳಿ ಸೋಮವಾರ ರಾತ್ರಿ ಅಪಘಾತ ಸಂಭವಿಸಿದೆ.
ಎಲೆಕ್ಟ್ರಾನಿಕ್ ಸಿಟಿಯ ಐಟಿ ಕಂಪನಿಯ ಕಚೇರಿಯಲ್ಲಿ ರಾಜೇಶ್ ಹಿರಿಯ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದರು. ಸೋಮವಾರ ರಾತ್ರಿ ಕೆಲಸ ಮುಗಿಸಿ ಅವರು ಖಾಸಗಿ ಕ್ಯಾಬ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.
ಕಾರು ಚಾಲಕ ವೆಂಕಟರಮಣ (25) ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆದು ಹಿಂತಿರುಗಿದ್ದಾರೆ. ಲಾರಿಯನ್ನು ಮೇಲ್ಸೇತುವೆ ಮೇಲೆ ನಿಲುಗಡೆ ಮಾಡಲಾಗಿತ್ತು, ಅದನ್ನು ಕಾಣದ ಕಾರು ಚಾಲಕ ಡಿಕ್ಕಿ ಹೊಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement