ಕ.ಪ್ರ.ವಾರ್ತೆ ್ಣ ಕೃಷ್ಣರಾಜಪುರ ್ಣ ಮಾ.29
ಭಾರತೀಯ ಪ್ರವಾಸೋದ್ಯಮದಲ್ಲಿ ಕರ್ನಾಟಕವನ್ನು ಪ್ರವಾಸಿ ಕೇಂದ್ರವನ್ನಾಗಿ ಮಾಡಲು ಶ್ರಮಿಸುವುದಾಗಿ ಖ್ಯಾತ ತೆಲುಗು ಚಲನಚಿತ್ರ ನಟ ಹಾಗೂ ಕೇಂದ್ರ ಪ್ರವಾಸೋದ್ಯಮ ಸಚಿವ ಚಿರಂಜೀವಿ ಹೇಳಿದರು.
ಇಲ್ಲಿನ ಕೇಂಬ್ರಿಡ್ಜ್ ತಾಂತ್ರಿಕ ಮಹಾ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಚಿಗುರು-2013 ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ನಶಿಸಿ ಹೋಗಿರುವ ಕರ್ನಾಟಕದ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಲು ರಾಜ್ಯದ ಸಚಿವರು ಮತ್ತು ಕೇಂದ್ರ ಸಚಿವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಗುರಿಯಿಟ್ಟುಕೊಂಡು ವ್ಯಾಸಂಗ ಮಾಡುವುದರ ಮೂಲಕ ತಮ್ಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂದರು. ಕೇಂದ್ರ ಸರ್ಕಾರ ತಮಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಉಳಿದ ತಮ್ಮ ಅಧಿಕಾರಾವಧಿಯಲ್ಲಿ ದೇಶದ ಪ್ರವಾಸೋದ್ಯಮವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತೇನೆ ಎಂದು ಹೇಳಿದರು.
ಇದೇ ವೇಳೆ ತಮ್ಮ 150 ನೇ ಚಿತ್ರದ ಬಗ್ಗೆ ಪ್ರತಿಕ್ರಿಯಿಸಿದ ಅವರು ಸಮಾಜಕ್ಕೆ ಮಾದರಿಯಾಗುವ ಕಥೆ ಸಿಕ್ಕಾಗ ಖಂಡಿತ ಅಭಿನಯಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಆಂಧ್ರಪ್ರದೇಶ ಕಂದಾಯ ಸಚಿವ ರಘುವೀರ್ರೆಡ್ಡಿ, ಶಾಸಕ ನಾಗೇಶ್ವರ್ರಾವ್, ಕಾಲೇಜಿನ ವ್ಯವಸ್ಥಾಪಕ ಮೋಹನ್ಬಾಬು ಉಪಸ್ಥಿತರಿದ್ದರು.