ಬಳ್ಳಾರಿ

ಮತದಾನ ಜಾಗೃತಿ: ಆರೋಪ ಬರದಂತೆ ಎಚ್ಚರ ವಹಿಸಿ

Published On :

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಏ. 12
ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮತದಾನ ಜಾಗೃತಿ ಕಾರ್ಯದಲ್ಲಿ ತೊಡಗಿರುವ ಸಂಘ-ಸಂಸ್ಥೆಗಳು ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗದಂತೆ ಜಾಗೃತಿ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಎಂ. ಮಂಜುನಾಥ ನಾಯಕ್ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮತದಾರರ ಜಾಗೃತಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮತದಾರರು ಮೇ 5ರಂದು ಮತಗಟ್ಟೆಗಳಿಗೆ ಆಗಮಿಸಿ, ಮತದಾನ ಮಾಡುವಂತೆ ಜಾಗೃತಿ ಮೂಡಿಸಬೇಕು. ಬೀದಿ ನಾಟಕ ಮತ್ತಿತರ ಪ್ರಮುಖ ಜಾಗೃತಿ ಕಾರ್ಯಕ್ರಮಗಳನ್ನು ಮತದಾನ ದಿನಾಂಕ ಸಮೀಪಿಸುವ ಸಂದರ್ಭದಲ್ಲಿ ತೀವ್ರಗೊಳಿಸಬೇಕು. ಮತದಾನ ಆರಂಭವಾಗುವ 48 ಗಂಟೆ ಮುಂಚೆ ಪೂರ್ಣಗೊಳಿಸಿ, ಆರೋಪಗಳು ಬರದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಜಾಗೃತಿ ಕಾರ್ಯಕ್ರಮದಿಂದ ಶೇ. 20ರಷ್ಟು ಮತದಾನ ಪ್ರಮಾಣ ಹೆಚ್ಚಳವಾಗುವಂತೆ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ನಿರ್ದೇಶನ ನೀಡಿದೆ. ಹಿಂದಿನ ಚುನಾವಣೆಗಳಲ್ಲಿ ಸರಾಸರಿಗಿಂತ ಕಡಿಮೆ ಮತದಾನವಾಗಿರುವ ಪ್ರದೇಶಗಳಲ್ಲಿ ವಿಶೇಷ ಗಮನ ಹರಿಸಿ ಜಾಗೃತಿ ಮೂಡಿಸಲಾಗುವುದು. ಆಕರ್ಷಕ ಫಲಕಗಳನ್ನು ಅಳವಡಿಸಿರುವ ವಾರ್ತಾ ಇಲಾಖೆಯ ಕ್ಷೇತ್ರ ಪ್ರಚಾರ ವಾಹನದೊಂದಿಗೆ ವಸ್ತುಪ್ರದರ್ಶನ, ಸಿನಿಮಾ ಪ್ರದರ್ಶನ, ಇವಿಎಂ ಮೂಲಕ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸಲಾಗುವುದು. ತಾಪಂ ಕಾರ್ಯನಿರ್ವಹಣಾಧಿಕಾರಿ ಇದರ ನೇತೃತ್ವ ವಹಿಸಲಿದ್ದು, ತಮ್ಮ ವ್ಯಾಪ್ತಿಯಲ್ಲಿ ಕಡಿಮೆ ಮತದಾನವಾಗಿರುವ ಕಡೆ ವಿಶೇಷ ಪ್ರಚಾರಾಂದೋಲನ ನಡೆಸುವಂತೆ ಅವರು ಸೂಚಿಸಿದರು.
ಪೋಷಕರಿಗೆ ಪ್ರತಿಜ್ಞಾವಿಧಿ: ಎಲ್ಲ ಗ್ರಾಮಗಳ ಪ್ರಮುಖ ಸ್ಥಳಗಳಲ್ಲಿ ಪೋಸ್ಟರ್ಸ್‌ಗಳನ್ನು ಅಳವಡಿಸಬೇಕು. ಟಾಂಟಾಂ ಮೂಲಕ ಜಾಗೃತಿ ಮೂಡಿಸಲಾಗುವುದು. ಎಲ್ಲ ಶಾಲೆಗಳ ವಿದ್ಯಾರ್ಥಿಗಳ ಪೋಷಕರು ಮತದಾನ ಮಾಡುವಂತೆ ಪ್ರತಿಜ್ಞಾವಿಧಿಯನ್ನು ಬರವಣಿಗೆ ಮೂಲಕ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಕ್ರಮ ಕೈಗೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆಗಳ ವೆಬ್‌ಸೈಟ್ ಮೂಲಕವೂ ಜಾಗೃತಿ ಮೂಡಿಸಲಾಗುತ್ತಿದೆ. ಇದರಿಂದ ಮತದಾರರ ಪಟ್ಟಿಯಲ್ಲಿ ನೂತನ ಮತದಾರರ ಸಂಖ್ಯೆ ಹೆಚ್ಚಳವಾಗಲಿದೆ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಟಿ. ನಾರಾಯಣಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಟೀಲ್, ಪಾಲಿಕೆ ಆಯುಕ್ತ ಡಿ.ಎಲ್. ನಾರಾಯಣ್, ಜಿಲ್ಲಾ ವಾರ್ತಾಧಿಕಾರಿ ಎಚ್. ಶ್ರೀನಿವಾಸ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ.ಎಸ್. ಕಲಾದಗಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ವೀರಭದ್ರಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್, ಹೊಸಪೇಟೆ ನಗರಸಭೆ ಆಯುಕ್ತ ರಂಗಸ್ವಾಮಿ, ತಾಲೂಕು ಪಂಚಾಯಿತಿ ಎಲ್ಲ ಕಾರ್ಯನಿರ್ವಣಾಧಿಕಾರಿಗಳು ತಾವು ಕೈಗೊಂಡ ಪ್ರಗತಿ ವರದಿಯನ್ನು ವಿವರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.